ಎಸ್‍ಇಪಿ, ಟಿಎಸ್‍ಪಿ ದುರ್ಬಳಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಸಂಜೆವಾಣಿ ನ್ಯೂಸ್
ಮೈಸೂರು, ಫೆ.24:- ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾಗಿದ್ದ ಎಸ್‍ಸಿಪಿ ಹಾಗೂ ಟಿಎಸ್‍ಪಿ ಹಣವನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ದಲಿತ ವಿರೋಧಿ ಮನಸ್ಥಿತಿ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿ ನಗರ ಹಾಗೂ ಜಿಲ್ಲಾ ಬಿಜೆಪಿ ಘಟಕದ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾ ಪಂಚಾಯತ್ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕಳೆದ 9 ತಿಂಗಳಿನಲ್ಲಿ, ದಲಿತ ಸಮುದಾಯ ಸಾಕಷ್ಟು ಕಿರುಕುಳ ಅನುಭವಿಸಿದೆ. ದಲಿತ ಸಮುದಾಯದ ವಿಚಾರದಲ್ಲಿ ಕೇವಲ ಮಾತಿನಲ್ಲಿ ಮಾತ್ರ ಕಾಳಜಿ ತೋರುವ ಮೂಲಕ ದಲಿತ ಸಮುದಾಯವನ್ನು ವಂಚಿಸುತ್ತಿದ್ದಾರೆ. ಚುನಾವಣೆಯಲ್ಲಿ ಗೆಲ್ಲುವ ಸಲುವಾಗಿ ದಲಿತರಿಗೆ ಮೀಸಲಿಟ್ಟಿದ್ದ ಎಸ್‍ಇಪಿ ಹಾಗೂ ಟಿಎಸ್‍ಪಿ ಹಣವನ್ನು ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗಿದೆ ಎಂದು ಕಿಡಿ ಕಾರಿದರು.
ದಲಿತರ ರಕ್ಷಣೆ ಮಾಡಬೇಕಾದ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಇದರ ಬಗ್ಗೆ ಸೊಲ್ಲೆತ್ತದೆ ಕಾಂಗ್ರೆಸ್ ಪಕ್ಷದ ಹಿತಕ್ಕಾಗಿ ದಲಿತ ಸಮುದಾಯದ ಹಿತವನ್ನೇ ಬಲಿಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ಹಣ ವೆಚ್ಚ ಮಾಡಲು ಯಾವ ಗ್ಯಾರಂಟಿಯೂ ಅಡ್ಡ ಬಂದಿಲ್ಲ. ದಲಿತರ ಹಿತಾಸಕ್ತಿಗಿಂತ ವೋಟ್ ಬ್ಯಾಂಕ್ ರಾಜಕಾರಣವೇ ಸಿದ್ದರಾಮಯ್ಯ ಸರ್ಕಾರದ ಆದ್ಯತೆಯಾಗಿರುವುದು ಶೋಚನೀಯ ಸಂಗತಿ. ರಾಜ್ಯದಲ್ಲಿ ಕಳೆದ ಎಂಟು ತಿಂಗಳಿನಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಗೃಹ ನಿರ್ಮಾಣ ಯೋಜನೆ ಸ್ಥಗಿತಗೊಂಡಿದೆ. ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಸಾವಿರಾರು ಮನೆಗಳನ್ನು ನಿರ್ಮಿಸಿ ಹಂಚುತ್ತಿದ್ದರೆ, ರಾಜ್ಯ ಸರ್ಕಾರದ ಯೋಜನೆ ಕೋಮಾ ಸ್ಥಿತಿಗೆ ತಲುಪಿದೆ ಎಂದು ದೂರಿದರು.
ರಾಜ್ಯ ಸರ್ಕಾರದ ಈ ನಡೆಯಿಂದ ರೈತ ನಿಧಿ ಯೋಜನೆಯಲ್ಲಿ ದಲಿತ ಕುಟುಂಬದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನ, ಕಿಸಾನ್ ಸಮ್ಮಾನ್ ಯೋಜನೆಗೆ ಹೆಚ್ಚುವರಿಯಾಗಿ ನೀಡಲಾಗುತ್ತಿದ್ದ 4 ಸಾವಿರ ರೂ.ಗಳಿಗೆ ಕತ್ತರಿ ಹಾಕಲಾಗಿದೆ. ಸಿದ್ದರಾಮಯ್ಯ ಬಾಯಿ ತೆಗೆದರೆ ದಲಿತ ಮತ್ತು ಆದಿವಾಸಿಗಳ ಕಲ್ಯಾಣದ ಬಗ್ಗೆ ಮಾತನಾಡುವುದಕ್ಕೆ ಮಾತ್ರ ಅವರ ಹಿತಾಸಕ್ತಿ ಸೀಮಿತಗೊಳಿಸಿದ್ದಾರೆ. ಎಸ್ಸಿ ಮತ್ತು ಎಸ್ಟಿ ಸಮುದಾಯದ ಉದ್ಯಮಶೀಲತೆ ಉತ್ತೇಜಿಸುವ ಯೋಜನೆ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಆಸಕ್ತಿಯಿಲ್ಲ. ರಸ್ತೆ ಬದಿ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರದ ಸ್ವ-ನಿಧಿ ಯೋಜನೆಗೆ ರಾಜ್ಯ ಸರ್ಕಾರ ದಲಿತ ಉದ್ಯಮಿಗಳಿಗೆ ಪೆÇ್ರೀತ್ಸಾಹ ಧನವಾಗಿ ಬಡ್ಡಿಯಲ್ಲಿ ಪಾಲು ಕೊಡಬಹುದಿತ್ತು. ಆದರೆ ಅದರ ಕಡೆ ಗಮನವೇ ಕೊಟ್ಟಿಲ್ಲ ಎಂದು ಕಿಡಿ ಕಾರಿದರು.
ಪ್ರತಿಭಟನೆಯಲ್ಲಿ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ಜಿಲ್ಲಾಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಮಾಜಿ ಶಾಸಕ ಹರ್ಷವರ್ಧನ್, ಮಾಜಿ ಸಚಿವ ಎಂ.ಶಿವಣ್ಣ, ಪ್ರಧಾನ ಕಾರ್ಯದರ್ಶಿಗಳಾದ ಕೇಬಲ್ ಮಹೇಶ್, ಬಿ.ಎಂ.ರಘು, ಗಿರಿಧರ್, ಪ್ರಮುಖರಾದ ಎನ್.ವಿ.ಪಣೀಶ್, ಮಹಾದೇವಯ್ಯ, ಸಂದೇಶ್ ಸ್ವಾಮಿ, ಮಂಗಳ ಶೇಖರ್, ಬಿ.ಪಿ.ಮಂಜುನಾಥ್, ಸುರೇಶ್ ಬಾಬು, ಕಿರಣ್ ಜಯರಾಮ್, ಮಹೇಶ್ ಮಟವಡಿ, ರಮೇಶ್, ನಿಂಗರಾಜ್ ಮಲ್ಲಾಡಿ, ಕಿರಣ್ ಗೌಡ, ದೇವರಾಜ್, ಜೋಗಿ ಮಂಜು ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.