
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಆ.೧೨; ಚಿತ್ರದುರ್ಗ ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಹೊರರೋಗಿ ಮತ್ತು ಒಳರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಇಲ್ಲಿ ರೋಗಿಗಳಿಗೆ ನೀಡುವ ಔಷಧಿ ವಿತರಣೆ ವಹಿಯ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಸೂಚನೆ ನೀಡಿದರು.ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ತುರ್ತು ಚಿಕಿತ್ಸಾ ಘಟಕದ ಔಷಧಿ ವಿತರಣೆ ವಹಿಯಲ್ಲಿ ಕೇವಲ ಔಷಧಿ ಪೂರೈಕೆ ಆಗಿರುವ ಮಾಹಿತಿಯನ್ನು ಮಾತ್ರ ದಾಖಲು ಮಾಡಲಾಗುತ್ತಿದೆ. ಇದರ ಜೊತೆಗೆ ರೋಗಿಗಳಿಗೆ ವಿತರಿಸುವ ಔಷಧಿ ಹೆಸರು, ಪ್ರಮಾಣ, ವಿವರವನ್ನೂ ಕೂಡ ರಿಜಿಸ್ಟರ್‍ನಲ್ಲಿ ದಾಖಲು ಮಾಡಬೇಕು ಎಂದು ತಾಕೀತು ಮಾಡಿದರು.ಭಾನುವಾರ ವೈದ್ಯರು ಸಿಗಲ್ಲ, ತುರ್ತು ಸಂದರ್ಭಗಳಲ್ಲಿ ಫೋನ್ ಮಾಡಿದರೂ ಸರಿಯಾಗಿ ಸ್ಪಂದಿಸುವುದಿಲ್ಲ. ಬಡವರು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸಿದ್ದಾರೆ. ಹಾಗಾಗಿ ಪಾಳಿ ಪದ್ಧತಿಯಲ್ಲಿ ಕರ್ತವ್ಯ ನಿರ್ವಹಿಸಲು ವೈದ್ಯರ ವ್ಯವಸ್ಥೆ ಮಾಡಬೇಕು ಎಂದು ಸಾರ್ವಜನಿಕರು ಲೋಕಾಯುಕ್ತರ ಗಮನಸೆಳೆದರು. “ಬಡವರಿಗೆ ಸಮರ್ಪಕವಾಗಿ ಆರೋಗ್ಯ ಸೇವೆ ಒದಗಿಸಬೇಕು. ತಕ್ಷಣ ಸ್ಪಂದಿಸುವ ಕೆಲಸವಾಗಬೇಕು. ಈ ಕುರಿತು ದೂರುಗಳು ಬಂದರೆ ಸೂಕ್ತ ಕ್ರಮವಹಿಸಬೇಕು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ದೇವರಾಜ್ ಅವರಿಗೆ ಸೂಚನೆ ನೀಡಿದರು.ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು, ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗ, ಹೊಸದಾಗಿ ನಿರ್ಮಿಸಲಾಗಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಲೋಕಾಯುಕ್ತ ಜಿಲ್ಲಾ ಪೊಲೀಸ್ ಅಧೀಕ್ಷಕ ವಾಸುದೇವರಾಮ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ದೇವರಾಜ್ ಸೇರಿದಂತೆ ಜಿಲ್ಲಾಸ್ಪತ್ರೆ ಸಿಬ್ಬಂದಿ ಇದ್ದರು.
===========