ಒಂದರಿಂದ ಎಂಟನೇ ತರಗತಿ ವಿದ್ಯಾರ್ಥಿಗಳ ತೇರ್ಗಡೆಗೆ ಮಹಾ ಸರ್ಕಾರ ತೀರ್ಮಾನ

ಮುಂಬೈ, ಏ.3- ಒಂದರಿಂದ 8ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಲು ಮಹಾರಾಷ್ಟ್ರ ಸರ್ಕಾರ ತೀರ್ಮಾನಿಸಿದೆ.

ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಪ್ತಾಥಮಿಕ ಮತ್ತು ಪ್ರೌಢ ಶಿಕ್ಷಣ ಮಂಡಳಿ ಈ ನಿರ್ಧಾರ ಕೈಗೊಂಡಿದೆ.

ಅಂತಿಮ ವರ್ಷದ ಪರೀಕ್ಷೆ ಇಲ್ಲದೆ ಮುಂದಿನ ತರಗತಿಗೆ ವಿದ್ಯಾರ್ಥಿಗಳನ್ನು ಕಳುಹಿಸಲಾಗುತ್ತಿದೆ. ಮಹಾರಾಷ್ಟ್ರದಲ್ಲಿ 47, 827 ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ರಾಜ್ಯಾದ್ಯಂತ ಒಟ್ಟಾರೇ ಸೋಂಕಿತರ ಸಂಖ್ಯೆ 2, 904,076ಕ್ಕೆ ತಲುಪಿದೆ.

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಒಂದೆರಡು ದಿನಗಳಲ್ಲಿ ಕಠಿಣ ನಿರ್ಬಂಧಗಳನ್ನು ಘೋಷಿಸುವುದಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿನ್ನೆ ಹೇಳಿದ್ದರು. ಅಲ್ಲದೇ ಪರಿಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗದಿದ್ದಲ್ಲಿ ಲಾಕ್ ಡೌನ್ ಹೇರುವ ಸುಳಿವು ನೀಡಿದ್ದರು.

ಇದರ ಭಾಗವಾಗಿ ಒಂದರಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುವ ಮಹತ್ವದ ನಿರ್ಧಾರ ರಾಜ್ಯ ಸರ್ಕಾರ ತೆಗೆದುಕೊಂಡಿದೆ.