ಎಸ್.ಟಿ. ಸೋಮಶೇಖರ್ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ

ಕೆಂಗೇರಿ,ಆ.೨೪- ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಟಿ. ಸೋಮಶೇಖರ್ ಬೆಂಬಲಿಗರಾದ ಬಿಬಿಎಂಪಿ ಮಾಜಿ ಸದಸ್ಯರಾದ ರಾಜಣ್ಣ, ಆರ್ಯ ಶ್ರೀನಿವಾಸ್,ಜಿ.ಪಂ. ಮಾಜಿ ಸದಸ್ಯರಾದ ಶಿವಮಾದಯ್ಯ, ಜಿ.ಪಂ. ಸದಸ್ಯ ಡಿ. ಹನುಮಂತಯ್ಯ, ಜಿ.ಪಂ ಸದಸ್ಯ ನರಸಿಂಹಮೂರ್ತಿ,ಚಿಕ್ಕರಾಜು, ರಶ್ಮಿ ಹನುಮಂತೇಗೌಡ,ಜೆಡಿಎಸ್ ಮುಖಂಡರಾದ ಉಮಾಶಂಕರ್, ರಘು, ಸತೀಶ್, ಮತ್ತಿತರರು ಬಿಜೆಪಿ ಮತ್ತು ಜೆಡಿಎಸ್ ತೊರೆದು ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಕಗ್ಗಲಿಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಅಮೃತ್ ಗೌಡ, ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡವರನ್ನು ಉದ್ದೇಶಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಪಕ್ಷ ಕರ್ನಾಟಕದ ಜನರ ಬದುಕನ್ನು ರೂಪಿಸುವ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಯೋಜನೆಗಳು ತಲುಪದ ಜನರನ್ನು ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಲು ಭಾರತ್ ಜೋಡೋ ಸಭಾಂಗಣದಲ್ಲಿ ನಾವೆಲ್ಲ ಜೊತೆಯಾಗಿದ್ದೇವೆ ನಮ್ಮ ಬಂದ ಗಟ್ಟಿಯಾಗಿ ಕೋಮುವಾದಿ ಶಕ್ತಿಗಳನ್ನು ಓಡಿಸೋಣ ಎಂದರು.
ಕಾಂಗ್ರೆಸ್ ಪಕ್ಷದ ರಕ್ತ ಸಾಮಾನ್ಯವಾದದ್ದಲ್ಲ ಈ ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ ಪಕ್ಷ ಕಾಂಗ್ರೆಸಿಗನಾಗುವುದೆಂದರೆ ಅದು ಅಭಿಮಾನದ ಸಂಕೇತ. ಈ ರಾಷ್ಟ್ರಧ್ವಜ ಯಾರ ಹೆಗಲ ಮೇಲಿದೆ ಎಂದರೆ ಅದು ಕಾಂಗ್ರೆಸಿಗರ ಹೆಗಲ ಮೇಲೆ ಮಾತ್ರ. ಜನ ನೆನಪು ಮಾಡಿಕೊಳ್ಳುವಂತಹ ಒಂದೇ ಒಂದು ಕಾರ್ಯಕ್ರಮ ಕೊಟ್ಟಿಲ್ಲ ಬಿಜೆಪಿ. ಬರೀ ಬೆಲೆ ಏರಿಕೆ ಕೊಟ್ಟಿದೆ ಎಂದು ಹೇಳಿದರು.
ಶಾಸಕ ಎಸ್.ಟಿ. ಸೋಮಶೇಖರ್ ಅವರಿಗೆ ಬಿಜೆಪಿಯಲ್ಲಿ ಇಲ್ಲಸಲ್ಲದ ಕಾಟ ಕೊಡುತ್ತಿದ್ದಾರೆ. ಹೀಗಾಗಿ ಸೋಮಶೇಖರ್ ಅವರು ಆದಷ್ಟು ಬೇಗ ಕಾಂಗ್ರೆಸ್ ಪಕ್ಷಕ್ಕೆ ಬರಬೇಕು ಎಂದು ವೇದಿಕೆ ಮೇಲೆಯೇ ಆಹ್ವಾನ ನೀಡುತ್ತೇವೆ” ಎಂದು ಮಾಜಿ ಪಾಲಿಕೆ ಸದಸ್ಯ ರಾಜಣ್ಣ ಹೇಳಿದರು.
ನಂತರ ಜಿ.ಪಂ. ಮಾಜಿ ಸದಸ್ಯರಾದ ಶಿವಮಾದಯ್ಯ ಮಾತನಾಡಿ ಮೂಲತಹ ನಾವು ಕಾಂಗ್ರೆಸ್ ಪಕ್ಷದಲ್ಲಿ ಇದ್ದವರು, ಕಾರಣಾಂತರಗಳಿಂದ ಬಿಜೆಪಿ ಪಕ್ಷಕ್ಕೆ ಹೋಗಿದ್ದೆವು ಅಷ್ಟೇ. ಈಗ ಇಬ್ಬರು ಬಿಬಿಎಂಪಿ ಸದಸ್ಯರು ನಾಲ್ಕು ಜನ ಪಂಚಾಯತಿ ಸದಸ್ಯರು ಮತ್ತು ಅವರ ಬೆಂಬಲಿಗರು, ಕಾರ್ಯಕರ್ತರು ಸೇರಿ ಸುಮಾರು ಒಂದುವರೆ ಸಾವಿರಕ್ಕೂ ಹೆಚ್ಚು ಜನಸಂಖ್ಯೆಯಲ್ಲಿ ಹೋಗಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇವೆ. ನಾವುಗಳು ಇನ್ನು ಮುಂದೆ ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಪ್ರಾಮಾಣಿಕವಾಗಿ ಪಕ್ಷಕ್ಕೋಸ್ಕರ ದುಡಿಯುತ್ತೇವೆ, ಪಕ್ಷದ ಸಂಘಟನೆಗೆ ಶ್ರಮಿಸುತ್ತೇವೆ. ಶಾಸಕರು ಸಹ ಪಕ್ಷಕ್ಕೆ ಮರಳಿ ಬರುತ್ತಾರೆ ಎಂಬ ವಿಶ್ವಾಸವಾಗಿದೆ ಅದನ್ನು ಕಾದು ನೋಡಬೇಕು ಎಂದರು.