
ಬೀದರ:ಮೇ.6:ಜಗತ್ತಿನ ಬೃಹತ್ ಪ್ರಜಾಪ್ರಭುತ್ವ ಹೊಂದಿರುವ ಭಾರತ ವಿಶ್ವದಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನ ಹೊಂದಿದೆ. ಸದೃಢ ಭಾರತದ ನಿರ್ಮಾಣದಲ್ಲಿ ಮತದಾನ ತುಂಬಾ ಅವಶ್ಯಕತೆಯಿದೆ. ಪ್ರಜ್ಞಾವಂತ ಮತದಾರರು, ಪ್ರಜೆಗಳು ತಮ್ಮ ಅಮೂಲ್ಯವಾದ ಮತವನ್ನು ತುಂಬಾ ಜವಾಬ್ದಾರಿಯಿಂದ ಚಲಾಯಿಸಿದಾಗ ಮಾತ್ರ ಅದು ಸಾರ್ಥಕವಾಗುತ್ತದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಎಸ್.ಬಿರಾದಾರರವರು ಬೀದರ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಸಮಾರಂಭದಲ್ಲಿ ವಿಶೇಷಾಧಿಕಾರಿಗಳಾದ ಡಾ.ರವೀಂದ್ರನಾಥ ವಿ.ಗಬಾಡಿಯವರು ಮಾತನಾಡುತ್ತ ಇಂದಿನ ಸಮಾಜ ಅಭಿವೃದ್ಧಿಯ ಪಥದಲ್ಲಿ ಸಾಗಬೇಕಾದರೆ ಎಲ್ಲರೂ ಜಾಗೃತರಾಗಿ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕೆಂದು ಕರೆನೀಡಿದರು. ಕಾರ್ಯಕ್ರಮದಲ್ಲಿ ಬೀದರ ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ.ಪರಮೇಶ್ವರ ನಾಯಕರವರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಎಲ್ಲರಿಗೂ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಸಮಾರಂಭದಲ್ಲಿ ವಿಶ್ವವಿದ್ಯಾಲಯದ ಶಿಕ್ಷಕ/ಶಿಕ್ಷಕೇತರ ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಭಾಗವಹಿಸಿದ್ದರು.