
ರಾಮನಗರ,ಮೇ.೭-ಅಪಾರ ಕುತೂಹಲ ಕೆರಳಿಸಿರುವ ವಿಧಾನಸಭಾ ಚುನಾವಣೆಯ ಪ್ರಚಾರದ ಭರಾಟೆ ಅಂತ್ಯಗೊಳ್ಳಲು ಒಂದು ದಿನ ಮಾತ್ರ ಬಾಕಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಪ್ರಚಾರದ
ಅಖಾಡ ಮತ್ತಷ್ಟು ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೋಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲಗ್ಗೆ ಹಾಕಿ ಇಂದು ಶಕ್ತಿ ಪ್ರದರ್ಶನ ನಡೆಸಿದರು.ಕಂದಾಯ ಸಚಿವ ಆರ್.ಅಶೋಕ್ ಸ್ಪರ್ಧಿಸಿದ್ದು, ಈ ಕ್ಷೇತ್ರ ತೀವ್ರ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಮುಖ್ಯಮಂತ್ರಿ ಬೊಮ್ಮಾಯಿಯವರು ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿದರು.
ಕನಕಪುರದ ಕೆಎಸ್‌ಆರ್‌ಟಿಸಿ ಡಿಪೋದಿಂದ ತಾಲೂಕು ಕಚೇರಿಯವರೆಗೂ ಭರ್ಜರಿ ರೋಡ್ ಶೋ ನಡೆಸಿದರು, ಮಾರ್ಗದುದ್ದಕ್ಕೂ ಕಾರ್ಯಕರ್ತರ ದಂಡು ಹಾಗೂ ಸಚಿವ ಅಶೋಕ್ ಸಾಥ್ ನೀಡಿದರು.ಈ ವೇಳೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯಕ್ಕೆ ಸಾಕಷ್ಟು ಅನುಕೂಲವಾಗಿದ್ದು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.