ಕಡ್ಡಾಯ ಆರ್‍ಟಿಪಿಸಿಆರ್ ತಪಾಸಣೆಗೆ ಒಳಪಡಿಸಿ: ಡಾ. ರಾಘವೇಂದ್ರಸ್ವಾಮಿ

ಬ್ಯಾಡಗಿ, ಜೂ 9: ಖಾಸಗಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಐ.ಎಲ್.ಎ. ಮತ್ತು ಸಾರಿ ಲಕ್ಷಣಗಳಿದ್ದರೆ ಕಡ್ಡಾಯವಾಗಿ ಆರ್.ಟಿ.ಪಿ.ಸಿ.ಆರ್. ತಪಾಸಣೆಗೆ ಒಳಪಡಿಸಬೇಕು. ಒಂದು ವೇಳೆ ಆಸ್ಪತ್ರೆಯಲ್ಲಿ ವ್ಯವಸ್ಥೆ ಇಲ್ಲದಿದ್ದರೆ ತಾಲೂಕಾಸ್ಪತ್ರೆಗೆ ಕಳಿಸಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಘವೇಂದ್ರಸ್ವಾಮಿ ಖಾಸಗಿ ಆಸ್ಪತ್ರೆಯ ವೈದ್ಯರಿಗೆ ಸೂಚಿಸಿದ್ದಾರೆ.
ಪಟ್ಟಣದಲ್ಲಿರುವ ನೋಂದಾಯಿತ ಖಾಸಗಿ ಆಸ್ಪತ್ರೆಗಳಿಗೆ ಹಾಗೂ ಕೋವಿಡ್ ಕೇರ್ ಸೆಂಟರಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಆಸ್ಪತ್ರೆಗೆ ಬರುವ ರೋಗಿಗಳಿಗೆ ಕೋವಿಡ್ ಸೋಂಕು ತಗುಲಿದ್ದ ಸಂದರ್ಭದಲ್ಲಿ ತಾವೇ ಸ್ವತಃ ಚಿಕಿತ್ಸೆಗೆ ಮುಂದಾಗಬಾರದು. ಈ ಬಗ್ಗೆ ಆರೋಗ್ಯಾಧಿಕಾರಿಗಳಿಗೆ ಮಾಹಿತಿ ನೀಡಿ. ತಾಲೂಕಾ ಆಸ್ಪತ್ರೆಯ ತಂಡ ತಪಾಸಣೆ ಮಾಡಲಿದೆ. ರೆಮ್‍ಡಿಸಿವಿರ್ ಲಸಿಕೆಯನ್ನು ಸರ್ಕಾರದ ಮಾರ್ಗಸೂಚಿಯಂತೆ ಬಳಸಿ. ಖಾಸಗಿ ಆಸ್ಪತ್ರೆಗಳಲ್ಲಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ, ಕೈ ತೊಳೆಯುವುದು, ಸ್ಯಾನಿಟೈಸರ್ ಬಳಕೆಯನ್ನು ಕಡ್ಡಾಯವಾಗಿ ಮಾಡಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ತಾಲೂಕಾ ಆರೋಗ್ಯಾಧಿಕಾರಿ ಡಾ.ಸುಹೀಲ್ ಹರವಿ, ಕಾರ್ಯಕ್ರಮ ವ್ಯವಸ್ಥಾಪಕ ಸದಾನಂದ ಚಿಕ್ಕಮಠ, ಚಿಕ್ಕಬಾಸೂರ ಕೇಂದ್ರದ ವೈದ್ಯಕೀಯ ಅಧಿಕಾರಿ ಗಣೇಶ ಮುತ್ತಳ್ಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.