ಉತ್ತರ ಕಮಲ, ದಕ್ಷಿಣ ಕೈ

ಮಿನಿ ಸಮರ

ನವದೆಹಲಿ,ಡಿ.೩:ದೇಶಾದ್ಯಂತ ಭಾರಿ ಕುತೂಹಲ ಕೆರಳಿಸಿದ್ದ ಹಾಗೂ ರಾಜಕೀಯ ಪಕ್ಷಗಳಿಗೆ ಜಿದ್ದಾಜಿದ್ದಿನ ಅಖಾಡವೆನಿಸಿದ್ದ ಮಿನಿ ಮಹಾ ಸಮರದಲ್ಲಿ ೪ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶ ಪ್ರಕಟವಾಗಿದೆ. ರಾಜಸ್ತಾನ, iಧ್ಯಪ್ರದೇಶ, ಛತ್ತೀಸ್‌ಘಡ ರಾಜ್ಯಗಳಲ್ಲಿ ಪ್ರಧಾನಿ ನರೇಂದ್ರಮೋದಿ ಮೋಡಿ ಮಾಡಿದ್ದಾರೆ.
ಮಿನಿ ಮಹಾಸಮರದಲ್ಲಿ ಗೆಲುವು ಸಾಧಿಸುವ ಹುಮ್ಮಸ್ಸಿನಲ್ಲಿ ಚುನಾವಣಾ ಅಖಾಡಕ್ಕಿಳಿದಿದ್ದ ಕಾಂಗ್ರೆಸ್‌ಗೆ ತೀವ್ರ ಮುಖಭಂಗವಾಗಿದ್ದು, ಕೇವಲ ತೆಲಂಗಾಣ ರಾಜ್ಯದಲ್ಲಿ ಮಾತ್ರ ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿ ಚಂದ್ರಶೇಖರರಾವ್ ನೇತೃತ್ವದ ಭಾರತ ರಾಷ್ಟ್ರ ಸಮಿತಿ ಆಡಳಿತ ವಿರೋಧಿ ಅಲೆಯಲ್ಲಿ ಕೊಚ್ಚಿ ಹೋಗಿದೆ.
ಛತ್ತೀಸ್‌ಘಡ ವಿಧಾನಸಭಾ ಫಲಿತಾಂಶ ಕ್ಷಣಕ್ಷಣಕ್ಕೂ ಏರಿಳಿತವಾಗುತ್ತಿತ್ತು. ಹೀಗಾಗಿ ಕಡೇ ಘಳಿಗೆಯವರೆಗೂ ಫಲಿತಾಂಶ ಅಪಾರ ಕುತೂಹಲ ಕೆರಳಿಸಿತ್ತು. ಆದರೆ, ಅಂತಿಮವಾಗಿ ಬಿಜೆಪಿ ಜಯಭೇರಿ ಬಾರಿಸಿತು. ಕಾಂಗ್ರೆಸ್ ಧೂಳಿಪಟವಾಯಿತು.
ಮುಂಬರುವ ಲೋಕಸಭಾ ಚುನಾವಣೆಗೆ ಸೆಮಿಫೈನಲ್ ಎಂದೇ ಬಿಂಬಿತವಾಗಿದ್ದ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ನ. ೭ ರಿಂದ ೩೦ರ ವರೆಗೆ ಮತದಾನ ನಡೆದಿತ್ತು. ಮತಗಟ್ಟೆ ಸಮೀಕ್ಷೆಗಳ ಲೆಕ್ಕಾಚಾರ ತಲೆಕೆಳಗಾಗಿದೆ. ಎರಡೆರೆಡು ರಾಜ್ಯಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಿದ್ದವು. ಆದರೆ ಛತ್ತೀಸ್‌ಘಡದಲ್ಲಿ ಮತಗಟ್ಟೆ ಸಮೀಕ್ಷೆಗಳು ಬಿಂಬಿಸಿದ್ದಕ್ಕಿಂತ ಹೆಚ್ಚಾಗಿ ಬಿಜೆಪಿ ಗೆಲುವ ಸಾಧಿಸುವಲ್ಲಿ ಯಶಸ್ವಿಯಾಗಿದೆ.
ನಾಲ್ಕು ರಾಜ್ಯಗಳ ಮಿನಿ ಸಮರದಲ್ಲಿ ರಾಜಸ್ತಾನ-ಮಧ್ಯಪ್ರದೇಶ ಹಾಗೂ ಛತ್ತೀಸ್‌ಘಡ ರಾಜ್ಯಗಳಲ್ಲಿ ಪ್ರಧಾನಿ ನರೇಂದ್ರಮೋದಿ ಕಮಾಲ್ ಮಾಡಿದ್ದಾರೆ. ಚುನಾವಣೆಯಲ್ಲಿ ಬಿಜೆಪಿಗೆ ಎದಿರೇಟು ನೀಡಲು ಕಾಂಗ್ರೆಸ್‌ನ ಯುವ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಲವು ತಂತ್ರಗಾರಿಕೆಗಳನ್ನು ರೂಪಿಸಿದ್ದ ಹೊರತಾಗಿಯೂ ಕೇವಲ ತೆಲಂಗಾಣದಲ್ಲಿ ಮಾತ್ರ ಅಧಿಕಾರಕ್ಕೆ ತರುವಲ್ಲಿ ಸಫಲವಾಗಿದೆ.
ತೆಲಂಗಾಣದಲ್ಲಿ ಕರ್ನಾಟಕ ಮಾದರಿಯ ಗ್ಯಾರಂಟಿ ಯೋಜನೆಗಳನ್ನು ತೆಲಂಗಾಣದಲ್ಲೂ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದರಿಂದ ಕಾಂಗ್ರೆಸ್‌ಗೆ ವರದಾನವಾಯಿತು. ಬಿಆರ್‌ಎಸ್ ಹಾಗೂ ಬಿಜೆಪಿ ಹಿನ್ನಡೆ ಅನುಭವಿಸಿದೆ. ಬಿಜೆಪಿ ೯ ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ.
ಕಾಂಗ್ರೆಸ್ ಪಕ್ಷದ ಪರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಯುವ ನಾಯಕ ರಾಹುಲ್‌ಗಾಂಧಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಘಟಾನುಘಟಿ ನಾಯಕರುಗಳು ತೆಲಂಗಾಣದಲ್ಲಿ ಅಬ್ಬರದ ಪ್ರಚಾರ ನಡೆಸಿ ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಮತದಾರರ ಮುಂದೆ ಅನಾವರಣಗೊಳಿಸಿದ್ದರು.
ರಾಜಸ್ಥಾನ ಮತ್ತು ಮಧ್ಯಪ್ರದೇಶ ಹಾಗೂ ಛತ್ತೀಸ್‌ಘಡ ರಾಜ್ಯಗಳಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ವರ್ಚಸ್ಸಿನಿಂದ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಅಶೋಕ್‌ಗೆಲ್ಹೋಟ್, ಕಾಂಗ್ರೆಸ್ ಮುಖಂಡ ಸಚಿನ್‌ಪೈಲೆಟ್ ಆಂತರಿಕ ಕಚ್ಚಾಟ ಬಿಜೆಪಿಗೆ ವರದಾನವಾಗಿ ಪರಿಣಮಿಸಿದೆ. ಸಚಿನ್‌ಪೈಲಟ್ ಅವರು ಅಶೋಕ್‌ಗೆಲ್ಹೋಟ್ ವಿರುದ್ಧವೇ ಬಹಿರಂಗ ಸಮರ ಸಾರಿದ್ದು, ರಾಜ್ಯಸರ್ಕಾರದ ವಿರುದ್ಧವೇ ಪ್ರತಿಭಟನೆ ನಡೆಸಿ ಸರ್ಕಾರವನ್ನು ಪೇಚಿಗೆ ಸಿಲುಕಿಸಿತ್ತು. ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವೂ ನಡೆದಿತ್ತು. ಹೈಕಮಾಂಡ್ ಮಧ್ಯಸ್ಥಿಕೆಯಿಂದ ಬಿಕ್ಕಟ್ಟು ಶಮನಕ್ಕೆ ಯತ್ನಿಸಿದ್ದರಾದರೂ ಪ್ರಯೋಜನವಾಗಿರಲಿಲ್ಲ. ಆದರೆ, ಚುನಾವಣೆ ಘೋಷಣೆಯಾದ ನಂತರ ಈ ಇಬ್ಬರೂ ನಾಯಕರು ಒಗ್ಗಟ್ಟಿನ ಮಂತ್ರ ಜಪಿಸಿ ಮತದಾರರ ಬಳಿಗೆ ತೆರಳಿದ್ದರು. ಆದರೆ, ಈ ಬಾರಿಯ ಚುನಾವಣೆಯಲ್ಲಿ ಲೆಕ್ಕಾಚಾರಗಳೆಲ್ಲವೂ ತಲೆಕೆಳಗಾಗಿ ರಾಜಸ್ತಾನದಲ್ಲಿ ಕಮಲ ಅರಳಿದೆ.
೧೯೯ ಸದಸ್ಯ ಬಲದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದೆ. ಆದರೆ, ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿದೆ.
ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಮತದಾರರ ಬಳಿ ತೆರಳಿದ್ದ ಕಾಂಗ್ರೆಸ್ ರಾಜಸ್ತಾನದಲ್ಲಿ ನೆಲ ಕಚ್ಚಿದೆ.
ಮಧ್ಯಪ್ರದೇಶದಲ್ಲೂ ಪ್ರಧಾನಿ ನರೇಂದ್ರಮೋದಿ ತಂತ್ರಗಾರಿಕೆ ಫಲಪ್ರದವಾಗಿದ್ದು, ಮುಖ್ಯಮಂತ್ರಿ ಶಿವರಾಜ್‌ಸಿಂಗ್ ಚೌಹಾಣ್ ಅಧಿಕಾರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಚುನಾವಣೆಯಲ್ಲಿ ಮತದಾರರಿಗೆ ಭರಪೂರ ಆಶ್ವಾಸನೆಗಳನ್ನು ನೀಡಿ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಿದ್ದರು.
೨೩೦ ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ ೧೧೧ ಸ್ಥಾನಗಳಲ್ಲಿ ಜಯಗಳಿಸಿದೆ. ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದ ಪ್ರತಿಪಕ್ಷ ಕಾಂಗ್ರೆಸ್‌ನ ಕನಸು ಭಗ್ನಗೊಂಡಿದೆ. ೬೯ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಳ್ಳಲು ಸಫಲವಾಗಿದೆ.ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಶಿವರಾಜ್‌ಸಿಂಗ್ ಅವರು ಗಿಡ ನೆಡುವ ಮೂಲಕ ವಿಜಯೋತ್ಸವ ಆಚರಿಸಿ, ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತಂದ ಹಿನ್ನೆಲೆಯಲ್ಲಿ ಮತದಾರರನ್ನು ಅಭಿನಂದಿಸಿದರು.

ಸಂಜೆ ಮೋದಿ ಭಾಷಣ
ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ ಪ್ರಕಟವಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ಸಂಜೆ ೬ ಗಂಟೆಗೆ ಪ್ರಧಾನಮಂತ್ರಿ ನರೇಂದ್ರಮೋದಿ ಅವರು ರಾಜಧಾನಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮತ್ತೊಂದೆಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಡಿ. ೬ ರಂದು ಇಂಡಿಯಾ ಮೈತ್ರಿಕೂಟದ ಪಕ್ಷಗಳ ಸಭೆ ಕರೆದಿದ್ದಾರೆ.
ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಸೋಲನುಭವಿಸಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ಇಂಡಿಯಾ ಮೈತ್ರಿಕೂಟ ಇನ್ನಷ್ಟು ಗಟ್ಟಗೊಳಿಸುವ ಸಂಬಂಧ ಅನಿಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಹಿನ್ನಡೆಯುಂಟಾಗಿದೆ. ನಾಳೆ ಮಿಜೋರಾಂ ರಾಜ್ಯದ ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, ಈ ಎಲ್ಲ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲು ಖರ್ಗೆ ಅವರು ಈ ಮಹತ್ವದ ಸಭೆ ಕರೆದಿದ್ದಾರೆ.