ಉ. ಪ್ರದೇಶ ಚುನಾವಣೆ ಏಕಾಂಗಿ ಸ್ಪರ್ಧೆಗೆ ಕಾಂಗ್ರೆಸ್ ನಿರ್ಧಾರ

ನವದೆಹಲಿ/ ಲಕ್ನೋ,ನ.೧೫- ಉತ್ತರಪ್ರದೇಶ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಮುನ್ನವೇ ಚುನಾವಣಾ ಕಣ ರಂಗೇರುತ್ತಿದೆ. ಕಾಂಗ್ರೆಸ್ ಪಕ್ಷ ಎಲ್ಲಾ ೪೦೩ ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ಮುಂದಾಗಿದೆ.

ಕಾಂಗ್ರೆಸ್ ಪಕ್ಷ ಸ್ವತಂತ್ರವಾಗಿ ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ಮೂಲಕ ಅಧಿಕಾರ ಗದ್ದುಗೆ ಹಿಡಿಯವ ವಿಶ್ವಾಸವನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವ್ಯಕ್ತಪಡಿಸಿದ್ದಾರೆ.

ಅನೂಪ್‌ಶಹರ್‌ನಲ್ಲಿ ನಡೆದ ಪ್ರತಿಜ್ಞಾ ಸಮ್ಮೇಳನದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಾವುದೇ ರಾಜಕೀಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

೨೦೧೭ ರ ಉನ್ನಾವೋ ಅತ್ಯಾಚಾರ ಪ್ರಕರಣ ಮತ್ತು ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದ ನಾಯಕರು ಎಲ್ಲಿಯೂ ಕಾಣಿಸಲಿಲ್ಲ. ಆದರೆ, ಕಾಂಗ್ರೆಸ್ ಮಾತ್ರ ಜನರಿಗಾಗಿ ಹೋರಾಡುತ್ತಿದೆ ಎಂದು ಹೇಳಿದರು.

ಉತ್ತರ ಪ್ರದೇಶ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ‘ಮಾಡು ಇಲ್ಲವೇ ಮಡಿ’ ಹೋರಾಟವಾಗಿದೆ .ಈ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಪಕ್ಷ ಬಲಪಡಿಸುವ ಮೂಲಕ ಮಾತ್ರ ಚುನಾವಣಾ ಸ್ಪರ್ಧೆಯನ್ನು ಗೆಲ್ಲಲು ಸಾಧ್ಯ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರಬೇಕು ಮತ್ತು ಪಕ್ಷದ ಎಲ್ಲ ಚಟುವಟಿಕೆಗಳನ್ನು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಬೇಕು ಎಂದ ಅವರು. ಕೇಸರಿ ಪಕ್ಷಕ್ಕೆ ಸ್ವಾತಂತ್ರ್ಯ ಚಳವಳಿಯ ಬಗ್ಗೆ ಗೌರವವಿಲ್ಲ, ಅದರ ನಾಯಕರು ದೇಶದ ಸ್ವಾತಂತ್ರ್ಯಕ್ಕಾಗಿ ರಕ್ತ ಮತ್ತು ಬೆವರು ಸುರಿಸಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಬಿ.ಆರ್ ಅಂಬೇಡ್ಕರ್ ಅವರಂತಹ ನಾಯಕರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು. ಕಾಂಗ್ರೆಸ್ ಕೇವಲ ಅಭಿವೃದ್ಧಿಯನ್ನು ತಂದಿಲ್ಲ. ಆದರೆ, ಸಹೋದರತ್ವ ಮತ್ತು ಸಾಮರಸ್ಯವನ್ನು ಉತ್ತೇಜಿಸಿದೆ ಎಂದು ಹೇಳಿದರು.

ಹೆಚ್ಚುತ್ತಿರುವ ಇಂಧನ ಬೆಲೆಗಳ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ೭೦ ವರ್ಷಗಳ ಕಾಲ ಕಾಂಗ್ರೆಸ್ ಇಂಧನ ಬೆಲೆಗಳು ಲೀಟರ್‌ಗೆ ೭೦ ರೂ.ಗಿಂತ ಹೆಚ್ಚಾಗದಂತೆ ನೋಡಿಕೊಂಡಿದೆ. ಆದಾಗ್ಯೂ, ಕಳೆದ ಏಳು ವರ್ಷಗಳಲ್ಲಿ, ಬಿಜೆಪಿ ಸರ್ಕಾರವು ಇದನ್ನು ನಿರಾಸೆಗೊಳಿಸಿದೆ, ಇದರಿಂದಾಗಿ ಬೆಲೆಗಳು ಲೀಟರ್‌ಗೆ ೧೦೦ ರೂ.ಏರಿದೆ ಎಂದು ದೂರಿದರು.