ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು, ಜು.20- ಕಾಲೇಜು ಹಾಸ್ಟೆಲ್‍ನಲ್ಲಿಯೇ ಇಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ
ಕೆಂಗೇರಿಯಲ್ಲಿ ನಡೆದಿದೆ.
ಜೆಎಸ್‍ಎಸ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಶಿವಾನಿ (21)ಆತ್ಮಹತ್ಯೆ ಮಾಡಿಕೊಂಡವರು.
ಶಿವಾನಿ ಇಂದು ಪರೀಕ್ಷೆಗೆ ಹಾಜರಾಗದೆ ಹಾಸ್ಟೆಲ್‍ನ ಕೋಣೆಯಲ್ಲಿನ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಧ್ಯಾಹ್ನ ಹಾಸ್ಟೆಲ್ ವಾರ್ಡನ್ ಹೋಗಿ ನೋಡಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.
ಕೂಡಲೇ ವಾರ್ಡನ್ ಅವರು ಕೆಂಗೇರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಕಾಲೇಜು ಪ್ರಿನ್ಸಿಪಾಲ್ ಭೀಮಾಸೇನ ಅವರು ಕೆಂಗೇರಿ ಠಾಣೆಗೆ ದೂರು ನೀಡಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಇದುವರೆಗೂ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಸದ್ಯ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.