ಆಸ್ಪತ್ರೆಗೆ ಹಿರಿಯ ಸಿವಿಲ್ ನ್ಯಾ.ಎಂ.ಶ್ರೀಧರರವರ ಭೇಟಿ: ಪರಿಶೀಲನೆ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಜು.11:- ತಾಲ್ಲೂಕು ಸಂತೇಮರಹಳ್ಳಿಯಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಅವರು ಇತ್ತೀಚೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಬಂದಿರುವ ರೋಗಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದೆಯೇ ಎಂಬ ಬಗ್ಗೆ ಪರಿಶೀಲಿಸಿದರು. ಮುಂಗಾರು ಮಳೆ ಹಾಗೂ ಅತಿವೃಷ್ಟಿ ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ರೋಗಿಗಳಿಗೆ ತ್ವರಿತವಾಗಿ ವೈದ್ಯಕೀಯ ಸೇವೆಯನ್ನು ನೀಡಲು ಆಸ್ಪತ್ರೆಯಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಅಗತ್ಯ ಔಷಧಗಳ ವ್ಯವಸ್ಥೆ ಬಗ್ಗೆ ಪರಿಶೀಲಿಸಿದರು.
ವಾರ್ಡ್‍ಗಳಿಗೆ ಭೇಟಿ ನೀಡಿ ಅಲ್ಲಿನ ಚಿಕಿತ್ಸೆ, ಔಷಧೋಪಚಾರಗಳ ಬಗ್ಗೆ ರೋಗಿಗಳಿಂದ ಮಾಹಿತಿ ಪಡೆದರು. ಸ್ವಚ್ಚತೆ, ಕುಡಿಯುವ ನೀರಿನ ವ್ಯವಸ್ಥೆಗೆ ಸಂಬಂಧಿಸಿದಂತೆ ಕಲ್ಪಿಸಲಾಗಿರುವ ಸೌಲಭ್ಯಗಳನ್ನು ವೀಕ್ಷಿಸಿದರು. ಆಸ್ಪತ್ರೆಯಲ್ಲಿ ಉತ್ತಮವಾಗಿ ವೈದ್ಯಕೀಯ ಚಿಕಿತ್ಸೆ ಸೇವೆ ಸಿಗುತ್ತಿದೆ ಎಂದು ದಾಖಲಾಗಿರುವ ರೋಗಿಗಳು ತಿಳಿಸಿದರು.
ತುರ್ತು ಅವಶ್ಯಕತೆಗಾಗಿ ಆಮ್ಲಜನಕ ಪ್ಲಾಂಟ್‍ನ್ನು ಕೂಡಲೇ ದುರಸ್ತಿಗೊಳಿಸಬೇಕು. ಆಸ್ಪತ್ರೆಯ ವೈಧ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರ ಕಾರ್ಯವೈಖರಿ ಬಗ್ಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈ ಸೇವಾ ಮನೋಭಾವನೆ ಮುಂದುವರೆಸಿಕೊಂಡು ಹೋಗಬೇಕೆಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.
ಕಾನೂನು ನೆರವಿನ ಅಗತ್ಯವಿದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಅವರು ಸಲಹೆ ಮಾಡಿದರು.