ಆ.11 ರಿಂದ 17ರ ವರೆಗೆ ಪ್ರತಿ ಮನೆಯಲ್ಲಿ ರಾಷ್ಟ್ರಧ್ವಜ ಹಾರಿಸಿ

ಬೀದರ್:ಜು.20: ಸ್ವಾತಂತ್ರ್ಯದ 75ರ ಸಂಭ್ರಮದ ಭಾಗವಾಗಿ ಆಗಸ್ಟ್.11 ರಿಂದ 17 ರವರೆಗೆ ದೇಶದ ಪ್ರತಿ ಮನೆ ಮನೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ದೇಶದ ಭಕ್ತಿ ಬಿಂಬಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಹರ್ ಘರ್ ತಿರಂಗಾ ಕುರಿತು ಕರೆದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದೇಶದ್ಯಾಂತ ಭಾರತ ಸ್ವಾತಂತ್ರ್ಯದ 75ರ ಸಂಭ್ರಮದ ಭಾಗವಾಗಿ ಕೇಂದ್ರ ಸರ್ಕಾರವು ಹರ್ ಘರ್ ತಿರಂಗಾ ಎಂಬ ಘೋಷ ವಾಕ್ಯದೊಂದಿಗೆ ಅಸಂಖ್ಯಾತ ಹೋರಾಟ, ತ್ಯಾಗ ಬಲಿದಾನಗಳ ಕಾರಣದಿಂದ ದಾಸ್ಯದ ಸಂಕೋಲೆಯಿಂದ ಬಿಡುಗಡೆಯಾದ ಭಾರತಾಂಬೆಗೆ ಪ್ರಾಪ್ತಿಯಾದ ಸ್ವಾತಂತ್ರ್ಯಕ್ಕೆ ಈಗ ಅಮೃತ ಮಹೋತ್ಸವದ ಸಂಭ್ರಮ, ಎಲ್ಲರನ್ನು ಸದಾ ಸ್ಮರಿಸುವುದು ಹಾಗೂ ಗೌರವಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಅದಕ್ಕಾಗಿ ಆಗಸ್ಟ್ 11 ರಿಂದ 17 ರವರೆಗೆ ದೇಶದ ಪ್ರತಿ ಮನೆಯಲ್ಲಿ ರಾಷ್ಟ್ರಧ್ವಜ ಹಾರಿಸಿ ದೇಶಭಕ್ತಿ ಬಿಂಬಿಸಬೇಕೆಂದು ಹೇಳಿದರು.
ಈ ಕಾರ್ಯಕ್ರಮ ಜಿಲ್ಲಾ ಪಂಚಾಯತ, ತಾಲ್ಲೂಕ ಪಂಚಾಯತ ಮತ್ತು ಗ್ರಾಮ ಪಂಚಾಯತಗಳಿಂದ ತಮ್ಮ ಕಾರ್ಯ ವ್ಯಾಪ್ತಿಯ ರಾಜ್ಯ ಸರ್ಕಾರದ ಸರ್ಕಾರಿ, ಅರೆ ಸರ್ಕಾರಿ, ನಿಗಮ ಮಂಡಳಿಗಳು ಸಾರ್ವಜನಿಕ ಉದ್ಯಮಗಳು ಸ್ವ ಸಹಾಯ ಗುಂಪುಗಳು ನಾಗರಿಕ ಸಂಸ್ಥೆಗಳು ಸಾರ್ವಜನಿಕರು, ಶಾಲಾ, ಕಾಲೇಜು ಮಕ್ಕಳು ಸೇರಿದಂತೆ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಹೇಳಿದರು.
ಬೀದರ ಜಿಲ್ಲೆಯ ಒಟ್ಟು ನಾಲ್ಕು ಲಕ್ಷ ಮನೆಗಳಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಎರಡು ಲಕ್ಷ 75 ಸಾವಿರ ಮತ್ತು ನಗರ ಪ್ರದೇಶಗಳಲ್ಲಿ ಒಂದು ಲಕ್ಷ 25 ಸಾವಿರ ಹಾಗೂ ಪ್ರತಿ ಗ್ರಾಮ ಪಂಚಾಯತಗೆ 1500 ರಾಷ್ಟ್ರ ಧ್ವಜಗಳನ್ನು ವಿತರಿಸಲಾಗುತ್ತದೆ ಎಂದು ಹೇಳಿದರು.
ಗ್ರಾಮೀಣ ಭಾಗದಲ್ಲಿಯೂ ಈ ಕುರಿತು ಜನರಿಗೆ ಜಾಗೃತಿ ಮೂಢಿಸಿ ಪ್ರತಿ ಮನೆ ಮನೆಯಲ್ಲಿ ರಾಷ್ಟ್ರಧ್ವಜ ಸಾರ್ವಜನಿಕರು ತಮ್ಮ ಮನೆಗಳ ಮೇಲೆ ಸ್ವಂತ ಖರ್ಚಿನಲ್ಲಿ ಖರೀದಿಸಿ ಆಗಸ್ಟ್ 12 ರಿಂದ 17 ರವರೆಗೆ ಹಾರಿಸಬೇಕೆಂದು ಜಿಲ್ಲಾಧಿಕಾರಿಗಳು ಹೇಳಿದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ., ಅಪರ ಜಿಲ್ಲಾಧಿಕಾರಿ ಶಿವುಕುಮಾರ ಶೀಲವಂತ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ತಹಸೀಲ್ದಾರರು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.