ಉದ್ಯೋಗ ಖಾತ್ರಿ ಯೋಜನೆಗಾಗಿ ಜಿಲ್ಲೆ ತಾಲ್ಲೂಕು ಮಟ್ಟದಲ್ಲಿ ಪ್ರತಿಭಟನೆ

ಕಲಬುರಗಿ:ಏ.7:ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕು ಎಂದು ಆಗ್ರಹಿಸಿ ರಾಜ್ಯವ್ಯಾಪಿ ಕರೆಯ ಮೇರೆಗೆ ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಏಪ್ರಿಲ್ 9ರಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಅವರು ಹೇಳಿದರು.
ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಟನೆಯಲ್ಲಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯವರೂ ಸಹ ಪಾಲ್ಗೊಳ್ಳಲಿದ್ದಾರೆ ಎಂದರು.
ರಾಜ್ಯ ಸರ್ಕಾರವು ಕೃಷಿ ಕಾರ್ಮಿಕರಿಗೆ ಕನಿಷ್ಠ ವೇತನ ಪರಿಷ್ಕರಿಸಿ ಕೃಷಿ ಕಾರ್ಮಿಕರಿಗೆ ಪ್ರತಿ ದಿನ 424.80ರೂ.ಗಳನ್ನು ನೀಡುತ್ತಿದೆ. ಅದೇ ಮಾದರಿಯಲ್ಲಿ ಉದ್ಯೋಗ ಖಾತ್ರಿಯಲ್ಲಿ ಕೆಲಸ ಮಾಡುವವರಿಗೂ ವಿಸ್ತರಿಸಬೇಕು ಎಂದು ಅವರು ಒತ್ತಾಯಿಸಿದರು.
ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ಕೆ. ನೀಲಾ ಅವರು ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯ ಕೆಲಸದ ದಿನಗಳನ್ನು ಹೆಚ್ಚಿಸುವಂತೆ ಹಾಗೂ ಕೃಷಿ ಕಾರ್ಮಿಕರಿಗೆ 600ರೂ.ಗಳ ವೇತನ ನೀಡುವಂತೆ ಹಲವಾರು ವರ್ಷಗಳಿಂದಲೂ ಒತ್ತಾಯಿಸುತ್ತಿದ್ದರೂ ಸಹ ಸರ್ಕಾರವು ಬೇಡಿಕೆಗಳಿಗೆ ಸ್ಪಂದಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಉದ್ಯೋಗ ಖಾತ್ರಿ ಯೋಜನೆಯಲ್ಲಿ ನೀಡಲಾಗುತ್ತಿರುವ 289ರೂ.ಗಳ ಕೂಲಿ ಏತಕ್ಕೂ ಸಾಲದು. ಆದ್ದರಿಂದ ಕೂಡಲೇ ರಾಜ್ಯ ಸರ್ಕಾರವು 600ರೂ.ಗಳಿಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದ ಅವರು, ಬೇಡಿಕೆಗಳ ಇಡೇರಿಕೆಗಾಗಿ ಹೋರಾಟ ರೂಪಿಸಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಅಶೋಕ್ ಮ್ಯಾಗೇರಿ, ಭೀಮಶೆಟ್ಟಿ ಯಂಪಳ್ಳಿ, ಅಮೀನಾಬೇಗಂ, ಚಂದಪ್ಪ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.