ಒಮಿಕ್ರಾನ್ ತಡೆಗೆ ಕಠಿಣ ಕ್ರಮ: ಶಾಲಾ-ಕಾಲೇಜು ಸಭೆ ರದ್ದು,2 ಡೋಸ್ ಲಸಿಕೆ ಕಡ್ಡಾಯ

ಬೆಂಗಳೂರು,ಡಿ.3- ರಾಜ್ಯದಲ್ಲಿ ಕೊರೊನಾ ಸೋಂಕಿನ ಹೊಸ ರೂಪಾಂತರಿ ಓಮಿಕ್ರಾನ್ ತಡೆಗೆ ಮುಂದಾಗಿರುವ ರಾಜ್ಯ ಸರ್ಕಾರ, ಕೊರೊನಾ ಸೋಂಕು ಪತ್ತೆ ಪರೀಕ್ಷೆ ಹೆಚ್ಚಳ, ವಿಮಾನ‌ ನಿಲ್ದಾಣಗಳಲ್ಲಿ ಬಿಗಿ ಕ್ರಮ ಕೈಗೊಳ್ಳುವುದು ಸೇರಿದಂತೆ ಹಲವು ಕಠಿಣ ಕ್ರಮ ಜಾರಿ ಮಾಡಲು ನಿರ್ಧರಿಸಿದೆ.

ಮುದುವೆ, ವಿವಿಧ ಸಮಾರಂಭಗಳಿಗೆ 500 ಮಂದಿಗೆ ಪಾಲ್ಗೊಳ್ಳಲು ಅವಕಾಶ, ಚಿತ್ರಮಂದಿರ ಮತ್ತು ಮಾಲ್ ಗಳಿಗೆ ತೆರಳುವ ಮಂದಿಗೆ ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರುವುದು ಹಾಗು ಶಾಲೆಗಗಳಿಗ ಮಕ್ಕಳನ್ನು ಬಿಡಲು ತೆರಳುವ ಪೋಷಕರು ಎರಡು ಡೋಸ್ ಲಸಿಕೆ ಪಡೆದಿರಬೇಕು ಎನ್ನುವ ನಿಯಮ ಜಾರಿ ಮಾಡಿದೆ.

ರಾಜ್ಯದಲ್ಲಿ ಕೋವಿಡ್ -19 ನಿಯಂತ್ರಣ ಸಂಬಂಧ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವರು, ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆಯ ಬಳಿಕ ಮಾಹಿತಿ ನೀಡಿದ ಆರ್. ಅಶೋಕ, ಜಗತ್ತಿನ ವಿವಿಧ ಭಾಗಗಳಲ್ಲಿ 400 ಒಮಿಕ್ರಾನ್ ಸೋಂಕು ಪ್ರಕರಣಗಳು ಕಂಡು ಬಂದಿವೆ. ಆದರೆ, ಇವು ತೀವ್ರತರದ ಸ್ವರೂಪದ್ದು ಅಲ್ಲ ಎನ್ನುವ ವಿಷಯವನ್ನು ತಜ್ಞರು ತಿಳಿಸಿದ್ದಾರೆ. ಆದರೂ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದರು.

ಸೋಂಕು ತಡೆಗೆ ಬಿಗಿ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.ಒಮಿಕ್ರಾನ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಚಿತ್ರಮಂದಿರ, ಮಾಲ್ ಗಳು , ಮಕ್ಕಳನ್ನು ಶಾಲೆಗೆ ಬಿಡಲು ತೆರಳುವ ಪೋಷಕರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು. ಇಲ್ಲದಿದ್ದರೆ ಅಂತವರಿಗೆ ಅವಕಾಶ ಮಾಡಿಕೊಡದಿರುವ ಇಂದಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಶಾಲಾ-ಕಾಲೇಜುಗಳಲ್ಲಿ ಯಾವುದೇ ಸಭೆ, ಸಮಾರಂಭ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಡಲಾಗಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಕೊರೋನಾ ಸೋಂಕು ಪತ್ತೆ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಸಾಮಾನ್ಯ ದರ 500 ರೂಪಾಯಿ ನಿಗದಿ ಮಾಡಲಾಗಿದ್ದು, ತುರ್ತಾಗಿ ಪರೀಕ್ಷೆಗೆ 3 ಸಾವಿರ ರೂಪಾಯಿ ದರ ನಿಗದಿ ಮಾಡಲಾಗಿದೆ. ಪ್ರಯಾಣಿಕರು ಅವರಿಗೆ ಬೇಕಾದ ಆಯ್ಕೆ ಮಾಡಿಕೊಳ್ಳಬಹುದು. ನೆಗೆಟಿವ್ ವರದಿ ಬಂದವರನ್ನಷ್ಟೇ ವಿಮಾನ ನಿಲ್ದಾಣದಿಂದ ಹೊರಗೆ ಕಳುಹಿಸಲಾಗುವುದು ಎಂದು ತಿಳಿಸಿದರು..

ಪರೀಕ್ಷೆ ಹೆಚ್ಚಳ:

ರಾಜ್ಯದಲ್ಲಿ ಪ್ರತಿ ದಿನ ಸರಾಸರಿ 60 ಸಾವಿರ ಮಂದಿಗೆ ಕೋವಿಡ್ ಸೋಂಕು ಪತ್ತೆ ಪರೀಕ್ಷೆ ಮಾಡುತ್ತಿದ್ದು, ಆ ಪ್ರಮಾಣವನ್ನು 1 ಲಕ್ಷಕ್ಕೆ ಹೆಚ್ಚಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಅಳವಡಿಸಿದ್ದ ಐಸಿಯು, ಆಮ್ಲಜನಕ ಸಹಿತ ಹಾಸಿಗೆಗಳು, ಆಮ್ಲಜಕ ಘಟಕಗಳನ್ನು ಪರಿಶೀಲಿಸಿ, ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳುವುದು ಜೊತೆಗೆ ಆಮ್ಲಜನಕದ ಜಾಲ ಮತ್ತು ಸಾಗಾಟಕ್ಕೆ ಎಲ್ಲಿಯೂ ತೊಂದರೆಯಾಗದಂತೆ ಎಚ್ಚರವಹಿಸಲು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಒಮಿಕ್ರಾನ್ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನಿಯಂತ್ರಣ ಕೊಠಡಿಗಳನ್ನು ತೆರೆಯಲಾಗಿದ್ದು, ಹಿರಿಯ ಅಧಿಕಾರಿ ಶಿಲ್ಪಾ ನಾಗರಾಜ್ ಅವರನ್ನು ನೇಮಕ ಮಾಡಲಾಗಿದೆ.
ಕೊರೊನಾ ಸೋಂಕಿನ ಲಸಿಕೆ ಸೇರಿದಂತೆ ಇನ್ನಿತರ ವೈದ್ಯಕೀಯ ಸಲಕರಣೆಗಳಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಕೂಡ ಸೂಚಿಸಲಾಗಿದೆ ಎಂದರು.

ರಾತ್ರಿ ಒಳಗೆ ಪತ್ತೆಗೆ ಸೂಚನೆ:

ವಿದೇಶದಿಂದ ಬೆಂಗಳೂರಿಗೆ ಆಗಮಿಸಿ, ಸಂಪರ್ಕಕ್ಕೆ ಸಿಗದಿರುವ 10 ಮಂದಿಯನ್ನು ಇಂದು ರಾತ್ರಿಯೊಳಗೆ ಪತ್ತೆ ಮಾಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.

ಸಚಿವರಾದ ಡಾ. ಕೆ. ಸುಧಾಕರ್, ಗೋವಿಂದ ಕಾರಜೋಳ, ಆರ್. ಅಶೋಕ, ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ತಜ್ಞರು ಉಪಸ್ಥಿತರಿದ್ದರು

ಅಧಿವೇಶನ ಅಭಾಧಿತ, ಬಿಗಿ ಕ್ರಮ

ಈ ತಿಂಗಳ 13ರಿಂದ ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನವನ್ನು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವ ಆರ್. ಅಶೋಕ ತಿಳಿಸಿದರು.

ಜೊತೆಗೆ ಹೊಸ ವರ್ಷದ ಆಚರಣೆ ಹಿನ್ನೆಲೆಯಲ್ಲಿ ಪರಿಸ್ಥಿತಿ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.