ಕನಿಷ್ಠ ವೇತನ ಆದೇಶ ಹೊರಡಿಸಲು ಒತ್ತಾಯ

ಬ್ಯಾಡಗಿ, ನ 23: ರಾಜ್ಯ ಸರಕಾರ ಗ್ರಾಮ ಪಂಚಾಯತಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಸಿಬ್ಬಂದಿಗಳಿಗೆ ಕನಿಷ್ಠ ವೇತನ ರೂ. 36,000 ಜಾರಿಗೊಳಿಸಿ ಆದೇಶ ಹೊರಡಿಸಬೇಕು ಎಂದು ಗ್ರಾಮ ಪಂಚಾಯತಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ.ಬಿ ನಾಡಗೌಡ ರಾಜ್ಯ ಸರಕಾರವನ್ನು ಒತ್ತಾಯಿಸಿದರು.
ಪಟ್ಟಣದ ತಾಲೂಕ ಪಂಚಾಯತಿ ಸಭಾಂಗಣದಲ್ಲಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘಟನೆಯು ಆಯೋಜಿಸಿದ್ದ ತಾಲೂಕಾ ಮಟ್ಟದ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಲವು ದಶಕಗಳಿಂದ ಅತ್ಯಂತ ಕಡಿಮೆ ವೇತನದಲ್ಲಿ ದುಡಿಯುತ್ತಿರುವ ಪಂಚಾಯತಿ ಸಿಬ್ಬಂದಿಗಳಿಗೆ ಸೇವಾ ರಿಜಿಸ್ಟರ್ ನಿರ್ವಹಿಸಲು ಅವಕಾಶವಿಲ್ಲ. 2006 ರಲ್ಲೇ ಸರಕಾರ ಈ ಕುರಿತು ಆದೇಶ ಮಾಡಿದೆ. ಇದರ ಜೊತೆಗೆ ಕನಿಷ್ಠ ವೇತನ ಸೇರಿದಂತೆ ಅಗತ್ಯ ಸೌಕರ್ಯಗಳು ದೊರೆಯುತ್ತಿಲ್ಲ. ಸರಕಾರ ನೌಕರರನ್ನು ಅತ್ಯಂತ ಕನಿಷ್ಠವಾಗಿ ನಡೆಸಿಕೊಳ್ಳುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದರಲ್ಲದೇ, ಸ್ವಚ್ಛತಾ ಕೆಲಸಗಾರರು, ನೀರಗಂಟಿ, ಸಿಪಾಯಿ ಸೇರಿದಂತೆ ಎಲ್ಲ ಸಿಬ್ಬಂದಿಗಳಿಗೆ ಸಮವಸ್ತ್ರ, ಶೂ, ಕೈಗವಸು ಸೇರಿದಂತೆ ಅಗತ್ಯ ಪರಿಕರಗಳನ್ನು ಕೂಡಲೇ ಗ್ರಾಮ ಪಂಚಾಯತಿ ನಿಧಿಯಿಂದ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಾಜ್ಯ ಉಪಾಧ್ಯಕ್ಷ ಬಿ.ಐ. ಈಳಗೇರ ಮಾತನಾಡಿ, ಸಿಐಟಿಯು ನೇತೃತ್ವದ ಗ್ರಾಮ ಪಂಚಾಯತಿ ನೌಕರ ಸಂಘದ ಹೋರಾಟದಿಂದ ಕೆಲವು ಪಂಚಾಯತಿಗಳಲ್ಲಿ ಸಿಬ್ಬಂದಿಗಳ ಮೇಲೆ ನಡೆಯುತ್ತಿದ್ದ ದೌರ್ಜನ್ಯ, ದಬ್ಬಾಳಿಕೆಯನ್ನು ತಡೆಗಟ್ಟಲು ಸಾಧ್ಯವಾಗಿದೆ. ಸಂಘದ ಕಾರ್ಯಕ್ರಮಗಳು ಹಾಗೂ ಹೋರಾಟಗಳ ಕರೆಯ ಜಾರಿಗೆ ಮುಂದಾಗಬೇಕು. ಪಿಂಚಣಿ ಸೌಲಭ್ಯ ಸೇರಿದಂತೆ ನೌಕರರು ತಮ್ಮ ಹಕ್ಕುಗಳನ್ನು ಪಡೆಯಲು ಸಂಘಟಿತರಾಗಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಮಲ್ಲಿಕಾರ್ಜುನ ಮಾತನಾಡಿ, ಪಂಚಾಯತಿಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳು ತಮ್ಮ ಸಮಸ್ಯೆಗಳನ್ನು ಗಮನಕ್ಕೆ ತಂದರೆ ನಮ್ಮ ವ್ಯಾಪ್ತಿಯ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು. ಇದೇ ಸಂದರ್ಭದಲ್ಲಿ ತಾಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಸಮಸ್ಯೆಗಳನ್ನು ಪರಿಹರಿಸುವ ಕುರಿತು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗೆ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಡಿವೈಎಫ್‍ಐ ರಾಜ್ಯ ಉಪಾಧ್ಯಕ್ಷ ಬಸವರಾಜ ಪೂಜಾರ, ಸಿಐಟಿಯು ಜಿಲ್ಲಾ ಸಂಚಾಲಕ ವಿನಾಯಕ ಕುರುಬರ, ತಾ.ಪಂ ವ್ಯವಸ್ಥಾಪಕ ಪ್ರಕಾಶ ಹಿರೇಮಠ, ಜಿಲ್ಲಾಧ್ಯಕ್ಷ ಅಂದಾನೆಪ್ಪ ಹೆಬಸೂರ, ಜಿಲ್ಲಾ ಕಾರ್ಯದರ್ಶಿ ಜಗದೀಶ ಕೋಟಿ, ಜಿಲ್ಲಾ ಖಜಾಂಚಿ ಸುಭಾಸ ಸೊಟ್ಟಪ್ಪನವರ, ಹೇಮಂತ ಲಮಾಣಿ, ಸಂತೋಷ ಕೂರಗುಂದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ತಾಲೂಕಾಧ್ಯಕ್ಷ ಕುಮಾರ ದೇವಗಿರಿ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ತಾಲೂಕಾ ಕಾರ್ಯದರ್ಶಿ ವೀರನಗೌಡ ಚ. ಪಾಟೀಲ ಸ್ವಾಗತಿಸಿದರು. ಫಕ್ಕಿರೇಶ ಹಕ್ಕಿಮರೆಣ್ಣನವರ ವಂದಿಸಿದರು.