ಉದ್ರಿ ಮಾತು ಬಿಟ್ಟು ಬದ್ಧತೆ ಪ್ರದರ್ಶಿಸಿಬಿಜೆಪಿ-ಕಾಂಗ್ರೆಸ್ ಪಕ್ಷಗಳಿಗೆ ಬಂಡೆಪ್ಪ ಕಾಶೆಂಪುರ ತಾಕೀತು

ಕಲಬುರಗಿ,ನ.25: ಬಿಜೆಪಿ ಮತ್ತು ಕಾಂಗ್ರೆಸ್ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಶಕ್ತಿ ಪ್ರದರ್ಶನದೊಂದಿಗೆ ಉದ್ರಿ ಮಾತುಗಳನ್ನು ಆಡುತ್ತಿವೆ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಬಂಡೆಪ್ಪ ಕಾಶೆಂಪುರ ಟೀಕಿಸಿದರು.
ಇಲ್ಲಿನ ಪತ್ರಿಕಾ ಭವನದಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ಬಿಜೆಪಿ ಜನಸಂಕಲ್ಪ ಸಮಾವೇಶದ ಹೆಸರಿನಲ್ಲಿ ಹಾಗೂ ಕಾಂಗ್ರೆಸ್ ಪಕ್ಷವು ಭಾರತ್ ಜೋಡೊ ಯಾತ್ರೆ ಹೆಸರಿನಲ್ಲಿ ತಮ್ಮ ಶಕ್ತಿ ಪ್ರದರ್ಶನ ಮಾಡುತ್ತಿವೆ. ಮತ್ತೊಂದೆಡೆ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪಂಚರತ್ನ ಯೋಜನೆಯ ಮೂಲಕ ರಾಜ್ಯದ ಜನರ ಹಿತ ಕಾಯುವ ಮಾತುಗಳನ್ನು ಆಡುತ್ತಿದ್ದಾರೆ. ಇಂಥದ್ದೇ ಬದ್ಧತೆಯನ್ನು ಕಾಂಗ್ರೆಸ್ ಮತ್ತು ಬಿಜೆಪಿ ಪ್ರದರ್ಶಿಸಬೇಕು ಎಂದು ಕಿವಿಮಾತು ಹೇಳಿದರು.
ಇತ್ತೀಚೆಗೆ ಕಲಬುರಗಿ ಜಿಲ್ಲೆಗೆ ಭೇಟಿ ನೀಡಿದ್ದ ಸಿಎಂ ಬಸವರಾಜ ಬೊಮ್ಮಾಯಿ ಸರಕಾರದ ವತಿಯಿಂದ ರಾಜ್ಯದ ರೈತರಿಗೆ 24 ಸಾವಿರ ಕೋಟಿ ಸಾಲ ನೀಡುವ ಮಾತನಾಡಿದ್ದಾರೆ. ಇನ್ನೊಂದೆಡೆ, ಮಾಜಿ ಸಿಎಂ ಕುಮಾರಣ್ಣ ಈ ಹಿಂದೆ ಕಾಂಗ್ರೆಸ್ ಜೊತೆಗೂಡಿ ಸರಕಾರ ರಚಿಸಿದಾಗ ರೈತರ ರೂ.25 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದರು. ಇಷ್ಟಕ್ಕೂ ಸಹಕಾರಿ ಇಲಾಖೆಯಿಂದ ಪ್ರತಿ ವರ್ಷ ಸಾಲ ನೀಡುವ ಪರಂಪರೆ ಮೊದಲಿನಿಂದಲೂ ನಡೆದು ಬಂದಿದೆ. ಆದರೆ ಯಾರೊಬ್ಬರೂ ಕುಮಾರಣ್ಣನ ಮಾದರಿಯಲ್ಲಿ ರೈತರ ಸಾಲ ಮನ್ನಾ ಮಾಡಿಲ್ಲ ಎಂದರು.
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಯಾವುದೇ ಅಜೆಂಡಾ ಇಲ್ಲ. ಹೀಗಾಗಿ ಆ ಪಕ್ಷಗಳ ನಾಯಕರು ಹೋದಲ್ಲಿ ಬಂದಲ್ಲಿ ಶಕ್ತಿ ಪ್ರದರ್ಶನದ ಮಾತು ಆಡುತ್ತಿದ್ದಾರೆ. ದುರಂತವೆಂದರೆ, ನೀರಾವರಿ, ಶಿಕ್ಷಣ ಮತ್ತು ಜನರ ಆರೋಗ್ಯದ ಕುರಿತು ಬಿಜೆಪಿ ನಾಯಕರು ಮಾತನಾಡುತ್ತಿಲ್ಲ. ರಾಷ್ಟ್ರೀಯ ಪಕ್ಷಗಳ ಇಂತಹ ವರ್ತನೆಯಿಂದ ಬೇಸತ್ತಿರುವ ಜನರು ರಾಜ್ಯಾದ್ಯಂತ ಜೆಡಿಎಸ್ ಪಕ್ಷದ ಪಂಚರತ್ನ ಯೋಜನೆ ಬಗ್ಗೆ ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ ಎಂದು ಕಾಶೆಂಪುರ ಸಮಾಧಾನ ವ್ಯಕ್ತಪಡಿಸಿದರು.
ಈಗಾಗಲೇ ಪಂಚರತ್ನ ಯೋಜನೆಯ ಮೊದಲ ಹಂತ ಬಹುತೇಕ ಪೂರ್ಣಗೊಂಡಿದೆ. ಬರುವ ಡಿಸೆಂಬರ್ 28ಕ್ಕೆ ಪಂಚರತ್ನದ ಮೊದಲ ಹಂತ ಮುಕ್ತಾಯಗೊಳ್ಳಲಿದೆ. ಇದಾದ ನಂತರ ಜನವರಿ 3ರಿಂದ ಪಂಚರತ್ನ ಯೋಜನೆಯ ಎರಡನೇ ಹಂತ ಬೀದರ್ ಜಿಲ್ಲೆಯಿಂದ ಆರಂಭಗೊಳ್ಳಲಿದೆ. ಬೀದರ್ ಜಿಲ್ಲೆಯಲ್ಲಿ ನಾಲ್ಕು ದಿನ ಪಂಚರತ್ನ ಸಂಚರಿಸಲಿದೆ. ಇದಾದ ನಂತರ ಜನವರಿ 7ರಂದು ಕಲಬುರಗಿ ಜಿಲ್ಲೆ ಪ್ರವೇಶಿಸಲಿದೆ ಎಂದು ಮಾಹಿತಿ ನೀಡಿದರು.
ಸಿಎಂ ಅಭ್ಯರ್ಥಿ, ಗೊಂದಲ ಇಲ್ಲ
ರಾಜ್ಯದಲ್ಲಿ ಒಂದು ವೇಳೆ ಜೆಡಿಎಸ್ ಪೂರ್ಣ ಬಹುಮತ ಪಡೆದರೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರೇ ಪುನಃ ಮುಖ್ಯಮಂತ್ರಿ ಆಗಲಿದ್ದಾರೆ. ಈ ನಿಟ್ಟಿನಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಅವರು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸುತ್ತಾ ಸಮಜಾಯಿಷಿ ನೀಡಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ್ ಮಹಾಗಾಂವಕರ್, ಸೇಡಂ ಜೆಡಿಎಸ್ ಅಭ್ಯರ್ಥಿ ಬಾಲರಾಜ್ ಗುತ್ತೇದಾರ್, ದಕ್ಷಿಣ ಕ್ಷೇತ್ರದ ಆಕಾಂಕ್ಷಿ ಕೃಷ್ಣಾರೆಡ್ಡಿ, ಅಫಜಲಪುರ ಜೆಡಿಎಸ್ ಅಭ್ಯರ್ಥಿ ಶಿವಕುಮಾರ್ ನಾಟಿಕಾರ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಕಲಬುರಗಿ ಜಿಲ್ಲಾ ಜೆಡಿಎಸ್ ಪಕ್ಷದ ಚುನಾವಣಾ ಉಸ್ತುವಾರಿ ಮಹಾಂತೇಶ್ ಪಾಟೀಲ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದನಗೌಡ ಪಾಟೀಲ್ ಸೇರಿದಂತೆ ಇತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.


ಡಿ.2ಕ್ಕೆ ಆಳಂದ ಪಟ್ಟಣಕ್ಕೆ ಎಚ್.ಡಿ.ಡಿ
ಡಿಸೆಂಬರ್ 2ರಂದು ಆಳಂದ ಪಟ್ಟಣದಲ್ಲಿ ನಡೆಯಲಿರುವ ಜೆಡಿಎಸ್ ಮಹಿಳಾ ಸಮಾವೇಶಕ್ಕೆ ಮಾಜಿ ಪ್ರಧಾನಮಂತ್ರಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಆಗಮಿಸಲಿದ್ದಾರೆ ಎಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ ತಿಳಿಸಿದರು.
ಇದರ ಜೊತೆಗೆ, ನ.27ರಂದು ಸುಲೇಪೇಟ ಪಟ್ಟಣದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಸದ ಹಾಗೂ ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣ ಪಾಲ್ಗೊಳ್ಳಲಿದ್ದಾರೆ ಎಂದರು.
ಡಿ.8ರಂದು ಅಫಜಲಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಶಿವಕುಮಾರ್ ನಾಟಿಕಾರ್ ನೇತೃತ್ವದಲ್ಲಿ ನಡೆಯಲಿರುವ ಜೆಡಿಎಸ್ ಬೃಹತ್ ಸಮಾವೇಶದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.


ಅವರದ್ದು ಮ್ಯಾಚ್ ಫಿಕ್ಸಿಂಗ್ ರಾಜಕಾರಣ
ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡು ಆಡಳಿತ ನಡೆಸುತ್ತಿವೆ. ಆ ಕಾರಣಕ್ಕಾಗಿಯೇ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರಕಾರ ಕೆಡವಲಾಯಿತು ಎಂದು ಮಾಜಿ ಸಚಿವ ಕಾಶೆಂಪುರ ಟೀಕಿಸಿದರು.