
ಸಂಜೆವಾಣಿ ವಾರ್ತೆ
ಹೂವಿನಹಡಗಲಿ, ಜು.21: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಇನ್ನಷ್ಟು ಉತ್ತಮಪಡಿಸುವ ನಿಟ್ಟಿನಲ್ಲಿ ಎಲ್ಲ ಶಿಕ್ಷಕರು ಶ್ರಮಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ. ಕೋಟೆಪ್ಪ ಹೇಳಿದರು.
ತಾಲೂಕಿನ ಬ್ಯಾಲಹುಣಸಿ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇಕಡಾ ನೂರರಷ್ಟು ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ತಯಾರಿಗೆ ತಾಲೂಕಿನ ಸರ್ಕಾರಿ ಅನುದಾನಿತ ಅನುದಾನರಹಿತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಮುಖ್ಯಸ್ಥರು, ಶಿಕ್ಷಕರು ಸಾಕಷ್ಟು ಪರಿಶ್ರಮದಿಂದ ಅಗತ್ಯ ಮಾರ್ಗದರ್ಶನ ನೀಡಿದ್ದರು. ಪ್ರಸಕ್ತ ಸಾಲಿನಲ್ಲಿ ಸಹ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಕಡೆ ಹೆಚ್ಚು ಗಮನ ಹರಿಸಬೇಕು. ವಿದ್ಯಾರ್ಥಿಗಳು ಶಾಲೆಗೆ ಗೈರಾಗದೆ ಓದಿನಲ್ಲಿ ಆಸಕ್ತಿ ಬೆಳೆಸಿಕೊಳ್ಳಿರಿ ಎಂದು ತಿಳಿಸಿದರು.
ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಶಿವಲಿಂಗಪ್ಪ ಮಾತನಾಡಿದರು.
ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಪ್ರಕಾಶ್, ಕಾರ್ಯದರ್ಶಿ ಸುರೇಶ ಅಂಗಡಿ, ಶಿಕ್ಷಣ ಸಂಯೋಜಕ ಮಲ್ಲಿಕಾರ್ಜುನ, ಬಿ.ಆರ್.ಪಿ. ಹೊನ್ನಪ್ಪ, ಸಹ ಶಿಕ್ಷಕರ ಸಂಘದ ರಾಜ್ಯ ಸಹ ಕಾರ್ಯದರ್ಶಿ ಶಿವಕುಮಾರ್ ಗಡ್ಡಿ, ಬಡ್ತಿ ಶಿಕ್ಷಕರ ಸಂಘದ ಅಧ್ಯಕ್ಷ ಶೇಖ್ ಅಹಮದ್, ಕಾರ್ಯದರ್ಶಿ ಶಿವಕುಮಾರ್ ಹಿರೇಮಠ, ಖಜಾಂಚಿ ಕೆ.ಬಸಪ್ಪ, ಕೆ.ಮಧುಕರ, ಉಪಾಧ್ಯಕ್ಷೆ ಮುದ್ದಿ ಕಸ್ತೂರಿ, ನಿರ್ದೇಶಕರಾದ ಹೆಚ್.ಶೋಭಾ, ಕವಿತಾ, ಸುರೇಶ್ ನಾಯ್ಕ ಇತರರು ಉಪಸ್ಥಿತರಿದ್ದರು.
ಕಳೆದ ಶೈಕ್ಷಣಿಕ ಸಾಲಿನಲ್ಲಿ ಶೇ 100 ರಷ್ಟು ಫಲಿತಾಂಶ ಪಡೆದ ಬ್ಯಾಲಹುಣ್ಸಿ, ಹಿರೇಬನ್ನಿಮಟ್ಟಿ ಸರ್ಕಾರಿ ಪ್ರೌಢಶಾಲೆ ಹಾಗೂ ಸಿ.ಸಿ. ಕುರುವತ್ತಿ ಅನುದಾನಿತ ಪ್ರೌಢಶಾಲೆಗಳ ಮುಖ್ಯಶಿಕ್ಷಕರನ್ನು ಸತ್ಕರಿಸಲಾಯಿತು.