ಒಂದು ವಾರದಲ್ಲಿ ನೆಟೆರೋಗ ಪರಿಹಾರ: ಸಚಿವ ನಿರಾಣಿ

ಕಲಬುರಗಿ,ಮಾ 15: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರಕಾರ ರೂ.5000 ಕೋಟಿ ಅನುದಾನ ನೀಡಲಾಗುತ್ತಿದೆ. ಮೇಲಾಗಿ, ಮುಂದಿನ ಒಂದು ವಾರದೊಳಗೆ ತೊಗರಿ ನೆಟೆರೋಗಕ್ಕೆ ಪರಿಹಾರವಾಗಿ ಪ್ರತಿ ಹೆಕ್ಟೇರಿಗೆ ರೂ.10 ಸಾವಿರ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಹೇಳಿದರು.
ಗುಲ್ಬರ್ಗ ವಿಶ್ವವಿದ್ಯಾಲಯ ಆವರಣದಲ್ಲಿ ಹಮ್ಮಿಕೊಂಡಿದ್ದ
ಕೇಂದ್ರ ಸರಕಾರದ ಪ್ರಾಯೋಜಿತ ಹಾಗೂ ರಾಜ್ಯ ಸರಕಾರದ ಫಲಾನುಭವಿಗಳ ಆಧಾರಿತ ವಿವಿಧ ಯೋಜನೆಗಳಡಿ ಆಯ್ಕೆಯಾದ ಜಿಲ್ಲಾ ಮಟ್ಟದ ಫಲಾನುಭವಿಗಳ ಸಮ್ಮೇಳನದಲ್ಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಲಬುರಗಿ ಜಿಲ್ಲೆಯಲ್ಲಿ ಅತಿ ಹೆಚ್ಚು ಹತ್ತಿ ಬೆಳೆಯುವುದರಿಂದ ಬೃಹತ್ ಟೆಕ್ಸ್ ಟೈಲ್ ಪಾರ್ಕ್ ನಿರ್ಮಾಣಕ್ಕೆ ಈಗಾಗಲೇ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ನುಡಿದರು.
ಆರಂಭದಲ್ಲಿ ಕೃಷಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಆದಿಜಾಂಭವ ಅಭಿವೃದ್ಧಿ ನಿಗಮ, ಆರೋಗ್ಯ ಇಲಾಖೆ, ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ, ತೋಟಗಾರಿಕೆ, ಕಂದಾಯ ಮತ್ತು ಪಶು ಸಂಗೋಪನಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಅನ್ನಭಾಗ್ಯ ಯೋಜನೆ (ಪಡಿತರ ಚೀಟಿ), ಯಶಸ್ವಿನಿ ಯೋಜನೆ ಸೇರಿದಂತೆ ಒಟ್ಟು 15 ಇಲಾಖೆಗಳ ತಲಾ ಐವರು ಫಲಾನುಭವಿಗಳಿಗೆ ಸಾಂಕೇತಿಕವಾಗಿ ಪರಿಹಾರದ ಚೆಕ್ ಸೇರಿದಂತೆ ಯೋಜನೆಯ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ಸಂಸದ ಡಾ.ಉಮೇಶ್ ಜಾಧವ್, ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ್, ಬಸವರಾಜ ಮತ್ತಿಮೂಡ, ಡಾ.ಅವಿನಾಶ್ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಬಿ.ಜಿ.ಪಾಟೀಲ್, ಶಶಿಲ್ ಜಿ.ನಮೋಶಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅವಿನಾಶ್ ಕುಲಕರ್ಣಿ, ನವೀಕರಿಸಬಹುದಾದ ಇಂಧನಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಚಂದು ಪಾಟೀಲ್, ಜಿಲ್ಲಾಧಿಕಾರಿ ಯಶವಂತ ಗುರುಕರ್, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಗಿರೀಶ್ ಬದೋಲೆ, ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗಳ್ಳಿ, ಪೆÇಲೀಸ್ ಕಮಿಷನರ್ ಚೇತನ್ ಆರ್., ಕುಸನೂರ್ ಗ್ರಾಮ ಪಂಚಾಯತಿ ಅಧ್ಯಕ್ಷೆ ನಿಂಗಮ್ಮ
ಸೇರಿದಂತೆ ಇನ್ನಿತರರು ವೇದಿಕೆಯಲ್ಲಿದ್ದರು.
ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ್, ಬಿಜೆಪಿ ಮುಖಂಡರಾದ ಶರಣಪ್ಪ ತಳವಾರ್ ಸೇರಿದಂತೆ ಇನ್ನಿತರರು ಸಮ್ಮೇಳನದಲ್ಲಿ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮ ಆರಂಭಕ್ಕೂ ಮುನ್ನ ಮತದಾನದ ಮಹತ್ವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಬೀದಿ ನಾಟಕ ಪ್ರದರ್ಶನ ನಡೆಯಿತು.15 ಇಲಾಖೆಗಳ 60 ಸಾವಿರ ಫಲಾಬುಭವಿಗಳು ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು.


ಬದಲಾವಣೆಗಾಗಿ ಮೋದಿ ಬೆಂಬಲಿಸಿ
ದೇಶದ ಪ್ರತಿಯೊಬ್ಬ ವ್ಯಕ್ತಿಯ ಬದುಕಿನಲ್ಲಿ ಆಶಾದಾಯಕ ಬದಲಾವಣೆ ತರುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ರಮಿಸುತ್ತಿದ್ದಾರೆ. ಹೀಗಾಗಿ ಎಲ್ಲರೂ ಮೋದಿಯವರ ಬೆನ್ನಿಗೆ ನಿಲ್ಲಬೇಕೆಂದು ಕೇಂದ್ರ ನಾಗರಿಕ ವಿಮಾನಯಾನ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ರಾಜ್ಯ ಸಚಿವ ಜನರಲ್ ಡಾ.ವಿ.ಕೆ.ಸಿಂಗ್ ಮನವಿ ಮಾಡಿದರು.
ಗುಲ್ಬರ್ಗ ವಿಶ್ವವಿದ್ಯಾಲಯ ಆವರಣದಲ್ಲಿ ಹಮ್ಮಿಕೊಂಡಿದ್ದ
ಕೇಂದ್ರ ಸರಕಾರದ ಪ್ರಾಯೋಜಿತ ಹಾಗೂ ರಾಜ್ಯ ಸರಕಾರದ ಫಲಾನುಭವಿಗಳ ಆಧಾರಿತ ವಿವಿಧ ಯೋಜನೆಗಳಡಿ ಆಯ್ಕೆಯಾದ ಜಿಲ್ಲಾ ಮಟ್ಟದ ಫಲಾನುಭವಿಗಳ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಇಂದು ದೇಶದಲ್ಲಿ ಆಶಾದಾಯಕ ವಾತಾವರಣ ನಿರ್ಮಾಣಗೊಂಡಿರುವುದರ ಹಿಂದೆ ಪ್ರಧಾನಿ ಮೋದಿಯವರ ಶ್ರಮವಿದೆ ಎಂದರು.