ಇನ್ನೊಂದು ವಾರ ರಾಜ್ಯದಲ್ಲಿ ಭಾರೀ ಮಳೆ

ಬೆಂಗಳೂರು,ಜೂ.೧೧-ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಇಂದಿನಿಂದ ರಾಜ್ಯಾದ್ಯಂತ ಮಳೆ ತೀವ್ರಗೊಳ್ಳುವ ಸಾಧ್ಯತೆಯಿದೆ.
ಇಂದಿನಿಂದ ಒಂದು ವಾರಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆ ತೀವ್ರಗೊಳ್ಳಲಿದೆ. ದಕ್ಷಿಣ ಒಳನಾಡಿನಲ್ಲಿಯೂ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದಿನಿಂದ ಜೂನ್ ೧೩ರವರೆಗೆ ಭಾರೀ ಮಳೆಯಾಗಲಿದ್ದು ಅದಾದ ಬಳಿಕವೂ ಮೂರ್ನಾಲ್ಕು ದಿನ ಮಳೆ ಮುಂದುವರೆಯಲಿರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇಂದಿನಿಂದ ೩ ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಲಿದ್ದು ಜೂನ್ ೧೪ರಂದು ಮಳೆ ಹೆಚ್ಚಾಗುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯಿಂದ ಭೂಕುಸಿತವಾಗುವ ಸಾಧ್ಯತೆಯೂ ಇದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.
ಹೀಗಾಗಿ, ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎಸ್‌ಡಿಆರ್‌ಎಫ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಕರಾವಳಿ ಮಾತ್ರವಲ್ಲದೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೀದರ್, ಗದಗ , ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿಯೂ ಇಂದಿನಿಂದ ೧ ವಾರ ಮಳೆಯಾಗಲಿದೆ. ಹೀಗಾಗಿ, ಹಳದಿ ಅಲರ್ಟ್ ಘೋಷಿಸಲಾಗಿದೆ.
ಜೂನ್ ಮೂರನೇ ವಾರದ ವೇಳೆಗೆ ರಾಜ್ಯದಲ್ಲಿ ಮಳೆಯ ಅಬ್ಬರ ಇನ್ನಷ್ಟು ಹೆಚ್ಚಾಗಲಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ಮಲೆನಾಡಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದೆ.
ಇಂದಿನಿಂದ ಜೂನ್ ೧೫ರವರೆಗೆ ಕೇರಳದಲ್ಲೂ ಭಾರೀ ಮಳೆಯಾಗಲಿದೆ. ರಾಜಸ್ಥಾನ, ಮಹಾರಾಷ್ಟ್ರ ಭಾಗದಲ್ಲೂ ಮಳೆಯ ತೀವ್ರತೆ ಹೆಚ್ಚಾಗಲಿದೆ. ಈಗಾಗಲೇ ಕೇರಳ, ಅಸ್ಸಾಂ, ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಮಳೆಯಾಗುತ್ತಿದೆ. ಇಂದು ಕರ್ನಾಟಕ, ಛತ್ತೀಸ್‌ಘಡ, ಕೇರಳ, ಮಾಹೆ, ಗೋವಾ, ಅಂಡಮಾನ್ ನಿಕೋಬಾರ್, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ನಾಗಾಲ್ಯಾಂಡ್, ಮಣಿಪುರ, ತ್ರಿಪುರ ರಾಜ್ಯಗಳಲ್ಲಿ ಮಳೆ ಹೆಚ್ಚಾಗಲಿದೆ.
ಒಂದು ಬಾರಿ ಮುಂಗಾರು ಆರಂಭವಾದ ನಂತರ ಅದರ ಪರಿಣಾಮ ಯಾವ ರೀತಿ ಇರಬಹುದು ಎಂದು ನಾವು ಅಂದಾಜಿಸಬಹುದು. ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ಮಳೆಯ ಆರ್ಭಟವಿರಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಈ ವರ್ಷ ಸಾಧಾರಣದಿಂದ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.
ಕರ್ನಾಟಕದ ಧಾರವಾಡ, ಬೆಳಗಾವಿ, ಗದಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಚಾಮರಾಜನಗರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಬೀದರ್, ಚಿಕ್ಕಮಗಳೂರಿನಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ಹೀಗಾಗಿ, ಹಳದಿ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಈಗಾಗಲೇ ಜಲಾಶಯಗಳಿಗೆ ಭಾರೀ ನೀರು ಹರಿದುಬರುತ್ತಿದ್ದು, ನದಿಗಳು ತುಂಬಿಹರಿಯುತ್ತಿವೆ. ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಆಗಿರುವುದರಿಂದ ಮುಂದಿನ ೧ ವಾರಗಳ ಕಾಲ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.