ಔರಾದ್ ಕ್ಷೇತ್ರದಲ್ಲಿ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾಧಿಕಾರಿಗೆ ದೂರು

ಬೀದರ್:ಎ.7: ಔರಾದ್ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸುತ್ತಿರುವ ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಹಾಗೂ ಅವರ ವಿಶೇಷ ಕರ್ತವ್ಯಾಧಿಕಾರಿ ಡಾ. ದೀಪಕ್ ಬಿರಾದಾರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖಂಡ ದೀಪಕ ಪಾಟೀಲ ಚಾಂದೋರಿ ಆಗ್ರಹಿಸಿದ್ದಾರೆ.

ಈ ಕುರಿತು ಅವರು ಜಿಲ್ಲಾ ಚುನಾವಣಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ದೂರು ಸಲ್ಲಿಸಿದ್ದಾರೆ.

ವಿಧಾನಸಭಾ ಚುನಾವಣೆ ಪ್ರಯುಕ್ತ ರಾಜ್ಯದಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿ ಇದೆ. ಆದರೆ, ಔರಾದ್ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ನೀತಿ ಸಂಹಿತೆ ಅನ್ವಯವಾದಂತೆ ಕಾಣುತ್ತಿಲ್ಲ. ಔರಾದ್ ಕ್ಷೇತ್ರದಲ್ಲಿ ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಅವರ ಪ್ರವಾಸ ಪಟ್ಟಿ ಬಿಡುಗಡೆಗೊಳಿಸುವುದು ಮುಂದುವರಿದಿದೆ ಎಂದು ಆಪಾದಿಸಿದ್ದಾರೆ.

ಸಚಿವರ ಆಪ್ತ ಕಾರ್ಯದರ್ಶಿ ಡಾ. ದೀಪಕ್ ಬಿರಾದಾರ ಅವರು ನಿತ್ಯ ಸಚಿವರು ಔರಾದ್ ಕ್ಷೇತ್ರದಲ್ಲಿ ಕೈಗೊಳ್ಳಲಿರುವ ಪ್ರವಾಸದ ಪಟ್ಟಿಯನ್ನು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಗೊಳಿಸಿ ನೀತಿ ಸಂಹಿತೆ ಉಲ್ಲಂಘಿಸುತ್ತಿದ್ದಾರೆ. ಪ್ರವಾಸ ಪಟ್ಟಿಯ ವಿವರದ ಪ್ರತಿಯನ್ನು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೂ ಕಳುಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಈಗಾಗಲೇ ರಿಟರ್ನಿಂಗ್ ಅಧಿಕಾರಿ ಹಾಗೂ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಆದರೆ, ಅಧಿಕಾರಿ ವಿರುದ್ಧ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಔರಾದ್ ಕ್ಷೇತ್ರದಲ್ಲಿ ಪಶು ಸಂಗೋಪನೆ ಸಚಿವರು ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಕಣ್ಣೆದುರೇ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗುತ್ತಿದ್ದರೂ, ಜಿಲ್ಲಾ ಚುನಾವಣಾಧಿಕಾರಿ ಸೇರಿ ಅಧಿಕಾರಿಗಳು ಮೌನ ವಹಿಸುತ್ತಿರುವುದೇಕೆ ಎನ್ನುವುದು ತಿಳಿಯುತ್ತಿಲ್ಲ. ಹೀಗಾದರೆ ಕ್ಷೇತ್ರದಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ಹೇಗೆ ನಡೆಯುತ್ತದೆ ಎನ್ನುವ ಪ್ರಶ್ನೆ ಸಾರ್ವಜನಿಕರನ್ನು ಕಾಡುತ್ತಿದೆ ಎಂದು ಹೇಳಿದ್ದಾರೆ.

ಕೂಡಲೇ ಸಚಿವರ ವಿಶೇಷ ಕರ್ತವ್ಯಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಬೇಕು. ಪ್ರವಾಸ ಪಟ್ಟಿ ಬಿಡುಗಡೆಗೆ ನಿರ್ದೇಶನ ನೀಡಿ ನೀತಿ ಸಂಹಿತೆ ಗಾಳಿಗೆ ತೂರುತ್ತಿರುವ ಸಚಿವ ಪ್ರಭು ಚವಾಣ್ ಅವರ ವಿರುದ್ಧವೂ ಕ್ರಮ ಜರುಗಿಸಬೇಕು. ಕ್ಷೇತ್ರದಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಮುಕ್ತ, ನ್ಯಾಯ ಸಮ್ಮತ ಹಾಗೂ ಶಾಂತಿಯುತ ಚುನಾವಣೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.