ಇಂಧನ, ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಚಾಮರಾಜನಗರ :ಜೂ.11: ಪ್ರೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಅವರ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯ ಎದುರು ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಅಲ್ಲಿಂದ ಮೆರವಣಿಗೆ ಹೊರಟು ಸಮೀಪದಲ್ಲಿಯೇ ಇರುವ ಪೆಟ್ರೋಲ್ ಬಂಕ್ ಬಳಿ ತೆರಳಿ ಅಲ್ಲಿ ಜಮಾಯಿಸಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪೆಟ್ರೋಲ್ ಬೆಲೆ ನೂರು ರೂ. ಆಗಿರುವ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಬ್ಯಾಟ್ ಹಿಡಿದು ಸರ್ಕಾರ ನೂರು ರನ್ ಬಾರಿಸಿದೆ ಎಂದು ಅನುಕರಣೆ ಮಾಡಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಮಾತನಾಡಿ, ಕೇಂದ್ರ ಸರ್ಕಾರ ಪದೇ ಪದೇ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರ ಏರಿಕೆ ಮಾಡುವ ಮೂಲಕ ಬಡವರ ಹೊಟ್ಟೆಯ ಮೇಲೆ ಒಡೆಯುತ್ತಿದೆ. ನರೇಂದ್ರ ಮೋದಿ ಅವರು 2014ರಂದು ನೀಡಿದ್ದ ಭರವಸೆಯಂತೆ ನಡೆದುಕೊಳ್ಳದೇ ದರ ಏರಿಕೆಯಲ್ಲಿ ನಿರತರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ದರ 35 ರೂ.ಗಳಿದ್ದರೂ ನಮ್ಮ ದೇಶದಲ್ಲಿ 100 ರೂ. ಮಾಡಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲಿ 400 ರೂ.ಇದ್ದ ಅಡುಗೆ ಅನಿಲದರ ಇಂದು 900 ರೂ.ಗೆ ಏರಿಕೆಯಾಗಿದೆ. ಕೇಂದ್ರ ಸರ್ಕಾರ ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ನಡೆದುಕೊಂಡು, ಬೆಲೆ ಏರಿಕೆ ನೀತಿಯನ್ನು ಕೈಬಿಡುವಂತೆ ಆಗ್ರಹಿಸಿದರು.