ಕಮಲನಗರ ತಾಲೂಕಿನಲ್ಲಿ ಅರಳಿದ ಕಮಲ

ಬೀದರ:ನ.8: ಕಮಲನಗರ ತಾಲೂಕು ಪಂಚಾಯಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ನ.7ರಂದು ನಡೆದ ಚುನಾವಣೆಯಲ್ಲಿ ಬಿಜೆಪಿಯು ಭರ್ಜರಿ ಮೇಲುಗೈ ಸಾಧಿಸಿದೆ. ಗಿರೀಶ್ ಧನರಾಜ್ ಒಡೆಯರ್ ಅಧ್ಯಕ್ಷರಾಗಿ ಮತ್ತು ಕಸ್ತೂರಬಾಯಿ ಬಿರಾದಾರ ಅವರು ಉಪಾಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ.

ಒಟ್ಟು 12 ಸದಸ್ಯರ ಪೈಕಿ ಕಾಂಗ್ರೆಸ್‍ನ ಒಬ್ಬರನ್ನು ಒಳಗೊಂಡು ಒಟ್ಟು 8 ಜನರು ಬಿಜೆಪಿ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದರಿಂದ ಬಿಜೆಪಿ ಅಭ್ಯರ್ಥಿ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ

ಪಶು ಸಂಗೋಪನೆ, ವಕ್ಫ್, ಹಜ್ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ಹೊಸದಾಗಿ ಚುನಾಯಿತರಾದ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಸನ್ಮಾನಿಸಿದರು. ಬಳಿಕ ಮಾತನಾಡಿ, ಹೊಸದಾಗಿ ರಚನೆಯಾಗಿರುವ ಕಮಲನಗರ ತಾಲೂಕನ್ನು ಶೈಕ್ಷಣಿಕ, ಆರ್ಥಿಕ ರಂಗ ಸೇರಿದಂತೆ ಎಲ್ಲಾ ರೀತಿಯಿಂದಲು ಇನ್ನಷ್ಟು ಅಭಿವೃದ್ಧಿಪಡಿಸಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರವು ಎಲ್ಲಾ ರೀತಿಯ ನೆರವು ನೀಡಲು ಸಿದ್ಧವಿದೆ. ಇದಕ್ಕೆ ತಾಲೂಕು ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು ಕೈಜೋಡಿಸಬೇಕಿದೆ ಎಂದು ತಿಳಿಸಿದರು.

ಕಮಲನಗರ ಮುಖಂಡರು ಬಿಜೆಪಿಗೆ ಸೇರ್ಪಡೆ:
ಬಿಜೆಪಿಯ ತತ್ವ ಮತ್ತು ಸಿದ್ದಾಂತಗಳಿಗೆ ಮನಸೋತು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಭಿವೃದ್ದಿ ಕಾರ್ಯಗಳಿಂದ ಪ್ರೇರಣೆಗೊಂಡು ಕಮಲನಗರದ ಮುಖಂಡರಾದ ಸೋಮನಾಥ ಖಡಕೆ ಮುಧೋಳ ಹಾಗೂ ಕಸ್ತೂರಬಾಯಿ ಬಿರಾದಾರ ಸಂಗಮ್ ಅವರು ನ.7ರಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

ಹೊಸದಾಗಿ ಪಕ್ಷಕ್ಕೆ ಸೇರ್ಪಡೆಯಾದ ಮುಖಂಡರನ್ನು ಪಶು ಸಂಗೋಪನೆ, ವಕ್ಫ್, ಹಜ್ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ಪಕ್ಷದ ಧ್ವಜ ನೀಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು.

ಈ ವೇಳೆ ಮುಖಂಡ ಸೋಮನಾಥ ಖಡಕೆ ಮುಧೋಳ ಮಾತನಾಡಿ, ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಹಾಗೂ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಹಲವಾರು ಜನಪರ ಯೋಜನೆಗಳನ್ನು ರೂಪಿಸಿ, ಜನರ ಒಳಿತಿಗೆ ಶ್ರಮಿಸುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ಅಧಿಕಾರಕ್ಕೆ ಬಂದಾಗಿನಿಂದ ಕಮಲನಗರ ತಾಲೂಕಿನ ಅಭಿವೃದ್ಧಿಗೆ ಉತ್ತಮ ರೀತಿಯಿಂದ ಕೆಲಸ ಮಾಡುತ್ತಿದ್ದಾರೆ. ಇವರೆಲ್ಲರ ಕಾರ್ಯಗಳನ್ನು ಮೆಚ್ಚಿಕೊಂಡು ಬಿಜೆಪಿಗೆ ಸೇರ್ಪಡೆಯಾಗಿದ್ದೇವೆ. ಪಕ್ಷದ ವರಿಷ್ಠರ ಸಲಹೆ ಸೂಚನೆಗಳಂತೆ ತಾಲೂಕಿನ ಏಳಗೆಗೆ ಪ್ರಯತ್ನಿಸುವೆ ಎಂದು ಹೇಳಿದರು.

ಕಸ್ತೂರಬಾಯಿ ಬಿರಾದಾರ ಸಂಗಮ್ ಅವರು ಮಾತನಾಡಿ, ಕೇಂದ್ರ ಮತ್ತು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರಗಳು ಹಿಂದೆಂದಿಗಿಂತಲೂ ಉತ್ತಮವಾಗಿ ಕೆಲಸ ಮಾಡುತ್ತಿವೆ. ಪ್ರಧಾನ ಮಂತ್ರಿಗಳು, ಮುಖ್ಯಮಂತ್ರಿಯವರು, ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯವೈಖರಿಯು ನನಗೆ ತುಂಬಾ ಹಿಡಿಸಿದೆ. ಕಮಲನಗರ ತಾಲೂಕಿನ ಅಭಿವೃದ್ಧಿಗೆ ಶಕ್ತಿಮೀರಿ ಪ್ರಯತ್ನಿಸುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಮಾರುತಿ ಚವ್ಹಾಣ್, ಬಿಜೆಪಿ ತಾಲೂಕು ಅಧ್ಯಕ್ಷರಾದ ರಾಮಶೆಟ್ಟಿ ಪನ್ನಾಳೆ, ಜಿಲ್ಲಾ ಉಪಾಧ್ಯಕ್ಷ ಪ್ರಕಾಶ ಟೊಣ್ಣೆ, ಬಂಡೆಪ್ಪ ಕಂಟೆ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಅರಹಂತ ಸಾವಳೆ, ಸಚಿನ್ ರಾಠೋಡ್, ವಸಂತ ಬಿರಾದಾರ, ಶಿವು ವಡ್ಡೆ, ತಾಲೂಕು ಪಂಚಾಯತ್ ಸದಸ್ಯರು ಹಾಗೂ ಇತರೆ ಮುಖಂಡರು ಉಪಸ್ಥಿತರಿದ್ದರು.