ಇಂಡಿಗೋ ವಿಮಾನ ನಿಲ್ದಾಣದ ವ್ಯವಸ್ಥಾಪಕ ಗುಂಡಿಗೆ ಬಲಿ

ಪಾಟ್ನಾ,ಜ.೧೩- ಬಿಹಾರದ ಪಾಟ್ನಾದ ವಿಮಾನ ನಿಲ್ದಾಣದ ಇಂಡಿಗೋ ವಿಮಾನಯಾನ ಸಂಸ್ಥೆಯ ವ್ಯವಸ್ಥಾಪಕ ರೂಪೇಶ್ ಕುಮಾರ್ ಅಪರಿಚಿತರ ಗುಂಡಿಗೆ ಬಲಿಯಾಗಿದ್ದಾರೆ.

ಅಪರಿಚಿತರು ಏಕಾಏಕಿ ರೂಪೇಶ್ ಕುಮಾರ್ ಅವರ ಮೇಲೆ ಗುಂಡಿನ ಮಳೆಗರೆಯುತ್ತಿದ್ದಂತೆ ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ವಿಮಾನ ನಿಲ್ದಾಣದ ವ್ಯವಸ್ಥಾಪಕ ರೂಪೇಶ್ ಕೊಲೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು ವಿರೋಧಪಕ್ಷಗಳು ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದು ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಪಾಟ್ನಾದ ಕುಸುಮ್ ವಿಲಾಸ್ ಅಪಾರ್ಟ್ಮೆಂಟ್ ನಲ್ಲಿ ಇದ್ದ ಸಮಯದಲ್ಲಿ ಅಪರಿಚಿತ ವ್ಯಕ್ತಿ ರೂಪೇಶ್ ಕುಮಾರ್ ಅವರ ಮೇಲೆ ಗುಂಡಿನ ದಾಳಿ ಮಾಡಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಡಿನ ದಾಳಿ ಪ್ರಕರಣಕ್ಕೆ ಮಾಹಿತಿ ತಿಳಿದುಬಂದಿಲ್ಲ ಈ ಸಂಬಂಧ ವಿವರ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ದುಷ್ಕರ್ಮಿ ೬ ಸುತ್ತು ಗುಂಡಿನ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಗಂಭೀರವಾಗಿ ಗಾಯಗೊಂಡ ರೂಪೇಶ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸಿಬಿಐ ತನಿಖೆಗೆ ಆಗ್ರಹ:

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರು ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಮಾನ ನಿಲ್ದಾಣದ ಅಧಿಕಾರಿ ರೂಪೇಶ್ ಕುಮಾರ್ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ನಡುವೆ ಜೆಡಿಯು ಮಿತ್ರಪಕ್ಷ ಬಿಜೆಪಿಯ ಸಂಸದ ವಿವೇಕ್ ಟಾಕೂರ್ ಅವರು ಕೂಡ ವಿಮಾನ ನಿಲ್ದಾಣದ ವ್ಯವಸ್ಥಾಪಕರ ಹತ್ಯೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ