ಔರಾದ ಹಾಗೂ ಕಮಲನಗರದಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪಿಸಲು ವಡ್ಡೆಯವರಿಂದ ಹೈಕೋಟ್ರ್ಗೆ ಅರ್ಜಿ

(ಸಂಜೆವಾಣಿ ವಾರ್ತೆ)
ಔರಾದ:ಮೇ.29: ಔರಾದ ಹಾಗೂ ಕಮಲನಗರ ತಾಲೂಕಿನಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪಿಸುವ ಬಗ್ಗೆ ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯ ಬೆಂಗಳೂರಿನಲ್ಲಿ ಮೆ.26 ರಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ಸಮಾಜ ಸೇವಕ ಗುರುನಾಥ ವಡ್ಡೆಯವರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿರುತ್ತಾರೆ.
ಈ ಅರ್ಜಿಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಅಭಿವೃದ್ಧಿ ಆಯುಕ್ತರು, ಕರ್ನಾಟಕ ಸರ್ಕಾರ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ, ಕಾರ್ಯದರ್ಶಿಗಳು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಹಾಗೂ ಜಿಲ್ಲಾಧಿಕಾರಿಗಳು, ಬೀದರ ಇವರು ಪ್ರತಿವಾದಿಯಾಗಿರುತ್ತಾರೆ ಎಂದು ವಡ್ಡೆಯವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿರುತ್ತಾರೆ.
2014 ರಿಂದ ಔರಾದನಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪಿಸಬೇಕೆಂದು ಸರ್ಕಾರದ ಮಟ್ಟದಲ್ಲಿ ನಿರಂತರವಾಗಿ ಪ್ರಯತ್ನ ಮಾಡಿರುವುದಾಗಿ ವಡ್ಡೆಯವರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿ, ಔರಾದ ಹಾಗೂ ಕಮಲನಗರದಲ್ಲಿ ಕೈಗಾರಿಕಾ ಪ್ರದೇಶ ಆದರೆ ಇಲ್ಲಿನ ಯುವಕರಿಗೆ ಹೊಸ ಉದ್ಯೋಗಗಳನ್ನು ಸ್ಥಾಪಿಸಲು ಅನುಕೂಲವಾಗಲಿದೆ ಹಾಗೂ ದೊಡ್ಡ ಕೈಗಾರಿಕೆಗಳು ಬರುವುದರಿಂದ ಔರಾದ ಹಾಗೂ ಕಮಲನಗರ ತಾಲೂಕಿನ ಅಭಿವೃದ್ಧಿಗೆ ಬಹಳಷ್ಟು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಔರಾದ ಹಾಗೂ ಕಮಲನಗರದಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪನೆ ಮಾಡುವಲ್ಲಿ ಕ್ಷೇತ್ರದ ಶಾಸಕರು ಹಾಗೂ ಸರ್ಕಾರ ವಿಫಲವಾಗಿದೆ. ಇದರಿಂದ ಔರಾದ ತಾಲೂಕಿನ ಜನರಿಗೆ ಅನ್ಯಾಯವಾಗಿದೆ. ಕೆಲಸಕ್ಕಾಗಿ ಈ ಭಾಗದ ಜನರು ಮಹಾರಾಷ್ಟ್ರ ಹಾಗೂ ತೆಲಂಗಾಣಕ್ಕೆ ವಲಸೆ ಹೋಗುವುದು ಸಾಮಾನ್ಯವಾಗಿದೆ. ಇದನ್ನು ತಪ್ಪಿಸಬೇಕಾದರೆ ಔರಾದನಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪನೆ ಮಾಡುವುದು ಅತ್ಯಂತ ಅವಶ್ಯಕವಾಗಿದೆ. ಆದರೆ ಇಲ್ಲಿಯವರೆಗೆ ಇದು ಸಾಧ್ಯವಾಗಿರುವುದಿಲ್ಲ. ಈವಾಗ ಕ್ಷೇತ್ರದ ಜನರೇ ಇದಕ್ಕಾಗಿ ಹೋರಾಡುವುದು ಅನಿವಾರ್ಯವಾಗಿದೆ. ಅದಕ್ಕಾಗಿ ನಾನು ಈ ಕ್ಷೇತ್ರದ ನಾಗರಿಕನಾಗಿ ಈ ಭಾಗದ ಅಭಿವೃದ್ಧಿಗಾಗಿ ಔರಾದ ಹಾಗೂ ಕಮಲನಗರದಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪಿಸುವ ಬಗ್ಗೆ ಹೈಕೋಟ್ರ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದಾಗಿ ಸಮಾಜ ಸೇವಕ ಗುರುನಾಥ ವಡ್ಡೆಯವರು ತಿಳಿಸಿದ್ದಾರೆ.