ಇನ್ನೆರಡು ದಿನ ಮಳೆ ನಿಲ್ಲದ ಚಳಿ


ಬೆಂಗಳೂರು, ನ ೧೪- ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ತುಂತುರು ಮಳೆಯೊಂದಿಗೆ ಮೋಡ ಕವಿದ ವಾತಾವರಣ ಇನ್ನು ಎರಡು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಸಹ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಚಳಿ ಜೊತೆ ತುಂತುರು ಮಳೆಯಾಗಲಿದೆ. ಮಂಡ್ಯ, ಮೈಸೂರು, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಭಾಗದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಕರ್ನಾಟಕ ಭಾಗದಲ್ಲಿಯೂ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಚದುರಿದ ಮಳೆಯಾಗುವ ಸಾಧ್ಯತೆಗಳಿವೆ. ಶನಿವಾರ ಬಾಗಲಕೋಟೆ, ವಿಜಯಪುರ, ಯಾದಗಿರಿ, ಕೊಪ್ಪಳ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆಯಾಗಿರುವ ವರದಿಗಳು ಬಂದಿವೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬುಧವಾರದವರೆಗೆ ಮಳೆಯಾಗಲಿದೆ. ನಗರದಲ್ಲಿ ಮಳೆ ಜೊತೆ ಚಳಿ ಪ್ರಮಾಣ ಸಹ ಏರಿಕೆಯಾಗುತ್ತಿದೆ.
ಆಗ್ನೇಯ ಬಂಗಾಳಕೊಲ್ಲಿಯಲ್ಲಿನ ಮೇಲ್ಮೈ ಸುಳಿಗಾಳಿ ಪ್ರಬಲವಾಗಿ ರೂಪಗೊಂಡ ಪರಿಣಾಮ ಮಳೆಯಾಗುತ್ತಿದೆ.ದಕ್ಷಿಣ ಒಳನಾಡಿನ ಜಿಲ್ಲೆಗಳಾದ ರಾಮನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ನವೆಂಬರ್ ೧೫ರ ತನಕ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಹವಾಮಾನ ವೈಪರೀತ್ಯದಿಂದಾಗಿ ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಭಾರೀ ಕುಸಿತವಾಗಿದೆ. ಬೆಂಗಳೂರು, ಬೀದರ್, ಚಿತ್ರದುರ್ಗ ಜಿಲ್ಲೆಗಳಲ್ಲಿ ಕಡಿಮೆ ತಾಪಮಾನ ದಾಖಲಾಗಿದೆ. ಶನಿವಾರ ತಡರಾತ್ರಿ ತನಕ ಬೆಂಗಳೂರು ನಗರದ ವಿವಿಧ ಬಡಾವಣೆಗಳಲ್ಲಿ ತುಂತುರು ಮಳೆಯಾಗಿದೆ.
ಬೆಂಗಳೂರು ನಗರದಲ್ಲಿ ಮುಂದಿನ ೪೮ ಗಂಟೆಗಳ ಕಾಲ ತುಂತುರು ಮಳೆ, ಶೀತ ವಾತಾವರಣ ಮುಂದುವರೆಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ನವೆಂಬರ್ ೧೬ರ ಬಳಿಕ ವಿವಿಧ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ನಿರೀಕ್ಷೆ ಇದೆ.