ಏ. 3 ರಂದು ಯದುವೀರ್ ನಾಮಪತ್ರ ಸಲ್ಲಿಕೆ

ಬೆಂಗಳೂರು, ಮಾ.೩೦- ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಏಪ್ರಿಲ್ ೩ ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಏಪ್ರಿಲ್ ೩ ರಂದು ಬೆಳಗ್ಗೆ ೧೦:೩೦ ಕ್ಕೆ ಮೆರವಣಿಗೆ ಮೂಲಕ ಸಾಗಿ ನಾಮಪತ್ರ ಸಲ್ಲಿಸಲಾಗುವುದು. ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಗಮಿಸುವಂತೆ ಯದುವೀರ್ ಮನವಿ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಡಿರುವ ಅವರು ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಆರಂಭವಾಗಲಿದ್ದು, ನಾಮಪತ್ರ ಸಲ್ಲಿಕೆ ಸ್ಥಳಕ್ಕೆ ತೆರಳಲಿದೆ. ಮೈಸೂರು-ಕೊಡಗಿನ ಸಮಸ್ತ ಜನತೆ ಈ ಕಾರ್ಯಕ್ರಮಕ್ಕೆ ಆಗಮಿಸಿ ನಿಮ್ಮ ಉಪಸ್ಥಿತಿಯಿಂದ ಆಶೀರ್ವದಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಇದೇ ಕ್ಷೇತ್ರದಲ್ಲಿ ಎರಡು ಬಾರಿ ಸಂಸದರಾಗಿ ಕಾರ್ಯನಿರ್ವಹಿಸಿದ್ದ ಸಂಸದ ಪ್ರತಾಪ್ ಸಿಂಹ ಅವರಿಗೆ ಮೂರನೇ ಬಾರಿಗೆ ಟಿಕೆಟ್ ಮಿಸ್ ಆಗಿದೆ.
ಪ್ರತಿಷ್ಠೆಯ ಕಣ:.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿಕೊಳ್ಳುವ ಜವಾಬ್ದಾರಿ ಹೆಗಲ ಮೇಲಿದ್ದು ಹೀಗಾಗಿ ಅವರಿಗೆ ಪ್ರತಿಷ್ಠೆಯ ಕಣವಾಗಿದೆ. ಕಾಂಗ್ರೆಸ್ ಪಕ್ಷದಿಂದ ಎಂ. ಲಕ್ಷ್ಮಣ್ ಅವರಿಗೆ ಟಿಕೆಟ್ ನೀಡಲಾಗಿದೆ.