ಉದ್ಯೋಗದ ಆಮಿಷ : ಮಹಿಳೆ ಮೇಲೆ ಅತ್ಯಾಚಾರ

ನವದೆಹಲಿ, ನ.೯- ಉದ್ಯೋಗದ ಆಮಿಷವೊಡ್ಡಿ ಮಹಿಳೆ ಮೇಲೆ ಅತ್ಯಾಚಾರವೆಸಗಿ, ಗಾಯಗೊಳಿಸಿ ಮೃಗೀಯ ವರ್ತನೆ ತೋರಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ.
ಅಂಕಿತ್ ಸೆಹ್ರಾವತ್ ಎಂಬಾತ ಈ ಕೃತ್ಯವೆಸಗಿರುವ ಆರೋಪ ಕೇಳಿಬಂದಿದ್ದು, ದೆಹಲಿಯ ದ್ವಾರಕಾದಲ್ಲಿ ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಯನ್ನು ಹೋಟೆಲ್‌ಗೆ ಕರೆಸಿಕೊಂಡಿದ್ದ.
ಬಳಿಕ ಆಕೆಗೆ ಬಲವಂತವಾಗಿ ಮದ್ಯ ಕುಡಿಸಿ ನಂತರ ಆರೋಪಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾರೆ. ತದನಂತರ, ಆಕೆಗೆ ಹೊಡೆದು ಮುಖಕ್ಕೆ ಗಾಯಗೊಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿಗಳು ಸಂತ್ರಸ್ತೆಯನ್ನು ಕೊಲ್ಲಲು ಪ್ರಯತ್ನಿಸಿ ವಿಫಲವಾದಾಗ ಹೋಟೆಲ್ ಕೊಠಡಿಗೆ ಬೀಗ ಹಾಕಿ ಸ್ಥಳದಿಂದ ಪರಾರಿಯಾಗಿದ್ದರು. ಬಳಿಕ ಸಂತ್ರಸ್ತೆ ದ್ವಾರಕಾದ ಸೆಕ್ಟರ್ -೯ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ.

ತಕ್ಷಣ ಸ್ಥಳಕ್ಕೆ ತಲುಪಿದ ಪೊಲೀಸರು ಕೊಠಡಿ ಬೀಗ ಮುರಿದು ಒಳನುಗ್ಗಿ ಆಕೆಯನ್ನು ರಕ್ಷಣೆ ಮಾಡಲಾಗಿದೆ. ನಂತರ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಇನ್ನೂ, ಪೊಲೀಸರನ್ನು ಆವರಣಕ್ಕೆ ಪ್ರವೇಶಿಸಲು ಅನುಮತಿಸದ ಹೋಟೆಲ್ ವ್ಯವಸ್ಥಾಪಕನನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.