ಉತ್ತಮ ಜೀವನಕ್ಕೆ ಮಾನವ ಹಕ್ಕುಗಳು ಅವಶ್ಯಕ”


ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜ.೧೩; ಸಾರ್ವಜನಿಕರು ಯಾವುದೇ ಅಡೆತಡೆ ಇಲ್ಲದೇ ಸಮಾಜದಲ್ಲಿ ಘನತೆಯಿಂದ ಜೀವನ ನಡೆಸಲು ಮಾನವ ಹಕ್ಕುಗಳು ಅವಶ್ಯಕ” ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಹೇಳಿದರು.ಚಿತ್ರದುರ್ಗ ತಾಲ್ಲೂಕು ಜಿ.ಆರ್.ಹಳ್ಳಿಯ ದಾವಣಗೆರೆ ವಿಶ್ವವಿದ್ಯಾಲಯ ಜ್ಞಾನಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಶುಕ್ರವಾರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ದಾವಣಗೆರೆ ವಿಶ್ವವಿದ್ಯಾನಿಲಯ ಜಿ.ಆರ್.ಹಳ್ಳಿ ಜ್ಞಾನ ಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 161ನೇ ಜನ್ಮ ದಿನಾಚರಣೆ-ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಯುವ ಜನರಿಗೆ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ, ಮಾನವ ಹಕ್ಕುಗಳ ಕುರಿತು ಉಪನ್ಯಾಸ ನೀಡಿದರು.ನಮಗೆ ನೈಸರ್ಗಿಕವಾಗಿ, ನಮ್ಮ ಅವಶ್ಯಕತೆ, ಉಳಿವಿಗಾಗಿ, ಅಸ್ತಿತ್ವಕ್ಕಾಗಿ ಇರಬೇಕಾದ ಮೂಲಭೂತ ಹಕ್ಕು ಮತ್ತು ಸ್ವಾತಂತ್ರ್ಯವೇ ಮಾನವ ಹಕ್ಕುಗಳು. ಈ ಮಾನವ ಹಕ್ಕುಗಳು ಜಾಗತಿಕವಾಗಿ ಎಲ್ಲರಿಗೂ ಯಾವುದೇ ಲಿಂಗಭೇದವಿಲ್ಲದೇ ಸಿಗುವಂತಹ ಹಕ್ಕು ಮತ್ತು ಸ್ವಾತಂತ್ರ್ಯ ಎಂದು ಹೇಳಿದರು. ಮಾನವ ಹಕ್ಕುಗಳ ಇಲ್ಲದಿದ್ದರೆ ಸಮಾಜದಲ್ಲಿ ಅರಾಜಕತೆ ಸೃಷ್ಠಿಯ ಜೊತೆಗೆ ಮನುಷ್ಯನ ಅಸ್ತಿತ್ವವೂ ಕಳೆದುಹೋಗಲಿದೆ. ಹಾಗಾಗಿ ಮಾನವ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಮಾನವ ಹಕ್ಕುಗಳ ಆಯೋಗ ಇರಲಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯಾದ ಸಂದರ್ಭದಲ್ಲಿ ರಕ್ಷಣೆ ನೀಡಿ, ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿದರು.