ಉದ್ಧವ್ ಠಾಕ್ರೆ ಸರ್ಕಾರ ಶೀಘ್ರ ಪತನ: ಪಡ್ನವಿಸ್

ಮುಂಬೈ, ನ. ೧೨- ಮಹಾರಾಷ್ಟ್ರದಲ್ಲಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ತಾನಾಗಿಯೇ ಪತನಗೊಳ್ಳಲಿದೆ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಭವಿಷ್ಯ ನುಡಿದಿದ್ದಾರೆ.
ಸರ್ಕಾರವನ್ನು ಉರುಳಿಸಲು ನಾವು ಯಾವುದೇ ರೀತಿಯ ಪ್ರಯತ್ನ ಮಾಡುವುದಿಲ್ಲ. ನಾಯಕತ್ವ ಬದಲಾವಣೆಗೆ ಪ್ರಯತ್ನಿಸುವುದಿಲ್ಲ. ಆದರೆ ಸಮಿಶ್ರ ಸರ್ಕಾರ ತಾನಾಗಿಯೇ ಪತನಗೊಂಡು ಪರ್ಯಾಯ ಸರ್ಕಾರ ರಚನೆಗೆ ದಾರಿ ಮಾಡಿಕೊಡಲಿದೆ ಎಂದು ಅವರು ಹೇಳಿದ್ದಾರೆ.
ಮಹಾರಾಷ್ಟ್ರದ ವಿಚಾರಕ್ಕೆ ಬಂದರೆ ನಮ್ಮಲ್ಲಿ ಹೊಸ ವಿಶ್ವಾಸವನ್ನು ಮೂಡಿಸಿದೆ. ಜನರು ಬದಲಾವಣೆ ಬಯಸುತ್ತಿದ್ದಾರೆ. ಮಹಾರಾಷ್ಟ್ರ ಸರ್ಕಾರ ಒಂದಲ್ಲ ಒಂದು ದಿನ ತಾನಾಗಿ ಪತನಗೊಂಡು ಪರ್ಯಾಯ ವ್ಯವಸ್ಥೆ ಮಾಡಲು ಅನುಕೂಲ ಮಾಡಿಕೊಡಲಿದೆ ಎಂದು ಪಡ್ನವಿಸ್ ಹೇಳಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಕುರಿತು ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಅವರು ಮಹಾರಾಷ್ಟ್ರ ರಾಜಕೀಯ ಪರಿಸ್ಥಿತಿಯನ್ನು ವಿಶ್ಲೇಷಣೆ ಮಾಡಿದ್ದಾರೆ.
ಈ ರೀತಿಯ ಸರ್ಕಾರ ಬಹಳ ದಿನ ಉಳಿಯುವುದಿಲ್ಲ. ಸರ್ಕಾರ ಪತನ ಗೊಂಡರೆ ನಾವು ಪರ್ಯಾಯ ಸರ್ಕಾರ ರಚನೆಗೆ ಸಿದ್ಧರಿದ್ದೇವೆ. ಆದರೆ ಇಂದು ನಮ್ಮ ಮುಂದೆ ಈ ವಿಚಾರ ಆದ್ಯತಾ ವಿಚಾರವಾಗಿ ಉಳಿದಿಲ್ಲ. ಮಹಾರಾಷ್ಟ್ರದಲ್ಲಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರ ಯಾವುದೇ ರೀತಿಯಲ್ಲೂ ಅವರ ನೆರವಿಗೆ ಧಾವಿಸಿಲ್ಲ ಎಂದು ಅವರು ಆರೋಪಿಸಿದರು.
ಪ್ರತಿಪಕ್ಷವಾಗಿ ನಮ್ಮ ಕರ್ತವ್ಯವನ್ನು ನಾವು ಮಾಡುತ್ತಿದ್ದೇವೆ ರೈತರು ಸಂಕಷ್ಟದಲ್ಲಿರುವಾಗ ಆಡಳಿತ ನಡೆಸುತ್ತಿರುವ ಸರ್ಕಾರ ಅವರ ನೆರವಿಗೆ ಧಾವಿಸಬೇಕಾದ ಕರ್ತವ್ಯ ಮಾಡಬೇಕಾಗಿದೆ ಎಂದು ಅವರು ತಿಳಿಸಿದರು.
ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ರಾಷ್ಟ್ರ ಹಾಗೂ ಪಶ್ಚಿಮ ಬಂಗಾಳ ರಾಜಕಾರಣದ ಮೇಲೆ ಪ್ರಭಾವ ಬೀರಲಿದೆ. ಎನ್ಡಿಎ ಮೈತ್ರಿಕೂಟ ಬಿಹಾರದಲ್ಲಿ ಗೆದ್ದಿರುವುದು ೨೦೨೧ರಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಮೇಲೆ ಪ್ರಭಾವ ಬೀರಲಿದೆ ಎಂದರು.
ಮುಂಬರುವ ದಿನಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ಬೀಸಲಿದೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆದ ನಂತರ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಅವರು ಹೇಳಿದರು.