ಉಮಾಕಾಂತ ನಾಗಮಾರಪಳ್ಳಿಗೆ ಸಹಕಾರ ರತ್ನ ಪ್ರಶಸ್ತಿ

ಬೀದರ:ನ.15: ಇಲ್ಲಿಯ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಅವರು ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಶನಿವಾರ ನಡೆದ 67ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಮೂರು ದಶಕಗಳಿಂದ ಸಹಕಾರ ಕ್ಷೇತ್ರದಲ್ಲಿ ಇರುವ ಉಮಾಕಾಂತ ನಾಗಮಾರಪಳ್ಳಿ ಅವರು ಜಿಲ್ಲಾಮಟ್ಟದಿಂದ ರಾಜ್ಯಮಟ್ಟದವರೆಗಿನ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ.
ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಹಾಗೂ ಕರ್ನಾಟಕ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.
ಎರಡನೇ ಅವಧಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಪ್ರಸ್ತುತ ಅಪೆಕ್ಸ್ ಬ್ಯಾಂಕ್ ನಿರ್ದೇಶಕ, ಕರ್ನಾಟಕ ಸಹಕಾರ ವಸತಿ ಮಹಾಮಂಡಳ ನಿರ್ದೇಶಕ ಹಾಗೂ ಕರ್ನಾಟಕ ಸಹಕಾರ ಗ್ರಾಹಕರ ಮಹಾಮಂಡಳದ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.
ಜಿಲ್ಲೆಯಲ್ಲಿ ಸಹಕಾರ ಚಳವಳಿ ಬಲಗೊಳಿಸಲು ಹಾಗೂ ಜಿಲ್ಲೆಯ ಜನರ ಅರ್ಥಿಕ ಮಟ್ಟ ಸುಧಾರಿಸಲು ಅವಿರತ ಶ್ರಮಿಸುತ್ತಿದ್ದಾರೆ. ತಂದೆ ಹಾಕಿಕೊಟ್ಟ ದಾರಿಯಲ್ಲೇ ಡಿಸಿಸಿ ಬ್ಯಾಂಕ್‍ನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ.
ಡಿಸಿಸಿ ಬ್ಯಾಂಕ್ ಗ್ರಾಹಕರ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ ಒದಗಿಸಲು ಎಟಿಎಂ ಹೊಂದಿರುವ ಸುಸಜ್ಜಿತ ಮೊಬೈಲ್ ಬ್ಯಾಂಕಿಂಗ್ ವ್ಯಾನ್, ಎಟಿಎಂ ಸೇವೆ ಶುರು ಮಾಡಿದ ಶ್ರೇಯ ಉಮಾಕಾಂತ ನಾಗಮಾರಪಳ್ಳಿ ಅವರಿಗೆ ಸಲ್ಲುತ್ತದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ನೋಂದಣಿಯಲ್ಲಿ ಬ್ಯಾಂಕ್ ದೇಶದ ಸಹಕಾರ ಬ್ಯಾಂಕ್‍ಗಳಲ್ಲೇ ಮೊದಲ ಸ್ಥಾನದಲ್ಲಿರುವುದು ಅವರ ರೈತ ಸ್ನೇಹಿ ಕಾರ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಸರಳ, ಸಜ್ಜನಿಕೆಗೆ ಹೆಸರಾಗಿರುವ ಅವರು ಸ್ನೇಹ ಜೀವಿಯೂ ಆಗಿದ್ದಾರೆ.
ಗಣ್ಯರ ಉಪಸ್ಥಿತಿ: ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಅಶ್ವಥ್‍ನಾರಾಯಣ, ಕಂದಾಯ ಸಚಿವ ಆರ್. ಅಶೋಕ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ ಹಾಗೂ ಹಿರಿಯ ಅಧಿಕಾರಿಗಳು ಇದ್ದರು.

ಸಹಕಾರ ಸಚಿವರ ಪ್ರಶಂಸೆ
ಬೀದರ್: ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ ಅವರು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಅವರ ಕಾರ್ಯ ಶೈಲಿಗೆ ಪ್ರಶಂಸೆ ವ್ಯಕ್ತಪಡಿಸಿದರು.
ಉಮಾಕಾಂತ ಅವರು ಸಹಕಾರ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಕಲಬುರ್ಗಿ ವಿಭಾಗದಲ್ಲೇ ಬೀದರ್‍ನಲ್ಲಿ ಆರ್ಥಿಕ ಸ್ಪಂದನ ಕಾರ್ಯಕ್ರಮ ಮಾದರಿಯಾಗಿ ಸಂಘಟಿಸಿದ್ದಾರೆ ಎಂದು ನುಡಿದರು.