ಉತ್ತಮವಾಗಿ ಅಭ್ಯಾಸ ಮಾಡಿ ಪಾಲಕರಿಗೆ, ಜಿಲ್ಲೆಗೆ ಕೀರ್ತಿ ತರಬೇಕು

ರಾಯಚೂರು,ಮಾ.೧೩- ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು, ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಂಡು ಉತ್ತಮವಾಗಿ ಅಭ್ಯಾಸ ಮಾಡಿ ಪಾಲಕರಿಗೆ ಮತ್ತು ಜಿಲ್ಲೆಗೆ ಕೀರ್ತಿ ತರಬೇಕೆಂದು ಶಾಸಕ ಡಾ.ಎಸ್. ಶಿವರಾಜ ಪಾಟೀಲ್ ಹೇಳಿದರು.
ಅವರು ನಗರದ ವಾರ್ಡ್ ನಂ.೧೮ ರಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ೨೦೨೦-೨೧ನೇ ಸಾಲಿನ ಮೈಕ್ರೋ ಯೋಜನೆಯಡಿ ೪೦ ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ೩ ಹೆಚ್ಚುವರಿ ಕೊಠಡಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ನಗರದಲ್ಲಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಸತಿ ಸಹಿತ ಶಾಲಾ ಕಾಲೇಜುಗಳನ್ನು ಆರಂಭಿಸಲಾಗಿದೆ.
೧೬ ನೂತನ ವಸತಿ ನಿಲಯಗಳನ್ನು ಆರಂಭಿಸಲಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಇನ್ನೂ ಶೈಕ್ಷಣಿಕ ಸೌಲಭ್ಯಗಳು ಅಗತ್ಯವಿದ್ದಲ್ಲಿ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದರು.
ನಗರದಲ್ಲಿ ಬಡ ಜನರು ವಾಸಿಸುವ ಪ್ರದೇಶಗಳಲ್ಲಿ ಶೈಕ್ಷಣಿಕ ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚು ಒತ್ತು ನೀಡಲಾಗಿದೆ. ಒಂದೊಂದು ಶಾಲೆಗಳಿಗೆ ೧೦ಕ್ಕಿಂತ ಹೆಚ್ಚು ಕೊಠಡಿಗಳನ್ನು ನಿರ್ಮಾಣ ಮಾಡಲಾಗಿದೆ. ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.
ಸಂಸದ ರಾಜಾ ಅಮರೇಶ್ವರ ನಾಯಕ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ ಕೊಡಲು ಸಾಧ್ಯವಿದೆ ಎಂಬುದನ್ನು ಈ ಶಾಲೆ ತೋರಿಸಿ ಕೊಟ್ಟಿದೆ. ಮಕ್ಕಳಿಗೆ ಆಧುನಿಕ ಶಿಕ್ಷಣ ಪದ್ಧತಿ ದೊರೆಯಬೇಕೆಂಬ ನಿಟ್ಟಿನಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸ ಲಾಗಿದೆ. ಸರ್ಕಾರಿ ಶಾಲೆಗಳ ಶಿಕ್ಷಣ ಗುಣಮಟ್ಟ ಹೆಚ್ಚಳಕ್ಕೆ ಶಾಸಕರು ಹೆಚ್ಚಿನ ಒತ್ತು ನೀಡಿದ್ದಾರೆ ಎಂದರು.
ವೇದಿಕೆ ಮೇಲೆ ನಗರಸಭೆ ಅಧ್ಯಕ್ಷೆ ಲಲಿತಾಕಡಗೋಳು ಆಂಜನೇಯ್ಯ, ವಿಧಾನಪರಿಷತ್ ಮಾಜಿ ಸದಸ್ಯ ಎನ್.ಶಂಕ್ರಪ್ಪ, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ನಾಡಗೌಡ, ಮಾಜಿ ಅಧ್ಯಕ್ಷ ಕಡಗೋಳು ಆಂಜನೇಯ್ಯ ಹಾಗೂ ಶಾಲೆಯ ಮುಖ್ಯಗುರುಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.