ಕಡ್ಡಾಯ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ


ಹೊಸಪೇಟೆ: ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ಸೋಮವಾರ ನಗರದ ಪ್ರಮುಖ ಬೀದಿಗಳಲ್ಲಿ ಕಡ್ಡಾಯ ಮತದಾನ ಜಾಗೃತಿ ಜಾಥಾ ನಡೆಯಿತು.
ಹೊಸಪೇಟೆ ನಗರದ ಜೈ ಭೀಮ್ ವೃತ್ತದಲ್ಲಿ ಸೋಮವಾರ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಬಿ. ಸದಾಶಿವ ಪ್ರಭು ಅವರು ಕಡ್ಡಾಯ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿ ನಂತರ ಜನಜಾಗೃತಿ ಜಾಥಾಗೆ ಚಾಲನೆ ನೀಡಿದರು.
ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಕಡ್ಡಾಯ ಮತದಾನದ ಕುರಿತು ಘೋಷಣೆಗಳನ್ನು ಕೂಗುತ್ತಾ ನಗರದ ಪ್ರಮುಖ ವೃತ್ತಗಳಲ್ಲಿ ಜನಜಾಗೃತಿ ಜಾಥಾ ನಡೆಸಿದರು.
ಮನೆಮನೆ ಭೇಟಿ:
ಜನಜಾಗೃತಿ ಜಾಥಾ ನಂತರ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಇಲಾಖಾ ಅಧಿಕಾರಿಗಳು ಕಳೆದ ಚುನಾವಣೆ ಸಮಯದಲ್ಲಿ ಕಡಿಮೆ ಪ್ರಮಾಣದ ಮತದಾನ ಆಗಿರುವ ವಾರ್ಡ್‍ಗಳಿಗೆ ತೆರಳಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಜಾಗೃತಿ ಮೂಡಿಸಿದರು.
ಎಂ.ಜೆ. ನಗರದ ವಿವಿಧ ಕ್ರಾಸ್‍ಗಳಲ್ಲಿ ಹಾಗೂ ಬಸವೇಶ್ವರ ಬಡಾವಣೆಗೆ ತೆರಳಿ ಮತದಾರರಲ್ಲಿ ಜಾಗೃತಿ ಮೂಡಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ವೀರನಗೌಡ ಸೇರಿದಂತೆ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.