ಕಚೇರಿ ಸಮಯ ಬದಲಿಸಲು ಒತ್ತಾಯ

ಬೀದರ:ಮಾ.24: ಪ್ರಖರ ಬಿಸಿಲಿನ ಕಾರಣ ಜಿಲ್ಲೆಯ ಸರ್ಕಾರಿ ಕಚೇರಿಗಳ ಸಮಯ ಬದಲಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಒತ್ತಾಯಿಸಿದ್ದಾರೆ.
ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರಿಗೆ ಈ ಕುರಿತು ಮನವಿ ಪತ್ರ ಸಲ್ಲಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಬೇಸಿಗೆಯಲ್ಲಿ ತಾಪಮಾನ ಅಧಿಕ ಇರುತ್ತದೆ. ಸರ್ಕಾರಿ ಕಚೇರಿಗಳಲ್ಲಿ ತಾಪಮಾನ ನಿಯಂತ್ರಿಸುವ ಸೌಲಭ್ಯ ಇಲ್ಲದ ಕಾರಣ ನೌಕರರು ಮಧ್ಯಾಹ್ನದ ಅವಧಿಯಲ್ಲಿ ಕೆಲಸ ನಿರ್ವಹಿಸಲು ತೀವ್ರ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
ಹೆಚ್ಚು ಬಿಸಿಲಿರುವ ಕಾರಣಕ್ಕಾಗಿಯೇ ಪ್ರತಿ ವರ್ಷ ಬೇಸಿಗೆಯಲ್ಲಿ ಕಚೇರಿ ಸಮಯ ಬೆಳಿಗ್ಗೆ 8 ರಿಂದ ಮಧ್ಯಾಹ್ನ 1.30 ರ ವರೆಗೆ ನಿಗದಿಪಡಿಸುತ್ತ ಬರಲಾಗುತ್ತಿದೆ ಎಂದು ಹೇಳಿದ್ದಾರೆ.
ಏಪ್ರಿಲ್ ತಿಂಗಳಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಿಸಿ ಆದೇಶ ಹೊರಡಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕು ಎಂದು ಕೋರಿದ್ದಾರೆ.