ಈಶ್ವರಪ್ಪಗೆ ಕ್ಲೀನ್‌ಚಿಟ್ ವಿರುದ್ಧ ಹೋರಾಟ

ಬೆಂಗಳೂರು, ಜು. ೨೫- ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಮೇಲೆ ಬಿ ರಿಪೋರ್ಟ್ ಹಾಕಿ ಕೇಸ್ ಮುಚ್ಚವ ಕೆಲಸ ನಡೆದಿದೆ. ಇದರ ವಿರುದ್ಧ ಹೋರಾಟ ಮಾಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಬಿ ರಿಪೋರ್ಟ್ ಬಗ್ಗೆ ಕಾಂಗ್ರೆಸ್ ಪಕ್ಷ ಕಾನೂನು ತಜ್ಞರ ಜತೆ ಚರ್ಚೆ ನಡೆಸಿದೆ. ಮುಂದಿನ ದಿನಗಳಲ್ಲಿ ದೊಡ್ಡ ಹೋರಾಟ ನಡೆಸುವುದಾಗಿ ಅವರು ಹೇಳಿದರು.
ಬಿಜೆಪಿ ಸರ್ಕಾರ ಈ ಪ್ರಕರಣ ಮುಚ್ಚಿ ಹಾಕಲು ಈ ಹಿಂದೆಯೇ ಪ್ಲಾನ್ ಮಾಡಿತ್ತು ಎಂದು ದೂರಿದ ಅವರು, ಸರ್ಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದರು.
ಚರ್ಚೆಗೆ ಸಿದ್ಧ
ಕಾಂಗ್ರೆಸ್ ನಾಯಕರು ಮೂರು ತಲೆಮಾರಿಗಾಗುವಷ್ಟು ಆಸ್ತಿ ಮಾಡಿಕೊಂಡಿದ್ದಾರೆ ಎಂಬ ರಮೇಶ್‌ಕುಮಾರ್ ಹೇಳಿಕೆ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧ ಎಂಬ ಸಿ.ಟಿ. ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ನಾನು ಕೂಡಾ ಬಹಿರಂಗ ಚರ್ಚೆ ಮಾಡಲು ಸಿದ್ಧನಿದ್ದೇನೆ. ಯಾರ ಜತೆ ಚರ್ಚೆ ಮಾಡಬೇಕು ಎನ್ನುವುದನ್ನು ನಿರ್ಧಾರ ಮಾಡುತ್ತೇನೆ. ಬಹಿರಂಗ ಚರ್ಚೆಗೆ ಜಾಗ, ಸಮಯದ ಬಗ್ಗೆ ತಿಳಿಸುತ್ತೇನೆ ಎಂದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆ, ಹಾಲಿ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಜತೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಇಲ್ಲವೆ ಸಿ.ಟಿ. ರವಿ ಜತೆ ಇವರಲ್ಲಿ ಯಾರ ಜತೆ ಚರ್ಚೆ ಮಾಡಬೇಕು ಎನ್ನುವುದನ್ನು ತೀರ್ಮಾನ ಮಾಡುತ್ತನೆ ಎಂದು ಡಿ.ಕೆ. ಶಿವಕುಮಾರ್ ಹೇಳಿ, ಚರ್ಚೆಯ ಸವಾಲು ಹಾಕಿದ್ದೇನೆ. ಪ್ರತಿ ಸವಾಲನ್ನು ಸ್ವೀಕರಿಸಿದ್ದನೆ. ನಾನು ಹಿಂದೆ ಸರಿಯುವುದಿಲ್ಲ ಎಂದರು.