ಉದಯನಿಧಿ, ಪ್ರಿಯಾಂಕ್ ವಿರುದ್ಧ ಎಫ್‌ಐಆರ್

ಲಕ್ನೋ, ಸೆ.೬-ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದ ರಾಂಪುರದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಇಲ್ಲಿನ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ ೨೯೫ ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಮತ್ತು ೧೫೩ ಎ (ವಿವಿಧ ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಉತ್ತೇಜನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಕೀಲರಾದ ಹರ್ಷಗುಪ್ತಾ ಮತ್ತು ರಾಮ್ ಸಿಂಗ್ ಲೋಧಿ ಅವರ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿದೆ. ಇನ್ನೂ, ರಾಜಕಾರಣಿಗಳ ಹೇಳಿಕೆಗಳು ತಮ್ಮ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಉಲ್ಲೇಖಿಸಿದ್ದಾರೆ.
ಜತೆಗೆ,ಸನಾತನ ಧರ್ಮವನ್ನು ನಿರ್ಮೂಲನೆ ಮಾಡಲು ಸ್ಟಾಲಿನ್ ಕರೆ ನೀಡಿದ್ದಕ್ಕಾಗಿ ಮತ್ತು ಅವರ ಹೇಳಿಕೆಯನ್ನು ಬೆಂಬಲಿಸಿದ್ದಕ್ಕಾಗಿ ಖರ್ಗೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ಕಳೆದ ಶನಿವಾರ ತಮಿಳುನಾಡಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಗಳಿಗೆ ಹೋಲಿಕೆ ಮಾಡಿ ಮಾತನಾಡಿದ್ದು ಅಲ್ಲದೆ ಸನಾತನ ಧರ್ಮವನ್ನು ಬೇರು ಸಮೇತ ಕಿತ್ತು ಹಾಕಬೇಕು ಎಂದು ಹೇಳಿಕೆ ನೀಡಿದ್ದರು.