ಎಸ್‌ಡಿಪಿಐ ನಿಷೇಧಕ್ಕೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ದಾವಣಗೆರೆ,ಜ.01: ಉಜಿರೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿ, ಎಸ್‌ಡಿಪಿಐ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಆ ಸಂಘಟನೆಯನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಬಿಜೆಪಿ ದಕ್ಷಿಣ ಕ್ಷೇತ್ರದ ಕಾರ್ಯಕರ್ತರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು.ಇಲ್ಲಿನ ಜಯದೇವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಹೊರಟ ಭಾಜಪ ಕಾರ್ಯಕರ್ತರು, ಎಸಿ ಕಚೇರಿಗೆ ತೆರಳಿ ಉಪವಿಭಾಗಾಧಿಕಾರಿ ಮಮತ ಹೊಸಗೌಡರ್ ಮುಖಾಂತರ ರಾಜ್ಯ ಪಾಲರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಉಜಿರೆಯ ಮತ ಎಣಿಕೆ ಕೇಂದ್ರದ ಎದುರು ಡಿ.30ರಂದು ನಡೆದ ವಿಜಯೋತ್ಸವದಲ್ಲಿ ಎಸ್‌ಡಿಪಿಐ ಕಾರ್ಯಕರ್ತರು ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿ ದೇಶ ದ್ರೋಹದ ಕೃತ್ಯ ಎಸಗಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯದ ಶಾಂತಿ ಸುವ್ಯವಸ್ಥೆ ಕದಡಲು ಸಮಾಜಘಾತುಕ ಶಕ್ತಿಗಳು ಪ್ರಯತ್ನಿಸುತ್ತಿವೆ. ಈ ಘಟನೆಗೆ ಪ್ರತ್ಯಕ್ಷ ಮತ್ತು ಪರೋಕ್ಷ ಕಾರಣವಾಗಿರುವ ತನಿಖೆಗೆ ಒಳಪಡಿಸಬೇಕು.ಪಾಕ್ ಪರ ಘೋಷಣೆ ಕೂಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಪದೇ, ಪದೇ ಇಂತಹ ಘಟನೆಗಳು ಮರುಕಳಿಸಲು ಕಾರಣವಾಗಿರುವ ಎಸ್‌ಡಿಪಿಐ ಸಂಘಟನೆಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಬಿಜೆಪಿ ದಕ್ಷಿಣ ಕ್ಷೇತ್ರದ ಮುಖಂಡರಾದ ತರಕಾರಿ ಶಿವು, ಪ್ರವೀಣ್ ಜಾಧವ್, ಸೋಗಿ ಗುರುಶಾಂತ್, ರಾಜು ನೀಲಗುಂದ, ಗಣೇಶ್, ಅನೀಲ್, ಮಂಜು, ಪ್ರದೀಪ್, ಸಂದೇಶ್, ಸಚಿನ್ ಹಾಜರಿದ್ದರು.