ಎಚ್‌ಡಿಕೆ, ಮಂಜುನಾಥ್ ಸೇರಿ ಘಟಾನುಘಟಿಗಳ ನಾಮಪತ್ರ ಸಲ್ಲಿಕೆ

(ಸಂಜೆವಾಣಿ ಪ್ರತಿನಿಧಿಯಿಂದ)
ಮಂಡ್ಯ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ತಮ್ಮ ನಾಮಪತ್ರವನ್ನು ಮಂಡ್ಯ ಚುನಾವಣಾಧಿಕಾರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ಬಿ.ಎಸ್. ಪುಟ್ಟರಾಜು, ಬಿಜೆಪಿ ನಾಯಕ ಯಧುವೀರ್ ಒಡೆಯರ್ ಉಪಸ್ಥಿತರಿದ್ದರು.

ಬೆಂಗಳೂರು,ಏ.೪:ಈ ತಿಂಗಳ ೨೬ ರಂದು ನಡೆಯಲಿರುವ ಮೊದಲ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ನಾ ಮುಂದು ತಾ ಮುಂದು ಪೈಪೋಟಿಯಲ್ಲಿ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದರು.ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹೆಸರಾಂತ ಹೃದಯತಜ್ಞ ಡಾ. ಸಿ.ಎನ್ ಮಂಜುನಾಥ್,ತೇಜಸ್ವಿ ಸೂರ್ಯ ಸೇರಿದಂತೆ ಬಹುತೇಕ ಎಲ್ಲ ಘಟಾನುಘಟಿ ನಾಯಕರುಗಳು ಇಂದು ತಮ್ಮ ತಮ್ಮ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಿದರು.ತಂದೆ-ತಾಯಿ ಆರ್ಶೀವಾದ ಪಡೆದ ಹೆಚ್‌ಡಿಕೆ ನಾಮಪತ್ರ ಸಲ್ಲಿಕೆಗೂ ಮುನ್ನ ಹೆಚ್.ಡಿ ಕುಮಾರಸ್ವಾಮಿ ಅವರು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ತೆರಳಿ ತಂದೆ-ತಾಯಿಯ ಆರ್ಶೀವಾದ ಪಡೆದುಕೊಂಡರು.ತಮ್ಮ ತಂದೆ ಹಾಗೂ ಮಾಜಿ ಪ್ರಧಾನಿ ದೇವೇಗೌಡರಿಂದ ಬಿ-ಫಾರಂ ಪಡೆದುಕೊಂಡ ಕುಮಾರಸ್ವಾಮಿ ಅವರು, ನಂತರ ತಾಯಿ ಚೆನ್ನಮ್ಮ ಹಾಗೂ ಹೆಚ್.ಡಿ ದೇವೇಗೌಡರ ಕಾಲಿಗೆ ನಮಸ್ಕರಿಸಿ ಆರ್ಶೀವಾದ ಪಡೆದುಕೊಂಡರು.ಈ ಬಗ್ಗೆ ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಟ್ವೀಟ್ ಮಾಡಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿನಾಮಪತ್ರ ಸಲ್ಲಿಸುವ ಮುನ್ನ ತಂದೆ-ತಾಯಿಯ ಆರ್ಶೀವಾದ ಪಡೆದುಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.
ಯಡಿಯೂರಪ್ಪ ಉಪಸ್ಥಿತಿ
ಮಂಡ್ಯದಿಂದ ಕುಮಾರಸ್ವಾಮಿ ಅವರು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಹ ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಕೆ ನಂತರ ಬಿಜೆಪಿ-ಜೆಡಿಎಸ್ ಪಕ್ಷಗಳು ಜಂಟಿಯಾಗಿ ಸಮಾವೇಶವನ್ನು ನಡೆಸುವ ಮೂಲಕ ತಮ್ಮ ಶಕ್ತಿ ಪ್ರದರ್ಶನ ಮಾಡಿದವು.ಇದೇ ವೇಳೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹೃದ್ರೋಗತಜ್ಞ ಡಾ. ಮಂಜುನಾಥ್ ಇಂದು ರಾಮನಗರ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ರಾಮನಗರದಲ್ಲಿರುವ ಚಾಮುಂಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಬೃಹತ್ ಶಕ್ತಿ ಪ್ರದರ್ಶನ ನಡೆಸಿ ನಾಮಪತ್ರ ಸಲ್ಲಿಸಿದರು.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಹೃದಯಗಳು ಒಂದಾಗಿವೆ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ ಎಂದರು.
ಮತದಾರರೇ ಉತ್ತರ
ಎಲ್ಲ ೮ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಸಭೆ ನಡೆಸಲಾಗಿದೆ. ಉತ್ತಮ ಪ್ರತಿಕ್ರಿಯೆಯೂ ವ್ಯಕ್ತವಾಗಿದ್ದು, ಅಮಿತ್ ಶಾ ಚೆನ್ನಪಟ್ಟಣದಲ್ಲಿ ನಡೆಸಿದ ರೋಡ್ ಶೋಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಡಿಕೆ ಸಹೋದರರು ಮಾಡುವ ಹೇಳಿಕೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಇದಕ್ಕೆ ಮತದಾರರೇ ಉತ್ತರ ನೀಡಲಿದ್ದಾರೆ ಎಂದರು.
ಪ್ರಜ್ವಲ್ ನಾಮಪತ್ರ
ಹಾಸನ ಲೋಕಸಭಾ ಕ್ಷೇತ್ರದಿಂದ ಅಖಾಡಕ್ಕಿಳಿದಿರುವ ಹೆಚ್.ಡಿ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ, ಬೃಹತ್ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಹೆಚ್.ಡಿ. ರೇವಣ್ಣ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ, ಉಪಸ್ಥಿತರಿದ್ದರು.
ತೇಜಸ್ವಿ ಸೂರ್ಯ ನಾಮಪತ್ರ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ತೇಜಸ್ವಿ ಸೂರ್ಯ ತಮ್ಮ ನಾಮಪತ್ರ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರಸಚಿವ ಅನುರಾಗ್‌ಸಿಂಗ್ ಠಾಕೂರ್,ವಿಪಕ್ಷ ನಾಯಕ ಅಶೋಕ್, ಮಾಜಿ ಸಚಿವ ಡಾ. ಸಿ.ಎನ್ ಅಶ್ವತ್ಥನಾರಾಯಣ, ಸಂಸದ ಪ್ರತಾಪ್‌ಸಿಂಹ,ಶಾಸಕ ಸಿ.ಜೆ ರಾಮಮೂರ್ತಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.ಚಿತ್ರದುರ್ಗ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್‌ಚಂದ್ರಪ್ಪ, ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಇವರುಗಳು ನಾಮಪತ್ರ ಸಲ್ಲಿಸಿದರು.

ಮೈತ್ರಿ ಲೋಕಸಭೆಗೆ ಸೀಮಿತವಲ್ಲ
ಬಿಜೆಪಿ-ಜೆಡಿಎಸ್ ಮೈತ್ರಿ ಲೋಕಸಭಾ ಚುನಾವಣೆಗೆ ಮಾತ್ರ ಸೀಮಿತವಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.
ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾತನಾಡಿದ ಅವರು, ರೈತ ದಲಿತ ವಿರೋಧಿ ಕಾಂಗ್ರೆಸ್ ಪಕ್ಷವನ್ನು ದೇಶದಿಂದ ಕಿತ್ತೊಗೆಯಬೇಕು. ಈ ನಿಟ್ಟಿನಲ್ಲಿಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಮಾಜಿ ಪ್ರಧಾನಿ ದೇವೇಗೌಡರು ನಮ್ಮೆಲ್ಲರಿಗೂ ಹಿರಿಯರಾಗಿದ್ದಾರೆ.ಕಳೆದ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ಆರ್ಶೀವಾದ ಇರಲಿಲ್ಲ. ಈ ಚುನಾವಣೆಯಲ್ಲಿ ದೇವೇಗೌಡರ ಆರ್ಶೀವಾದ ನಮ್ಮ ಮೇಲಿದೆ ಎಂದರು.