ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ ಮಾಸ್ಕ್, ಸ್ಯಾನಿಟೈಝರ್ ವಿತರಣೆ

ಕಾರ್ಕಳ, ಮೇ ೨೦- ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಕಾರ್ಕಳದ ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಲಾಯಿತು.
ಕಾರ್ಕಳ ಶಾಸಕರ ಕಚೇರಿಯಲ್ಲಿ ಬುಧವಾರ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಶಾಸಕ ವಿ. ಸುನೀಲ್ ಕುಮಾರ್ ಅವರು ತಾಲೂಕು ಆರೋಗ್ಯಾಧಿಕಾರಿ ಡಾ.ಕೃಷ್ಣಾನಂದ ಶೆಟ್ಟಿ, ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ. ಕೆ.ಎಸ್.ರಾವ್, ವೃತ್ತ ನಿರೀಕ್ಷಕ ಸಂಪತ್ ಕುಮಾರ್, ಕಾರ್ಕಳ ನಗರ ಪೊಲೀಸ್ ಠಾಣೆ ಅಪರಾಧ ವಿಭಾಗದ ಎಸ್‌ಐ ದಾಮೋದರ್‌ರವರಿಗೆ ಮಾಸ್ಕ್ ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಶಾಸಕರು, ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ ಕಳೆದ ಲಾಕ್‌ಡೌನ್ ಸಂದರ್ಭವೂ ಸಾಕಷ್ಟು ಸಹಕಾರ ದೊರೆತಿದೆ. ಈ ಅವಧಿಯಲ್ಲೂ ನಿರೀಕ್ಷೆಯಂತೆ ಕಾರ್ಕಳಕ್ಕೆ ನೆರವು ದೊರೆತಿದ್ದು, ಇದಕ್ಕೆ ಕಾರಣಕರ್ತರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮತ್ತವರ ಬಳಗಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು. ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿ ಸುನೀಲ್ ಕುಮಾರ್ ಬಜಗೋಳಿ, ಜಿಪಂ ಸದಸ್ಯ ಉದಯ ಎಸ್. ಕೋಟ್ಯಾನ್, ಎಸ್‌ಸಿಡಿಸಿಸಿ ಬ್ಯಾಂಕ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಕರುಣಾಕರ್ ಎಸ್. ಕೋಟ್ಯಾನ್ ಸಾಣೂರು ಕಾರ್ಯಕ್ರಮ ನಿರೂಪಿಸಿದರು.