ಎ.ಎಸ್.ಎಂ ಕಾಲೇಜ್ ಉಪನ್ಯಾಸಕಿ ಮೇಲಿನಲೈಂಗಿಕ ಕಿರುಕುಳ ತನಿಖೆಗೆ ಆಗ್ರಹ


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಜೂ.08: ನಗರದ ವೀರಶೈವ ವಿದ್ಯಾವರ್ಧಕ ಸಂಘದ ಅಲ್ಲಂ ಸುಮಂಗಳಮ್ಮ ಮಹಿಳಾ ಕಾಲೇಜಿನ ಪ್ರಾಂಶುಪಾಲ ಶರಣಪ್ಪ ಕಾಲೇಜಿನ ಬಿಸಿಎ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಲೈಂಗಿಕ ಕ್ರಿಯೆಗೆ ಪ್ರಚೋದನೆ ಮಾಡಿದ್ದು, ಕಳೆದ ಆರು ತಿಂಗಳಿನಿಂದ ಉಪನ್ಯಾಸಕಿ ಜೊತೆಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಉಪನ್ಯಾಸಕಿಯನ್ನು ಕಾಮದ ದೃಷ್ಟಿಯಿಂದ ಮಾತನಾಡಿಸುತ್ತಿದ್ದ ಅವರು ಸಹಕರಿಸದೆ ಹೋದರೆ ಸುಮ್ಮನಿರುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದರು. ಅವರ ಕಾಟ ತಾಳಲಾರದೆ ಕಾಲೇಜಿನ ಆಡಳಿತ ಮಂಡಳಿಯ ಗಮನಕ್ಕೆ ತಂದಿರುವುದಾಗಿ ತಿಳಿದು ಬಂದಿದೆ. ಉಪನ್ಯಾಸಕಿ ಕೊನೆಗೂ ಠಾಣೆಯ ಮೆಟ್ಟಿಲೇರಿದ್ದಾರೆ.
ಕೆಲಸದ ಸ್ಥಳಗಳಲ್ಲಿ ಮಹಿಳಾ ಉದ್ಯೋಗಿಗಳಿಗೆ, “ಉದ್ಯೋಗಿಗಳ ಮೇಲೆ ಯಾವುದೇ ರೀತಿಯ ದೌರ್ಜನ್ಯ ತಡೆಯಲು ಇರುವ ಆಂತರಿಕ ದೂರು ನಿರ್ವಹಣಾ ಸಮಿತಿ”ಗೂ ದೂರು ಸಲ್ಲಿಸಿದ್ದಾರೆ. ಪ್ರತಿಷ್ಠಿತ ಮಹಿಳಾ ಕಾಲೇಜಿನ ಪ್ರಾಂಶುಪಾಲರಿಂದಲೇ ಇಂತಹ ಘಟನೆಗಳು ನಡೆದರೆ ಅಲ್ಲಿ ಓದುವ ಹೆಣ್ಣು ಮಕ್ಕಳ ಸುರಕ್ಷತೆ ಅತಂಕದ ವಿಷಯವಾಗಿದೆ. ಜಿಲ್ಲಾಡಳಿತ ಈ ಕೂಡಲೆ  ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ಅಪಾಧಿತನ ವಿರುದ್ಧ ಕಠಿಣ ಕ್ರಮ ಕೈಗೊಂಡು, ನೊಂದ ಉಪನ್ಯಾಸಕಿಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್‍ಎಸ್) ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಈಶ್ವರಿ ಕೆ.ಎಂ., ಜಿಲ್ಲಾ ಕಾರ್ಯದರ್ಶಿ ವಿಜಯಲಕ್ಷ್ಮಿ ಆಗ್ರಹಿಸಿದ್ದಾರೆ.