ಉಸ್ತುವಾರಿ ಸಚಿವರಿಂದ ಗೃಹ ಜ್ಯೋತಿ ಯೋಜನೆಗೆ ಚಾಲನೆ

ರಾಯಚೂರು,ಆ.14:- ರಾಜ್ಯ ಸರ್ಕಾರ ರಾಜ್ಯದ ಸಾಮಾನ್ಯರ ಮತ್ತು ಬಡವರ ಅನುಕೂಲಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಜನರು ಆಪೇಕ್ಷಿಸಿದಂತೆ ಪಾರದರ್ಶಕ ಆಡಳಿತವನ್ನು ನೀಡಲಾಗುತ್ತಿದೆ. ಇದೀಗ ಗೃಹ ಜ್ಯೋತಿ ಯೋಜನೆಯ ಮೂಲಕ ಸಾಮಾನ್ಯರ ಹಾಗೂ ಬಡವರ ಬದುಕನ್ನು ಸುಸ್ಥಿರಗೊಳಿಸಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಆರ್.ಪಾಟೀಲ್ ಅವರು ಹೇಳಿದರು.

ಅವರು ಇಂದು ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಗೃಹಜ್ಯೋತಿ ಯೋಜನೆಗೆ ವಿದ್ಯುತ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ರಾಜ್ಯ ಸರ್ಕಾರವು ಜನರ ಅನುಕೂಲಕ್ಕಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರಿಗೆ ಲಿಂಗತ್ವ ಸಲ್ಪಸಂಖ್ಯಾತರನ್ನು ಒಳಗೊಂಡಂತೆ ಉಚಿತ ಸಾರಿಗೆ ಪ್ರಯಾಣವನ್ನು ನೀಡಲಾಗಿದೆ. ಅನ್ನ ಭಾಗ್ಯ ಯೋಜನೆಯಡಿ ಸರ್ಕಾರದಿಂದ ಉಚಿತವಾಗಿ 10 ಕೆ.ಜಿ ಅಕ್ಕಿಯನ್ನು ನೀಡುವ ಭರವಸೆಯನ್ನು ಸರ್ಕಾರ ಈಡೇರಿಸಿದ್ದು, ಅಕ್ಕಿಯ ಕೊರತೆಯಿಂದಾಗಿ 5 ಕೆ.ಜಿ ಅಕ್ಕಿ ಹಾಗೂ 5 ಕೆ.ಜಿ ಅಕ್ಕಿಯ ಬದಲಾಗಿ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ವರ್ಗಾಹಿಸಲಾಗಿದೆ ಎಂದರು.

ಸರ್ಕಾರದ ಐದು ಯೋಜನೆಗಳಲ್ಲಿ ಮಹತ್ತರವಾದ ಯೋಜನೆಯಾದ ಗೃಹ ಜ್ಯೋತಿ ಯೋಜನೆಯನ್ನು ಈಗಾಗಲೇ ರಾಜ್ಯದಲ್ಲಿ ಜಾರಿಗೊಳಿಸಲಾಗಿದ್ದು, ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಭರವಸೆಯನ್ನು ಸಹ ಸರ್ಕಾರ ಈಡೇರಿಸಿದೆ. ಇದರಿಂದ ಸಾಮಾನ್ಯ ಹಾಗೂ ಬಡವರ ಬದುಕು ಸುಸ್ಥಿರವಾಗಿದ್ದು, ಇಂದು ಜಿಲ್ಲೆಯಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಯೋಜನೆಗೆ ಕೊನೆಯ ದಿನಾಂಕವನ್ನು ನೀಡಿಲ್ಲ ಸಾರ್ವಜನಿಕರು ಅರ್ಜಿ ಸಲ್ಲಿಸಿದ ನಂತರ ಮುಂದಿನ ತಿಂಗಳು ಅವರ ವಿದ್ಯುತ್ ಬಿಲ್ ಸೊನ್ನೆ ರೂಪದಲ್ಲಿ ಅಂದರೆ ಉಚಿತ ವಿದ್ಯುತ್ ನೀಡಲಾಗುತ್ತಿದೆ ಎಂದು ತಿಳಿಸಿದರು.

ಗೃಹ ಲಕ್ಷ್ಮಿ ಯೋಜನೆಯಡಿ ಪ್ರತಿ ಮನೆಯ ಯಜಮಾನಿಯ ಖಾತೆಗೆ 2000 ರೂ. ಹಣವನ್ನು ವರ್ಗಾಯಿಸುವ ಯೋಜನೆಗೆ ರಾಜ್ಯದಲ್ಲಿ ಚಾಲನೆ ನೀಡಲಾಗಿದ್ದು, ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಶೀಘ್ರವೇ ಪ್ರತಿ ಕುಟುಂಬದ ಯಜಮಾನಿಗೆ ತಿಂಗಳಿಗೆ 2000 ರೂ.ಗಳನ್ನು ಜಮಾ ಮಾಡಲಾಗುವುದು ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದಿಂದ 5 ಸಾವಿರ ಕೋಟಿಯನ್ನು ಘೋಷಣೆ ಮಾಡಲು ಸರ್ಕಾರದಿಂದ ಈಗಾಗಲೇ ತೀರ್ಮಾನ ಕೈಗೊಳ್ಳಲಾಗುತ್ತಿದ್ದು, ಮತ್ತು ಈ ಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಎಲ್ಲಾ ರೀತಿಯ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯನ್ನು(ಏಮ್ಸ್) ಜಿಲ್ಲೆಯಲ್ಲಿಯೇ ಸ್ಥಾಪಿಸುವ ಕುರಿತು ಈಗಾಗಲೇ ಸಾಕಷ್ಟು ಹೋರಾಟಗಳು ನಡೆಯುತ್ತಿದ್ದು, ಸರ್ಕಾರದಿಂದ ಈಗಾಗಲೇ ಕೇಂದ್ರಕ್ಕೆ ರಾಯಚೂರು ಜಿಲ್ಲೆಯ ಹೆಸರನ್ನು ಮಾತ್ರ ಶಿಫಾರಸ್ಸು ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಕೇಂದ್ರಕ್ಕೆ ನಿಯೋಗ ತೆರಳಿ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಮಾಡುವ ಕುರಿತು ಕ್ರಮಕೈಗೊಳ್ಳಲು ಒತ್ತಾಯಿಸಲಾಗುವುದು ಎಂದು ತಿಳಿಸಿದರು.