ಉದ್ಯೋಗಕ್ಕೆ ಭೂ ಹಗರಣ: ಲಾಲೂ ವಿಚಾರಣೆ ಹಾಜರು

ಪಾಟ್ನಾ/ ನವದೆಹಲಿ,ಜ.೨೯- ರೈಲ್ವೆ ಸಚಿವಾಲಯದಲ್ಲಿ ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ರೈಲ್ವೆ ಸಚಿವ ಲಾಲು ಯಾದವ್ ಜಾರಿ ನಿರ್ದೇಶನಾಲಯದ ಮುಂದೆ ಇಂದು ವಿಚಾರಣೆಗೆ ಹಾಜರಾಗಿದ್ದು
ಪಾಟ್ನಾದ ಜಾರಿ ನಿರ್ದೇಶನಾಲಯ ಕಚೇರಿಗೆ ಆಗಮಿಸುತ್ತಿದ್ದಂತೆ ಆರ್ ಜೆಡಿಯ ಅಪಾರ ಸಂಖ್ಯೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು
ಪಿಎಂಎಲ್‌ಎಯ ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾದ ಕೇಂದ್ರೀಯ ತನಿಖಾ ದಳ (ಸಿಬಿಐ) ನೀಡಿದ ದೂರಿನ ಅನ್ವಯ ಜಾರಿ ನಿರ್ದೇಶನಾಲಯ ಲಾಲು ಪ್ರಸಾದ್ ಯಾದವ್ ಅವರಿಗೆ ನೋಟೀಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ
ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿ ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ಜಮಾಯಿಸಿದ ಕಾರ್ಯಕರ್ತರು
ಪಾಟ್ನಾದ ಜಾರಿ ನಿರ್ದೇಶನಾಲಯದ ಕಚೇರಿ ಬಳಿ ರಾಷ್ಟ್ರೀಯ ಜನತಾ ದಳ ಮುಖಂಡರು ಮತ್ತು ಕಾರ್ಯಕರ್ತರು ಜಮಾಯಿಸಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ಧಾರೆ.
ಮುಂದಿನ ಒಂದೆರಡು ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಆರ್ ಜೆಡಿಯನ್ನು ಕಟ್ಟಿ ಹಾಕಬಹುದು ಎನ್ನುವ ಲೆಕ್ಕಾಚರ ಕೇಂದ್ರದ ಬಿಜೆಪಿ ಸರ್ಕಾರದ ನಾಯಕತ್ವ ವಹಿಸಿಕೊಂಡವರಲ್ಲಿ ಇದೆ. ಅದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ
ಕೆಲ ದಿನಗಳ ಹಿಂದೆ ಇಡಿ ತಂಡ ಸಮನ್ಸ್ ಜಾರಿ ಮಾಡಿತ್ತು. ಅವರ ಪುತ್ರ ತೇಜಸ್ವಿ ಯಾದವ್‌ಗೂ ಸಮನ್ಸ್ ನೀಡಲಾಗಿದೆ.
ಆರೋಪಗಳೇನು
೨೦೦೪ ರಿಂದ ೨೦೦೯ ರವರೆಗೆ ಭಾರತೀಯ ರೈಲ್ವೆಯ ವಿವಿಧ ವಲಯಗಳಲ್ಲಿ ಗ್ರೂಪ್ ’ಡಿ’ ಹುದ್ದೆಗಳಿಗೆ ಹಲವಾರು ಜನರನ್ನು ನೇಮಿಸಲಾಯಿತು ಮತ್ತು ಬದಲಿಗೆ ಅವರು ತಮ್ಮ ಭೂಮಿಯನ್ನು ಆಗಿನ ರೈಲ್ವೆ ಸಚಿವ ಲಾಲು ಪ್ರಸಾದ್ ಮತ್ತು ಎಕೆ ಇನ್ಫೋಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಅವರ ಕುಟುಂಬ ಸದಸ್ಯರಿಗೆ ವರ್ಗಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. .

ಮಿಸಾ ಭಾರತಿ ಆಕ್ರೋಶ
ಲೋಕಸಭೆ ಚುನಾವಣೆಗೂ ಮುನ್ನ ಕೇಂದ್ರದ ಬಿಜೆಪಿ ಸರ್ಕಾರ ಜಾರಿ ನಿರ್ದೇಶನಾಲಯ ಸೇರಿದಂತೆ ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರ್ ಜೆಡಿ ಸಂಸದೆ ಹಾಗು ಲಾಲು ಪ್ರಸಾದ್ ಯಾದವ್ ಪುತ್ರಿ ಮೀಸಾ ಭಾರತಿ ಆರೋಪಿಸಿದ್ದಾರೆ.
ತಂದೆ ಲಾಲು ಪ್ರಸಾದ್ ಯಾದವ್ ಅವರಿಗೆ ಜಾರಿ ನಿರ್ದೇಶನಾಲಯದ ಮೂಲಕ ಕಿರುಕುಳ ನೀಡಲಾಗುತ್ತಿದೆ. ಇದಕ್ಕೆ ರಾಜ್ಯದ ಜನರು ಲೋಕಸಭೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಗುಡುಗಿದ್ಧಾರೆ.