ಉಪ ಚುನಾವಣೆ: ಎಚ್ಚರಿಕೆಯಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಸೂಚನೆ


ಬೆಳಗಾವಿ, ಮಾ.28: ಲೋಕಸಭಾ ಉಪ ಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಪಾಲನೆಗೆ ನಿಯೋಜಿಸಲಾಗಿರುವ ಎಲ್ಲ ತಂಡಗಳು ಯಾವುದೇ ರೀತಿಯ ಲೋಪಗಳಿಗೆ ಆಸ್ಪದ ನೀಡದೇ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಸೂಚನೆ ನೀಡಿದರು.
ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಸಂಬಂಧಿಸಿದಂತೆ ಬೆಳಗಾವಿ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ತಂಡಗಳ ಅಧಿಕಾರಿಗಳ ಜತೆ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.
ಉಪ ಚುನಾವಣೆ ವೇಳೆ ಎಲ್ಲರ ಗಮನ ಒಂದೇ ಕಡೆ ಕೇಂದ್ರೀಕೃತ ಆಗಿರುವುದರಿಂದ ಚುನಾವಣೆಗೆ ನಿಯೋಜಿತ ಅಧಿಕಾರಿಗಳು ಮತ್ತು ಸಿಬ್ಬಂದಿ ಸದಾ ಎಚ್ಚರಿಕೆಯಿಂದ ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸಬೇಕು.
ಎಲ್ಲ ತಂಡಗಳಿಗೂ ಈಗಾಗಲೇ ಹಲವಾರು ಸುತ್ತಿನ ತರಬೇತಿಯನ್ನು ನೀಡಲಾಗಿದೆ. ಚುನಾವಣಾ ಕೆಲಸಕ್ಕೆ ಸಂಬಂಧಿಸಿದಂತೆ ತಮ್ಮ ಅನುಭವವನ್ನು ಬಳಸಿಕೊಂಡು ನಿಷ್ಪಕ್ಷಪಾತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಕರೆ ನೀಡಿದರು.
ಫ್ಲೈಯಿಂಗ್ ಸರ್ವೆಲನ್ಸ್ ತಂಡಗಳು ಮಾದರಿ ನೀತಿಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ದೂರುಗಳು ಬಂದಾಗ ತಕ್ಷಣವೇ ಸ್ಥಳಕ್ಕೆ ತೆರಳಿ ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ ಪ್ರಕರಣಗಳನ್ನು ದಾಖಲಿಸಬೇಕು.
ಅದೇ ರೀತಿ ವಿಡಿಯೋ ಸರ್ವಲನ್ಸ್ ತಂಡಗಳು ಕೂಡ ಚುನಾವಣಾ ಪ್ರಚಾರಸಭೆಗಳು ನಡೆಯುತ್ತಿರುವ ಸ್ಥಳಗಳಲ್ಲಿ ನೀತಿಸಂಹಿತೆ ಉಲ್ಲಂಘನೆ ಹಾಗೂ ಖರ್ಚುವೆಚ್ಚಗಳ ದೃಷ್ಟಿಕೋನದಲ್ಲಿ ಹೇಗೆ ನಿಗಾ ವಹಿಸಬೇಕು ಎಂಬುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಸಲಹೆಗಳನ್ನು ನೀಡಿದರು.
ಮಹಾನಗರ ಪಾಲಿಕೆಯ ಆಯುಕ್ತರು ಹಾಗೂ ಸಹಾಯಕ ಚುನಾವಣಾಧಿಕಾರಿಯಾಗಿರುವ ಜಗದೀಶ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಸಹಾಯಕ ಚುನಾವಣಾಧಿಕಾರಿಗಳಾದ ಚನ್ನಬಸಪ್ಪ ಕೊಡ್ಲಿ, ಚುನಾವಣಾ ತರಬೇತುದಾರರಾದ ಶಿರಗಾಂವಕರ ಮತ್ತಿತರರು ಉಪಸ್ಥಿತರಿದ್ದರು.
ಇದೇ ರೀತಿಯಲ್ಲಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿರತ ತಂಡಗಳ ಜತೆ ಇನ್ನೊಂದು ಸಮಾಲೋಚನಾ ಸಭೆಯು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆಯಿತು.
ಇಲ್ಲಿಯೂ ಕೂಡ ಎಲ್ಲ ತಂಡಗಳ ಜತೆ ಮುಕ್ತ ಸಮಾಲೋಚನೆ ನಡೆಸಿದ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು, ಉಪ ಚುನಾವಣೆಯನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.
ಚುನಾವಣಾ ಕರ್ತವ್ಯ ಲೋಪವನ್ನು ಚುನಾವಣಾ ಆಯೋಗವು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತದೆ. ಆದ್ದರಿಂದ ಎಲ್ಲರೂ ಶ್ರದ್ಧೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಬೆಳಗಾವಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಶಿವನಗೌಡ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.
ಎರಡೂ ಸಮಾಲೋಚನಾ ಸಭೆಯಲ್ಲಿ ಫ್ಲೈಯಿಂಗ್ ಸರ್ವಲನ್ಸ್, ಎಸ್‍ಎಸ್ ಟಿ, ವಿಎಸ್ ಟಿ, ವಿವಿಟಿ ಸೇರಿದಂತೆ ಎಲ್ಲ ತಂಡಗಳ ಮುಖ್ಯಸ್ಥರು, ಸೆಕ್ಟರ್ ಅಧಿಕಾರಿಗಳು ಪಾಲ್ಗೊಂಡಿದ್ದರು.