ಕಂದಕಕ್ಕೆ ಕ್ಯಾಬ್ ಬಿದ್ದು ೭ಮಂದಿ ಸಾವು

ಶ್ರೀನಗರ,ಫೆ.೧- ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಕ್ಯಾಬ್ ಆಯತಪ್ಪಿ ಆಳವಾದ ಕಂದಕಕ್ಕೆ ಬಿದ್ದು ಏಳು ಮಂದಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ..
ಅಪಘಾತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ ಏಳು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಾಶ್ಮೀರದ ಟ್ರಾಫಿಕ್ ರೂರಲ್ ಕಾಶ್ಮೀರದ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ರವೀಂದರ್ ಪಾಲ್ ಸಿಂಗ್ ತಿಳಿಸಿದ್ದಾರೆ.
ಇನ್ನೂ ಪ್ರತ್ಯೇಕ ಘಟನೆಯಲ್ಲಿ, ಜಮ್ಮು ಪ್ರದೇಶದ ಕಿಶ್ತ್ವಾರ್‌ನ ಮರ್ವಾನ್ ಪ್ರದೇಶದಲ್ಲಿ ರಸ್ತೆ ತೆರವು ಕಾರ್ಯದಲ್ಲಿ ತೊಡಗಿದ್ದ ಸ್ನೋ ಕಟರ್ ಯಂತ್ರ ಅಪಘಾತಕ್ಕೀಡಾಗಿ ಇಬ್ಬರು ಸಾವನ್ನಪ್ಪಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಈ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ.
ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ೫ ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ ೧ ಲಕ್ಷ ರೂ. ಪರಿಹಾರ ನೀಡಲಾಗುವುದು. ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ನೆರವನ್ನು ತ್ವರಿತವಾಗಿ ಒದಗಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗುವುದು ಎಂದು ಮನೋಜ್ ಸಿನ್ಹಾ ಅವರು ತಿಳಿಸಿದ್ದಾರೆ.