ಉಪಸಮರ ಸಿದ್ಧತೆ ಕಾಂಗ್ರೆಸ್ ಚರ್ಚೆ

ಬೆಂಗಳೂರು, ಜ. ೯- ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವ ಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ತಯಾರಿ ನಡೆಸಿದ್ದು, ಇಂದು ಪಕ್ಷದ ಕಚೇರಿಯಲ್ಲಿ ಹಿರಿಯ ನಾಯಕರ ಸಮಾಲೋಚನಾ ಸಭೆ ನಡೆಯಿತು.
ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ ಚುನಾವಣಾ ಆಯೋಗ ಇನ್ನು ಚುನಾವಣಾ ದಿನಾಂಕವನ್ನು ನಿಗದಿ ಮಾಡಿಲ್ಲ. ಇನ್ನೆರಡು ದಿನಗಳಲ್ಲಿ ಚುನಾವಣಾ ದಿನಾಂಕ ನಿಗದಿ ಮಾಡಿ ಆಯೋಗ ಘೋಷಣೆ ಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಈ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ತಯಾರಿ ನಡೆಸಿದೆ.
ಈ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಪ್ರಚಾರದ ವೈಖರಿ, ಗೆಲುವಿನ ರಣತಂತ್ರಗಳ ಬಗ್ಗೆ ಇಂದು ಕೆಪಿಸಿಸಿ ಪ್ರಧಾನ ಕಚೇರಿಯಲ್ಲಿ ಹಿರಿಯ ನಾಯಕರು ಸಭೆ ಸೇರಿ ಸುದೀರ್ಘ ಚರ್ಚೆ ನಡೆಸಿದರು.
ಇಂದಿನ ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಂಸದ ಹಾಗೂ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರಖಂಡ್ರೆ, ಸಲೀಂ ಅಹಮದ್, ಸತೀಶ್ ಜಾರಕಿಹೊಳಿ, ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಮಾಜಿ ಸಚಿವ ಎಂ.ಬಿ. ಪಾಟೀಲ್, ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ, ಶಾಸಕಿಯರಾದ ಲಕ್ಷ್ಮಿಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್ ಸೇರಿದಂತೆ ಈ ಮೂರು ಕ್ಷೇತ್ರಗಳ ಪ್ರಮುಖ ಮುಖಂಡರುಗಳು ಪಾಲ್ಗೊಂಡಿದ್ದರು.