ಒಮಿಕ್ರಾನ್ ಭೀತಿ ಆರೋಗ್ಯ ಸೌಲಭ್ಯ ಹೆಚ್ಚಳಕ್ಕೆ ಕೇಂದ್ರ ಸೂಚನೆ

ನವದೆಹಲಿ,ಡಿ.೪- ದೇಶದಲ್ಲಿ ಒಮಿಕ್ರಾನ್ ಹೊಸ ರೂಪಾಂತರಿ ತಳಿ ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಸೋಂಕು ಹತೋಟಿಗೆ ತರುವ ನಿಟ್ಟಿನಲ್ಲಿ ಹಾಸಿಗೆಗಳು, ಆಮ್ಲಜನಕ ಸೌಲಭ್ಯ, ವೆಂಟಿಲೇಟರ್‌ಗಳು ಹಾಗೂ ಔಷಧಗಳ ಸಾಮರ್ಥ್ಯವನ್ನು ಹೆಚ್ಚಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲ ರಾಜ್ಯಗಳಿಗೂ ಸೂಚನೆ ನೀಡಿದೆ.
ಈ ಸಂಬಂಧ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಈ ಸೌಲಭ್ಯಗಳನ್ನು ಕಲ್ಪಿಸಲು ಹಣಕಾಸು ಸಂಪನ್ಮೂಲಗಳನ್ನು ಬಳಸಿಕೊಳ್ಳಬೇಕೆಂದು ಹೇಳಿದ್ದಾರೆ.
ಹೊಸ ರೂಪಾಂತರಿ ತಳಿ ಒಮಿಕ್ರಾನ್ ಅತ್ಯಂತ ವೇಗವಾಗಿ ಹರಡುತ್ತಿದ್ದು, ಈ ಅಂಶವನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಿಕೊಳ್ಳಬೇಕೆಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈಗಾಗಲೇ ದೇಶದ ಮುಂಚೂಣಿ ಆಸ್ಪತ್ರೆಗಳಾದ ಫೋರ್ಟಿಸ್, ಮಣಿಪಾಲ್ ಆಸ್ಪತ್ರೆಗಳಲ್ಲಿ ಒಮಿಕ್ರಾನ್ ಸೋಂಕು ತಡೆಗೆ ಕಟ್ಟೆಚ್ಚರ ವಹಿಸಲಾಗಿದ್ದು, ಈ ಆಸ್ಪತ್ರೆಯ ಇನ್ನಿತರ ಪಾಲುದಾರರ ಜತೆ ಸೋಮವಾರ ಮಹತ್ವದ ಸಭೆ ನಡೆಸಿ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ಮುಂದಾಗಿದೆ.