ಒಮಿಕ್ರಾನ್ ತಡೆಗೆ ಸರ್ಕಾರ ಕಟ್ಟೆಚ್ಚರ: ವಿದೇಶಿ ಪ್ರವಾಸಿಗರ ಮೇಲೆ ನಿಗಾ

ಹುಬ್ಬಳ್ಳಿ,ಡಿ.೧- ದಕ್ಷಿಣ ಆಫ್ರಿಕಾದಲ್ಲಿ ಹೊಸದಾಗಿ ಕಾಣಿಸಿಕೊಂಡು ಭೀತಿ ಸೃಷ್ಟಿಸಿರುವ ಓಮಿಕ್ರಾನ್ ಹಿನ್ನೆಲೆಯಲ್ಲಿ ವಿದೇಶದಿಂದ ಬರುವರ ಪರೀಕ್ಷೆ ಹೆಚ್ಚು ಮಾಡುವುದು, ಮತ್ತು ಕೇರಳದಿಂದ ಬಂದವರ ಮೇಲೆ ನಿಗಾ ಇರಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದಿಲ್ಲಿ ಹೇಳಿದ್ದಾರೆ.
ವಿದೇಶಗಳಿಂದ ಪ್ರತಿದಿನ ರಾಜ್ಯಕ್ಕೆ ಎರಡರಿಂದ ಎರಡುವರೆ ಸಾವಿರ ಜನರು ಆಗಮಿಸುತ್ತಿದ್ದು ಪ್ರತಿಯೊಬ್ಬರನ್ನು ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ ಎಂದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಕಳೆದ ಬಾರಿ ವಿದೇಶಿ ಪ್ರವಾಸಿಗರು ರಾಜ್ಯಕ್ಕೆ ಬಂದ ನಂತರ ಆದ ಸಮಸ್ಯೆಗಳು ಮತ್ತು ತೊಂದರೆಗಳ ಬಗ್ಗೆ ಅರಿವಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕೇರಳದ ಗಡಿ ಭಾಗದಲ್ಲಿ ಅತ್ಯಂತ ಬಿಗಿ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.ಪರೀಕ್ಷೆ ಕಡ್ಡಾಯ ಮಾಡಲಾಗಿದೆ ಎಂದರು.
ಲಾಕ್‌ಡೌನ್ ಇಲ್ಲ:
ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡುವುದಿಲ್ಲ ಆತಂಕ ಜನರಿಗೆ ಬೇಡ ಎಂದು ಸ್ಪಷ್ಟ ಪಡಿಸಿದರು.
ಜನಜೀವನ ಮತ್ತು ಪರಿಸ್ಥಿತಿ ಸುಗಮವಾಗಿ ನಡೆಯುತ್ತದೆ ಅದಕ್ಕೆ ಹೆಚ್ಚಿನ ಉತ್ತೇಜನ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಹೊರತು ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದರು.
ಹೆಚ್ಚುವರಿ ಲಸಿಕೆ:
ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಪಡೆಯ ಸಿಬ್ಬಂದಿ ಕೋವಿಡ್ ಸೋಂಕು ಹೋರಾಟದಲ್ಲಿ ಕೆಲಸ ಮಾಡುತ್ತಿದ್ದಾರೆ .ಅವರು ಮೊದಲ ಮತ್ತು ಎರಡನೇ ಡೋಸ್ ತೆಗೆದುಕೊಂಡು ಬಹಳ ದಿನ ಆಗಿದೆ. ಹೀಗಾಗಿ ಅವರಿಗೆ ಹೆಚ್ಚುವರಿ ಡೋಸ್ ಲಸಿಕೆ ನೀಡುವ ಸಂಬಂಧ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.
ಹೆಚ್ಚುವರಿ ಡೋಸ್ ಲಸಿಕೆ ನೀಡುವ ಸಂಬಂದ ಕಾರ್ಯಪಡೆ ಸಮಿತಿಯಲ್ಲಿ ಚರ್ಚೆ ಮಾಡಲಾಗಿದೆ.ವಿಶೇಷವಾಗಿ ಆರೋಗ್ಯ ಕಾರ್ಯಕರ್ತರಿಗೆ ಹೆಚ್ಚವರಿ ಡೋಸ್ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಮೇಲ್ಮನೆ ಸಮರ- ಜೆಡಿಎಸ್ ಮೈತ್ರಿ ಬಿಎಸ್‌ವೈ- ಹೆಚ್‌ಡಿಕೆ ನಿರ್ಧಾರ
ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರು ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಿ ದೇವೇಗೌಡರವರು ನಿನ್ನೆ ದೆಹಲಿಯಲ್ಲಿ ಭೇಟಿ ಮಾಡಿ ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ನೋಡೋಣ ಏನಾಗುತ್ತದೆ ಎಂದು ಹೇಳಿದರು.
ಹಾವೇರಿಯಲ್ಲಿ ಬಂಡಾಯ ಅಭ್ಯರ್ಥಿ ಕಣಕ್ಕಿಳಿದಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈ ಬಂಡಾಯ ಒಮ್ಮೆ ಕಾಂಗ್ರೆಸ್ ಎನ್ನುತ್ತಾರೆ, ಅಭ್ಯರ್ಥಿ ಮತ್ತೊಮ್ಮೆ ಬಿಜೆಪಿ ಎನ್ನುತ್ತಾರೆ ಅವರ ಸ್ಪರ್ಧೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರದು. ನಮ್ಮ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಕಣದಲ್ಲಿದ್ದು ಗೆಲ್ಲುತ್ತಾರೆ ಎಂದು ನುಡಿದರು.
ಹೊಸ ತಾಲೂಕುಗಳಿಗೆ ಮೂಲಸೌಕರ್ಯ ನೀಡದಿರುವುದಕ್ಕೆ ಹೈಕೋರ್ಟ್ ಚಾಟಿ ಬೀಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಕೋವಿಡ್ ಹಿನ್ನಲೆಯಲ್ಲಿ ಈ ಕಾರ್ಯ ತಡವಾಗಿದ್ದು ಕನಿಷ್ಠ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ ಸಿಎಂ ಬೊಮ್ಮಾಯಿ. ಆದರೆ ಸದ್ಯ ಲಾಕ್‌ಡೌನ್ ಪ್ರಸ್ತಾಪ ಇಲ್ಲ. ಲಾಕ್‌ಡೌನ್ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವ ಕುರಿತಂತೆ ಆರೋಗ್ಯ ಸಚಿವರಿಗೆ ಸೂಚಿಸಿರುವುದಾಗಿ ತಿಳಿಸಿದರು.
ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆ ನಿರ್ಬಂಧ ಹೇರಿಕೆ ಕುರಿತಂತೆ ಇನ್ನೂ ತೀರ್ಮಾನಿಸಿಲ್ಲ ಎಂದು ಅವರು ಹೇಳಿದರು.