ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಜಯ ಖಚಿತ : ಸಿಎಂ ಆತ್ಮವಿಶ್ವಾಸ


ಶಿವಮೊಗ್ಗ, ನ. 8:  ಆರ್.ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ನಿಶ್ಚಿತವಾಗಿದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅವರು ಭಾನುವಾರ ಶಿವಮೊಗ್ಗದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿರಾದಲ್ಲಿ ಈ ಹಿಂದಿನ ಚುನಾವಣೆಗಳ ವೇಳೆ, ಠೇವಣಿಯೇ ಬಾರದ ಸ್ಥಿತಿ ಪಕ್ಷದ್ದಾಗಿತ್ತು. ಆದರೆ ಈ ಬಾರಿ 25 ಸಾವಿರಕ್ಕೂ ಹೆಚ್ಚು ಅಂತರದಿಂದ ಬಿಜೆಪಿ ಜಯ ಸಾಧಿಸಲಿದೆ ಎಂದು ಹೇಳಿದ್ದಾರೆ.

ಆರ್.ಆರ್.ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನರವರು  40 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಲಿದ್ದಾರೆ. ಸರ್ಕಾರದ ಅಭಿವೃದ್ಧಿಗೆ ಜನ ಮತ ಹಾಕಿದ್ದಾರೆ ಎಂದರು.

ಬಿಹಾರದಲ್ಲಿಯೂ ನೂರಕ್ಕೆ ನೂರರಷ್ಟು ಎನ್ ಡಿ ಎ ಸರ್ಕಾರವೇ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಿದೆ. ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ  ಅಧಿಕಾರಿಗಳ ಸಭೆ ನಡೆಸಿ, ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.