ಆಸ್ಪತ್ರೆಯಲ್ಲಿ ಅಗ್ನಿ ದುರಂತ 5 ಮಂದಿ ಸಜೀವ ದಹನ

ನವದೆಹಲಿ,ಏ.೨೮- ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ನಾಲ್ವರು ರೋಗಿಗಳು ಸುಟ್ಟು ಕರಕಲಾಗಿರುವ ದಾರುಣ ಘಟನೆ ಸಂಭವಿಸಿದೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ.
ಇತ್ತೀಚೆಗೆ ಮುಂಬೈನ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ೧೫ ಮಂದಿ ಸಾವನ್ನಪ್ಪಿದ್ದ ಘಟನೆ ಇನ್ನು ಮಾಸುವ ಮುನ್ನವೆ ಥಾಣೆ ಜಿಲ್ಲೆಯಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದೆ.
ಒಂದೆಡೆ ಆಮ್ಲಜನಕ, ಹಾಸಿಗೆ ದೊರೆಯದೆ ರೋಗಿಗಳು ಪರದಾಡುತ್ತಿದ್ದಾರೆ. ಮತ್ತೊಂದೆಡೆ ಆಸ್ಪತ್ರೆಗಳಲ್ಲಿ ಆಗಿಂದ್ದಾಗ್ಗೆ ಅಗ್ನಿ ಅವಘಡಗಳು ಸಂಭವಿಸುತ್ತಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.
ಬೆಳಗಿನ ಜಾವ ೩.೪೦ರ ಸಮಯದಲ್ಲಿ ಮುಂಬ್ರಾದ ಕೌಸಾದಲ್ಲಿರುವ ಪ್ರೈಮ್ ಡಿಟಿಕೇರ್ ಆಸ್ಪತ್ರೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಐಸಿಯುನಲ್ಲಿದ್ದ ೬ ಮಂದಿಯನ್ನು ಸುರಕ್ಷಿತವಾಗಿ ಪಾರು ಮಾಡಲಾಗಿದೆ.
ಬೆಂಕಿಯ ಕೆನ್ನಾಲಿಗೆಗೆ ಆಸ್ಪತ್ರೆಯ ಮೊದಲನೆ ಮಹಡಿ ಸಂಪೂರ್ಣವಾಗಿ ನಾಶವಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಅವಘಡದಲ್ಲಿ ಯಾವುದೇ ಕೋವಿಡ್ ರೋಗಿಗಳು ಸಾವನ್ನಪ್ಪಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಮೂಲಗಳ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಈ ತನಿಕೆಯಿಂದಷ್ಟೇ ನಿಖರ ಮಾಹಿತಿ ಲಭ್ಯವಾಗಲಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ಠಾಕ್ರೆಗೆ ಮಾಹಿತಿ ನೀಡಲಾಗಿದ್ದು, ಘಟನೆಯಲ್ಲಿ ಮೃತಪಟ್ಟ ಕುಟುಂಬ ಸದಸ್ಯರಿಗೆ ತಲಾ ೫ ಲಕ್ಷ ರೂ. ಪರಿಹಾರ ಪ್ರಕಟಿಸಲಾಗಿದ್ದು, ಗಾಯಾಳುಗಳಿಗೆ ತಲಾ ೧ ಲಕ್ಷ ರೂ. ಪ್ರಕಟಿಸಲಾಗಿದೆ.
ಘಟನೆಗೆ ಸಂಬಂಧಪಟ್ಟಂತೆ ಹಿರಿಯ ಪೊಲೀಸ್ ಹಾಗೂ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದ್ದು, ಘಟನೆ ಕುರಿತು ತನಿಖೆ ನಡೆಸಿ ಸರ್ಕಾರಕ್ಕೆ ಮಾಹಿತಿ ನೀಡಲಿದ್ದಾರೆ.
ಕಳೆದವಾರ ಮುಂಬೈನ ವಿರಾರ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ೧೪ ಮಂದಿ ಕೊರೊನಾ ರೋಗಿಗಳು ಮೃತಪಟ್ಟಿದ್ದರು.