ಈದ್ ಮಿಲಾದ್ ಆಚರಣೆ ವೇಳೆ ಕೋವಿಡ್ ನಿಯಂತ್ರಣ ಕುರಿತ ಮಾರ್ಗಸೂಚಿ ಪಾಲನೆಗೆ ಆದೇಶ

ಚಾಮರಾಜನಗರ, ಅ.29- ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಠಿಯಿಂದ ಕೊರೊನಾ ವೈರಸ್ ಹರಡುವಿಕೆ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತ ಕ್ರಮವಾಗಿ ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ಟೋಬರ್ 30 ರಂದು ಈದ್ ಮಿಲಾದ್ ಹಬ್ಬವನ್ನು ಆಚರಿಸುವ ಸಂಬಂಧ ಹಲವು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಆವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ಅಕ್ಟೋಬರ್ 30 ರಂದು ಆಚರಿಸಲಿರುವ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನೆÀರವೇರಲಿರುವ ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ (ಜುಲೂಸ್), ತೆರೆದ ಸ್ಥಳಗಳಲ್ಲಿ ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ, ಸಾಂಸ್ಕøತಿಕ ಕಾರ್ಯಕ್ರಮ, ಸಭೆ ಸಮಾರಂಭಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಮಸೀದಿಗಳಲ್ಲಿ, ದರ್ಗಾಗಳಲ್ಲಿ ಸಾಮಾಜಿಕ ಅಂತರ ಹಾಗೂ ಕೋವಿಡ್-19ರ ಶಿಷ್ಟಾಚಾರದೊಂದಿಗೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳ ಜೊತೆಗೆ ದೈಹಿಕ ಅಂತರ ಕಾಪಾಡಿಕೊಳ್ಳುವುದರ ಮೂಲಕ ನೆರವೇರಿಸಬೇಕು.
ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕಗಳು, ಡಿಜಿಟಲ್ ಸೌಂಡ್ ಸಿಸ್ಟಮ್ (ಡಿಜೆ) ಬಳಕೆಯನ್ನು ನಿಷೇಧಿಸಲಾಗಿದೆ. ಮುಖಗವಸುಗಳನ್ನು ಕಡ್ಡಾಯವಾಗಿ ಎಲ್ಲರೂ ಉಪಯೋಗಿಸತಕ್ಕದ್ದು. 60 ವರ್ಷ ಮೇಲ್ಪಟ್ಟ ನಾಗರಿಕರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಹಬ್ಬದ ಆಚರಣೆಯನ್ನು ಮಾಡುವುದು. ಸ್ಯಾನಿಟೈಸರ್ ಹಾಗೂ ಸೋಪಿನೊಂದಿಗೆ ಕೈ ತೊಳೆಯಲು ಪ್ರವೇಶ ದ್ವಾರದಲ್ಲಿ ಸೂಕ್ತ ವ್ಯವಸ್ಥೆ ಮಾಡಬೇಕು. ಕಡ್ಡಾಯವಾಗಿ ವೈಯಕ್ತಿಕವಾಗಿ ಎಲ್ಲರೂ 6 ಅಡಿ ಅಂತರದ ದೈಹಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಖಬರಸ್ಥಾನ್ ಒಳಗೊಂಡಂತೆ ಯಾವುದೇ ರೀತಿಯ ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಮುಂತಾದವುಗಳನ್ನು ಆಯೋಜಿಸುವಂತಿಲ್ಲ.
ಮಸೀದಿ, ದರ್ಗಾ, ಆಶುಖಾನಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಆಗಮಿಸುವ ಭಕ್ತಾಧಿಗಳನ್ನು ಕಡ್ಡಾಯವಾಗಿ ಥರ್ಮಲ್ ಸ್ಕ್ಯಾನ್ ಮೂಲಕ ತಪಾಸಣೆಗೊಳಪಡಿಸಬೇಕು. ಮಸೀದಿ, ದರ್ಗಾ, ಆಶುಖಾನಗಳ ದ್ವಾರದ ಹೊರಗಡೆ ಭಿಕ್ಷುಕರು ಕುಳಿತುಕೊಳ್ಳುವುದನ್ನು ನಿಷೇಧಿಸಬೇಕು. ಮಸೀದಿ, ದರ್ಗಾ, ಆಶುಖಾನಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ, ಭಕ್ತಾಧಿಗಳಲ್ಲಿ ಜ್ವರ, ಕೆಮ್ಮು, ನೆಗಡಿ ಅಥವಾ ಕೊರೋನ ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಅಂತಹವರ ಪ್ರವೇಶಕ್ಕೆ ನಿರ್ಬಂಧಿಸಿ, ಸ್ಥಳೀಯ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಅಥವಾ ಜಿಲ್ಲಾ ಕಂಟ್ರೋಲ್ ರೂಂ ನಂಬರ್ 1077 ಗೆ ಮಾಹಿತಿ ನೀಡಬೇಕು.
ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ, ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.