ಎಲ್ಲಾ ೧೧ ಅಭ್ಯರ್ಥಿಗಳು ಅವಿರೋಧ ಆಯ್ಕೆ ಖಚಿತ

ಪರಿಷತ್ ಚುನಾವಣೆ

(ಸಂಜೆವಾಣಿ ಪ್ರತಿನಿಧಿಯಿಂದ)
ವಿಧಾನ ಸಭೆಯಿಂದ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆಯಲ್ಲಿ ಪುತ್ರ ಡಾ. ಯತಿಂದ್ರ ಅವರಿಗೆ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದರು. ಡಿಸಿಎಂ ಡಿ.ಕೆ. ಶಿವಕುಮಾರ್, ಗೋವಿಂದರಾಜು, ಐವಾನ್ ಡಿಸೋಜಾ ಮತ್ತಿತರರು ಇದ್ದಾರೆ.

ಬೆಂಗಳೂರು, ಜೂ. ೩-ವಿಧಾನಸಭೆಯಿಂದ ವಿಧಾನ ಪರಿಷತ್ತಿನ ೧೧ ಸ್ಥಾನಗಳಿಗೆ ಜೂ. ೧೩ ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್‌ನಿಂದ ೭, ಬಿಜೆಪಿಯಿಂದ ಮೂವರು ಹಾಗೂ ಜೆಡಿಎಸ್‌ನಿಂದ ಒಬ್ಬ ಅಭ್ಯರ್ಥಿಗಳು ಇಂದು ತಮ್ಮ ನಾಮಪತ್ರ ಸಲ್ಲಿಸಿದ್ದು, ಇವರೆಲ್ಲರು ಅವಿರೋಧವಾಗಿ ಆಯ್ಕೆಯಾಗುವುದು ಬಹತೇಕ ನಿಶ್ಚಿತ.
ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕಡೆಯ ದಿನವಾಗಿದ್ದು, ವಿಧಾನಸಭೆಯ ಬಲಾಬಲದ ಪ್ರಕಾರ ಕಾಂಗ್ರೆಸ್ ಪಕ್ಷಕ್ಕೆ ೭, ಬಿಜೆಪಿಗೆ ೩ ಹಾಗೂ ಜೆಡಿಎಸ್‌ಗೆ ೧ ಸ್ಥಾನ ಗೆಲ್ಲಲು ಅವಕಾಶವಿದ್ದು, ಒಟ್ಟು ೧೧ ಸ್ಥಾನಗಳಿಗೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ನ ಒಟ್ಟಾರೆ ೧೧ ಅಭ್ಯರ್ಥಿಗಳು ಮಾತ್ರ ಕಣದಲ್ಲಿರುವುದರಿಂದ ಇವರೆಲ್ಲರ ಆಯ್ಕೆ ಅವಿರೋಧ ಆಯ್ಕೆ ಬಹುತೇಕ ಖಚಿತ.ಕಾಂಗ್ರೆಸ್ ಗೆಲ್ಲಲು ಅವಕಾಶ ಇರುವ ೭ ಸ್ಥಾನಗಳಿಗೆ ಮುಖ್ಯಮಂತ್ರಿ ಸಿದ್ದರಾಮ್ಯಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ, ಸಣ್ಣ ನೀರಾವರಿ ಸಚಿವ ಭೋಸರಾಜು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಐವಾನ್ ಡಿಸೋಜ, ಬಲ್ಕೀಸ್ ಬಾನು, ಜಗದೇವ ಗುತ್ತೇದಾರ್, ವಸಂತಕುಮಾರ್ ಇವರುಗಳು ಇಂದು ತಮ್ಮ ಉಮೇದುವಾರಿಕೆಯನ್ನು ಚುನಾವಣಾಧಿಕಾರಿಯಾಗಿರುವ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ವಿಶಾಲಾಕ್ಷಿಯವರಿಗೆ ಸಲ್ಲಿಸಿದರು.ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಪಸ್ಥಿತರಿದ್ದರು.
ಬಿಜೆಪಿ ಅಭ್ಯರ್ಥಿಗಳ ನಾಮಪತ್ರ
ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಬಿಜೆಪಿಗೆ ೩ ಸ್ಥಾನಗಳು ಗೆಲ್ಲಲು ಅವಕಾಶವಿದ್ದು, ಅದರಂತೆ ೩ ಸ್ಥಾನಗಳಿಗೆ ಮಾಜಿ ಸಚಿವ ಸಿ.ಟಿ. ರವಿ, ಹಾಲಿ ವಿಧಾನ ಪರಿಷತ್ ಸದಸ್ಯ ಹಾಗೂ ವಿರೋಧ ಪಕ್ಷದ ಮುಖ್ಯಸಚೇತಕ ರವಿಕುಮಾರ್, ಮಾಜಿ ಶಾಸಕ ಎಂ.ಜಿ. ಮುಳೆ ಇವರುಗಳು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರಗಳನ್ನು ಸಲ್ಲಿಸಿದರು.ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಮುಖಂಡರುಗಳು ಉಪಸ್ಥಿತರಿದ್ದರು.
ಜೆಡಿಎಸ್‌ನಿಂದ ಜವರಾಯಗೌಡ ನಾಮಪತ್ರ
ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಒಂದು ಸ್ಥಾನ ಗೆಲ್ಲಲು ಅವಕಾಶವಿದ್ದು, ಈ ಒಂದು ಸ್ಥಾನಕ್ಕೆ ಜವರಾಯಗೌಡ ಅವರನ್ನು ಜೆಡಿಎಸ್ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ.ವಿಧಾನಸೌಧದಲ್ಲಿಂದು ಬೆಳಿಗ್ಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ನ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಈ ಸಭೆಯಲ್ಲಿ ಜವರಾಯಗೌಡ ಅವರನ್ನು ವಿಧಾನ ಪರಿಷತ್ ಅಭ್ಯರ್ಥಿಯನ್ನಾಗಿಸುವ ನಿರ್ಧಾರ ಕೈಗೊಳ್ಳಲಾಯಿತು.
ಅದರಂತೆ ಜವರಾಯಗೌಡ ಅವರು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.
೧೧ ಸ್ಥಾನ ಅವಿರೋಧ ಆಯ್ಕೆ
ವಿಧಾನ ಪರಿಷತ್ತಿನ ೧೧ ಸ್ಥಾನಗಳಿಗೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ನ ಒಟ್ಟಾರೆ ೧೧ ಅಭ್ಯರ್ಥಿಗಳು ಮಾತ್ರ ಸಲ್ಲಿಸಿದ್ದು, ಈ ಪಕ್ಷಗಳು ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದ ಹಿನ್ನೆಲೆಯಲ್ಲಿ ಎಲ್ಲಾ ೧೧ ಅಭ್ಯರ್ಥಿಗಳ ಆಯ್ಕೆ ಅವಿರೋಧವಾಗಿ ಆಯ್ಕೆಯಾಗಲಿದ್ದು, ನಾಮಪತ್ರ ವಾಪಸ್ಸಾತಿಗೆ ಜೂ.೬ರಂದು ಕಡೆಯ ದಿನವಾಗಿದೆ. ಅಭ್ಯರ್ಥಿಗಳ ಅವಿರೋಧ ಆಯ್ಕೆಯನ್ನು ಅಧಿಕೃತವಾಗಿ ಪ್ರಕಟಿಸಲಾಗುತ್ತದೆ. ನಾಳೆ ಎಲ್ಲಾ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಯಲಿದೆ.
ಈ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ನಿನ್ನೆ ತಮ್ಮ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದವು. ಜೆಡಿಎಸ್ ಇಂದು ತನ್ನ ಅಭ್ಯರ್ಥಿ ಆಯ್ಕೆಯನ್ನು ಅಂತಿಮಗೊಳಿಸಿತು.